ಬೇಲೂರು:ಒಂದು ತಿಂಗಳೊಳಗೆ ಪುಂಡಾನೆಗಳು ಸೇರಿದಂತೆ ಎಲ್ಲ 56 ಕಾಡಾನೆಗಳನ್ನು ಸೆರೆಹಿಡಿದು ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸಲಾಗುವುದು ಎಂದು ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಎಂ. ಶಿವಲಿಂಗೇಗೌಡ ಭರವಸೆ ನೀಡಿದರು.
ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕಾಡಾನೆಗಳ ದಾಳಿಗೆ ಮೂರು ದಿನಗಳ ಅಂತರದಲ್ಲಿ ಇಬ್ಬರು ಸಾವಿಗೀಡಾದ ಹಿನ್ನೆಲೆಯಲ್ಲಿ ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಇಂದು ಮೂಡಿಗೆರೆ–ಬೇಲೂರು ರಸ್ತೆಯಲ್ಲಿ ಸಾರ್ವಜನಿಕರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಸಚಿವರು ಖುದ್ದು ಭೇಟಿ ನೀಡಿ ಸ್ಥಳೀಯರ ಅಹವಾಲು ಆಲಿಸಿದರು.
ಸ್ಥಳೀಯರ ಆತಂಕ ಮತ್ತು ಆಕ್ರೋಶಕ್ಕೆ ಸ್ಪಂದಿಸಿದ ಸಚಿವ ಕೆ. ಎಂ. ಶಿವಲಿಂಗೇಗೌಡ ಅವರು, ಬೇಲೂರು ಭಾಗದಲ್ಲಿ ಬೀಡುಬಿಟ್ಟಿರುವ ಪುಂಡಾನೆಗಳು ಸೇರಿದಂತೆ ಒಟ್ಟು 56 ಕಾಡಾನೆಗಳನ್ನು ಸೆರೆಹಿಡಿದು ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸುವಂತೆ ರಾಜ್ಯ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಒಂದು ತಿಂಗಳೊಳಗೆ ಈ ಆನೆಗಳನ್ನು ಸ್ಥಳಾಂತರಿಸಲಾಗುವುದು. ತಕ್ಷಣವೇ ಕಾರ್ಯಾಚರಣೆ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.
ಕಾಡಾನೆಗಳ ಹಾವಳಿಯಿಂದ ಜನರು ಅನುಭವಿಸುತ್ತಿರುವ ಸಂಕಷ್ಟದ ಗಂಭೀರತೆಯನ್ನು ಸರ್ಕಾರ ಪರಿಗಣಿಸಿದ್ದು, ಸಾರ್ವಜನಿಕರ ಜೀವ ರಕ್ಷಣೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂಬುದನ್ನು ಸಚಿವರು ಸ್ಪಷ್ಟಪಡಿಸಿದರು. ಈ ಸಂದರ್ಭ ಹಾಸನ ಸಂಸದರಾದ ಶ್ರೇಯಸ್ ಎಂ. ಪಟೇಲ್, ಬೇಲೂರು ಶಾಸಕರಾದ ಎಚ್. ಕೆ. ಸುರೇಶ್ ಸೇರಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
