ಬೆಂಗಳೂರು:ಜಿಕೆವಿಕೆ ಆವರಣದಲ್ಲಿ ನಡೆಯುತ್ತಿರುವ ಕೃಷಿ ಮೇಳ 2026ರಲ್ಲಿ ನಿಷೇಧಿತ ಏಕಬಳಕೆಯ ಪ್ಲಾಸ್ಟಿಕ್ ಬಳಕೆ ಹಾಗೂ ಕಸವನ್ನು ಎಲ್ಲೆಂದರಲ್ಲಿ ಎಸೆಯುವ ಮೂಲಕ ಸ್ವಚ್ಛತಾ ನಿಯಮಗಳನ್ನು ಉಲ್ಲಂಘಿಸಿದ ಮಳಿಗೆಗಳ ವಿರುದ್ಧ ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಶ್ರೀ ಪೊಮ್ಮಲ ಸುನೀಲ್ ಕುಮಾರ್ ಅವರ ನಿರ್ದೇಶನದಂತೆ ಬ್ಯಾಟರಾಯನಪುರ ವಿಭಾಗದ ಕಿರಿಯ ಆರೋಗ್ಯ ನಿರೀಕ್ಷಕರು ಮತ್ತು ಮಾರ್ಷಲ್ಗಳು ಕ್ರಮ ಕೈಗೊಂಡಿದ್ದಾರೆ.
ಕೃಷಿ ಮೇಳದ ಮಳಿಗೆಗಳಿಗೆ ಭೇಟಿ ನೀಡಿದ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡದಂತೆ ಮತ್ತು ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡುವಂತೆ ಜಾಗೃತಿ ಮೂಡಿಸಿದರು. ನಿಯಮ ಉಲ್ಲಂಘಿಸಿದ ಮಳಿಗೆಗಳಿಗೆ ಒಟ್ಟು ₹4,000 ದಂಡ ವಿಧಿಸಿ, ಸ್ವಚ್ಛತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದರು.
ಇದೇ ಸಂದರ್ಭದಲ್ಲಿ, ಕೃಷಿ ಮೇಳ 2026ನ್ನು ಸಂಪೂರ್ಣವಾಗಿ ಶೂನ್ಯ ತ್ಯಾಜ್ಯ (Zero Waste Event) ಕಾರ್ಯಕ್ರಮವನ್ನಾಗಿ ಆಯೋಜಿಸುವಂತೆ ಪಾಲಿಕೆಯ ವತಿಯಿಂದ ಸಂಬಂಧಪಟ್ಟ ಆಯೋಜಕರಿಗೆ ನೋಟಿಸ್ ನೀಡಲಾಗಿದೆ. ಯಲಹಂಕ ಇಕೋ ಗ್ರೂಪ್ ನ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ, ಮೇಳದಾದ್ಯಂತ ತ್ಯಾಜ್ಯ ನಿರ್ವಹಣೆಗೆ ಸೂಕ್ತ ವ್ಯವಸ್ಥೆ ರೂಪಿಸುವಂತೆ ಸೂಚಿಸಲಾಗಿದೆ.
ಮೇಳದಲ್ಲಿ ನಿಷೇಧಿತ ಏಕಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ತಡೆಯುವುದು, ತ್ಯಾಜ್ಯವನ್ನು ಮೂಲದಲ್ಲಿಯೇ ವಿಂಗಡಿಸುವುದು, ಹಸಿರು, ನೀಲಿ, ಕೆಂಪು ಮತ್ತು ಕಪ್ಪು ಬಣ್ಣದ ಕಸದ ತೊಟ್ಟಿಗಳ ಮೂಲಕ ಹಸಿ ಕಸ, ಒಣ ಕಸ, ನೈರ್ಮಲ್ಯ ತ್ಯಾಜ್ಯ ಹಾಗೂ ಇತರೆ ತ್ಯಾಜ್ಯವನ್ನು ಪ್ರತ್ಯೇಕವಾಗಿ ಸಂಗ್ರಹಿಸುವುದು ಸೇರಿದಂತೆ ವೈಜ್ಞಾನಿಕ ತ್ಯಾಜ್ಯ ನಿರ್ವಹಣಾ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಲಾಗಿದೆ.
ಕೃಷಿ ಮೇಳದಂತಹ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸ್ವಚ್ಛತೆ ಕಾಪಾಡುವುದು ಆಯೋಜಕರು, ಮಳಿಗೆದಾರರು ಹಾಗೂ ಸಾರ್ವಜನಿಕರ ಜವಾಬ್ದಾರಿಯಾಗಿದೆ. ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡದಂತೆ ಮತ್ತು ತ್ಯಾಜ್ಯವನ್ನು ನಿಯಮಾನುಸಾರ ವಿಲೇವಾರಿ ಮಾಡುವಂತೆ ಬೆಂಗಳೂರು ಉತ್ತರ ನಗರ ಪಾಲಿಕೆ ಮನವಿ ಮಾಡಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಮುಂದಿನ ದಿನಗಳಲ್ಲಿಯೂ ದಂಡವನ್ನು ವಿಧಿಸುವ ಮೂಲಕ ಅಗತ್ಯ ಕ್ರಮ ಕೈಗೊಳ್ಳಲಾಗುವುದು.
