ಬುಡಕಟ್ಟು ಸಮುದಾಯಗಳ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗೆ ಸರ್ಕಾರ ಬದ್ಧ
ಮೈಸೂರು: ಬ್ರಿಟಿಷರ ವಸಾಹತುಶಾಹಿ ಆಡಳಿತದ ವಿರುದ್ಧ ಹೋರಾಡಿ, ಬುಡಕಟ್ಟು ಸಮುದಾಯಗಳ ಹಕ್ಕು, ಅಸ್ಮಿತೆ ಹಾಗೂ ಸ್ವಾಭಿಮಾನದ ರಕ್ಷಣೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಭಗವಾನ್ ಶ್ರೀ ಬಿರ್ಸಾ ಮುಂಡಾ ಅವರ ಹೋರಾಟ ಮತ್ತು ತ್ಯಾಗ ಸದಾ ಸ್ಮರಣೀಯ. ಅವರ ಆದರ್ಶಗಳು ಇಂದಿನ ಯುವಪೀಳಿಗೆಗೆ ಸದಾ ಸ್ಫೂರ್ತಿಯಾಗಬೇಕು ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದರು.
ನಗರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಭಗವಾನ್ ಶ್ರೀ ಬಿರ್ಸಾ ಮುಂಡಾ ಅವರ 151ನೇ ಜಯಂತಿ ಹಾಗೂ ಜನಜಾತಿಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು ಬುಡಕಟ್ಟು ಸಮುದಾಯಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವುದು ಅತ್ಯಂತ ಅಗತ್ಯವಾಗಿದೆ. ಶಿಕ್ಷಣವು ಕೇವಲ ಉದ್ಯೋಗ ಪಡೆಯುವ ಸಾಧನವಲ್ಲ, ಅದು ತಮ್ಮ ಹಕ್ಕುಗಳ ಬಗ್ಗೆ ಅರಿವು ಮೂಡಿಸುವ, ಸ್ವಾಭಿಮಾನದಿಂದ ಬದುಕುವ ಹಾಗೂ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಶಕ್ತಿಯನ್ನು ನೀಡುತ್ತದೆ. ಆದ್ದರಿಂದ ಪ್ರತಿಯೊಬ್ಬ ಪೋಷಕರೂ ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಚಿವರು ಮನವಿ ಮಾಡಿದರು.
ಸಾಮಾಜಿಕ ನ್ಯಾಯ, ಸಮಾನ ಅವಕಾಶ ಹಾಗೂ ಸರ್ವರನ್ನೂ ಒಳಗೊಂಡ ಅಭಿವೃದ್ಧಿಯ ಆಶಯದೊಂದಿಗೆ ರಾಜ್ಯ ಸರ್ಕಾರವು ಆದಿವಾಸಿ ಮತ್ತು ಬುಡಕಟ್ಟು ಸಮುದಾಯಗಳ ಸಮಗ್ರ ಏಳಿಗೆಗೆ ಬದ್ಧವಾಗಿದೆ. ಈ ಸಮುದಾಯಗಳ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ಕರ್ನಾಟಕ ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪಿಸುವ ಕುರಿತು ಸರ್ಕಾರದ ಗಮನಕ್ಕೆ ತರಲಾಗುವುದು. ಅಲ್ಲದೆ, ಭಗವಾನ್ ಶ್ರೀ ಬಿರ್ಸಾ ಮುಂಡಾ ಅವರ ಜಯಂತಿಯನ್ನು ರಾಜ್ಯ ಸರ್ಕಾರದ ವತಿಯಿಂದಲೂ ಅಧಿಕೃತವಾಗಿ ಆಚರಿಸುವಂತೆ ಪ್ರಸ್ತಾಪಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಅತ್ಯಧಿಕ ಅಂಕ ಗಳಿಸಿದ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಿದ ಸಚಿವರು, ವಿದ್ಯಾರ್ಥಿಗಳ ಸಾಧನೆ ಸಮುದಾಯದ ಇತರ ಮಕ್ಕಳಿಗೂ ಪ್ರೇರಣೆಯಾಗಬೇಕು. ಶಿಕ್ಷಣ ಮತ್ತು ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚಿನ ಸಾಧನೆ ಮಾಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಹಾರೈಸಿದರು.
ಬುಡಕಟ್ಟು ಸಮುದಾಯದ ಮುಖಂಡರು ಸಲ್ಲಿಸಿದ ವಿವಿಧ ಬೇಡಿಕೆಗಳ ಮನವಿಯನ್ನು ಸ್ವೀಕರಿಸಿದ ಸಚಿವರು, ಅವುಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ಸಮುದಾಯಕ್ಕೆ ವರ್ಷಪೂರ್ತಿ ಆಹಾರ ಕಿಟ್ ವಿತರಣೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುವಲ್ಲಿ ವಿಶೇಷ ಕಾಳಜಿ ವಹಿಸಿದ ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಧನ್ಯವಾದಗಳನ್ನು ಅರ್ಪಿಸಿದರು.
ಕಾರ್ಯಕ್ರಮದಲ್ಲಿ ಹೆಚ್.ಡಿ.ಕೋಟೆ ಶಾಸರಾದ ಅನಿಲ್ ಚಿಕ್ಕಮಾದು, ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ನ ನಿಕಟಪೂರ್ವ ಅಧ್ಯಕ್ಷರಾದ ಡಾ. ಬಿ.ಜೆ. ವಿಜಯ್ ಕುಮಾರ್, ಕರ್ನಾಟಕ ಸರ್ಕಾರದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಡಾ. ಅಶೋಕ್ ಡಿ, ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಉಪನಿರ್ದೇಶಕಿ ಆರ್. ಗಿರಿಜಾಂಬ ಹೆಚ್.ಎಸ್. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರು ಹಾಗೂ ಬುಡಕಟ್ಟು ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
