ಸಮಗ್ರ ಸುದ್ದಿ

ವಿಧಾನ ಪರಿಷತ್ ಸದಸ್ಯರಾಗಿ ಎ.ಪಿ. ರಂಗನಾಥ್, ಶಶೀಲ್ ಜಿ. ನಮೋಶಿ, ಎಸ್.ವಿ. ಸಂಕನೂರ ಮತ್ತು ಕೆ.ಎಂ. ಸುರೇಶ್ ಪ್ರಮಾಣ ವಚನ ಸ್ವೀಕಾರ

Share

ಬೆಂಗಳೂರು:ವಿಧಾನ ಪರಿಷತ್ ಸದಸ್ಯರಾಗಿ ಎ.ಪಿ. ರಂಗನಾಥ್, ಶಶೀಲ್ ಜಿ. ನಮೋಶಿ, ಎಸ್.ವಿ. ಸಂಕನೂರ ಮತ್ತು ಕೆ.ಎಂ. ಸುರೇಶ್ ಅವರು ಇಂದು ವಿಧಾನ ಪರಿಷತ್ತಿನ ಸಭಾಪತಿ ಸಲೀಂ ಅಹಮ್ಮದ್ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು.

ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ ಗೌರವಾನ್ವಿತ ಸಭಾಪತಿಗಳು ನೂತನ ಸದಸ್ಯರುಗಳಿಗೆ ಪ್ರಮಾಣ ವಚನ ಬೋಧಿಸಿದರು.

ಇತ್ತೀಚೆಗೆ ಅಕ್ಟೋಬರ್ 2026ರಲ್ಲಿ ನಡೆದ ಕರ್ನಾಟಕ ವಿಧಾನ ಪರಿಷತ್ತಿನ 2 ಶಿಕ್ಷಕರ ಮತ್ತು 2 ಪದವೀಧರರ ಕ್ಷೇತ್ರಗಳ ಚುನಾವಣೆಯಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಎ.ಪಿ. ರಂಗನಾಥ್, ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಬಿ.ಜೆ.ಪಿ ಅಭ್ಯರ್ಥಿಯಾಗಿ ಶಶೀಲ್ ಜಿ. ನಮೋಶಿ, ಪಶ್ಚಿಮ ಪದವೀಧರರ ಕ್ಷೇತ್ರದಿಂದ ಬಿ.ಜೆ.ಪಿ ಅಭ್ಯರ್ಥಿಯಾಗಿ ಎಸ್.ವಿ. ಸಂಕನೂರ ಮತ್ತು ಆಗ್ನೇಯ ಪದವೀಧರರ ಕ್ಷೇತ್ರದಿಂದ ಬಿ.ಜೆ.ಪಿ. ಅಭ್ಯರ್ಥಿಯಾಗಿ ಕೆ.ಎಂ. ಸುರೇಶ್ ಆಯ್ಕೆಯಾಗಿದ್ದರು.

ನೂತನ ಸದಸ್ಯರಿಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಭಿನಂದನೆ:

ಕರ್ನಾಟಕ ವಿಧಾನ ಪರಿಷತ್ತಿಗೆ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಗಳಿಂದ ನೂತನವಾಗಿ ಚುನಾಯಿತರಾದ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರು ಪಾಲ್ಗೊಂಡು, ನೂತನ ಸದಸ್ಯರಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.

ಶಿಕ್ಷಕರು ಮತ್ತು ಪದವೀಧರರು ಸಮಾಜದ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಅವರ ಆಶೋತ್ತರಗಳಿಗೆ ಧ್ವನಿಯಾಗಿ, ಶಿಕ್ಷಣ ಕ್ಷೇತ್ರದ ಅಭಿವೃದ್ಧಿ, ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಹಾಗೂ ಪದವೀಧರ ಯುವಜನರಿಗೆ ಉತ್ತಮ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ನೂತನ ಸದಸ್ಯರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿ. ವಿಧಾನ ಪರಿಷತ್ತಿನ ಘನತೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಮೂಲಕ ರಾಜ್ಯದ ಶೈಕ್ಷಣಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ನೂತನ ಸದಸ್ಯರು ತಮ್ಮದೇ ಆದ ಕೊಡುಗೆ ನೀಡಲಿ ಎಂದು ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಅವರು ಆಶಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ತಿನ ಉಪಸಭಾಪತಿಗಳಾದ ಡಾ. ಉಮಾಶ್ರೀ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ ಸದಸ್ಯರಾದ ಟಿ.ಎ. ಶರವಣ, ಎನ್. ರವಿಕುಮಾರ್, ವಿಧಾನ ಪರಿಷತ್ತಿನ ಕಾರ್ಯದರ್ಶಿ ಶ್ರೀಮತಿ ಜ್ಯೋತಿ ಹಾಗೂ ಸದಸ್ಯರುಗಳ ಕುಟುಂಬ ವರ್ಗದವರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.


Share

You cannot copy content of this page