ಬೆಂಗಳೂರು:ಎಲ್ಲ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಜಾರಿಗೆ ತಂದಿರುವ ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ₹3.5 ಲಕ್ಷದಿಂದ ₹8 ಲಕ್ಷಕ್ಕೆ ಹೆಚ್ಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
2009ರಲ್ಲಿ ಅಂದಿನ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ, ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ ₹3.5 ಲಕ್ಷಕ್ಕೆ ನಿಗದಿಯಾಗಿದ್ದರಿಂದ ಹೆಚ್ಚಿನ ಕುಟುಂಬಗಳಿಗೆ ಈ ಯೋಜನೆಯ ಪ್ರಯೋಜನ ದೊರೆಯುತ್ತಿರಲಿಲ್ಲ. ಆದಾಯದ ಮಿತಿ ಹೆಚ್ಚಿಸುವಂತೆ ಪೋಷಕರು ಸುಮಾರು ಒಂದು ದಶಕದಿಂದ ಒತ್ತಾಯಿಸುತ್ತಿದ್ದರು.
ಈ ಹಿನ್ನೆಲೆಯಲ್ಲಿ ವಾರ್ಷಿಕ ಆದಾಯದ ಮಿತಿಯನ್ನು ₹8 ಲಕ್ಷಕ್ಕೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ಈ ಮೂಲಕ ದೇಶದಲ್ಲಿಯೇ ಅತ್ಯಧಿಕ ಆದಾಯ ಮಿತಿ ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಲಿದೆ. ಗುಜರಾತ್‌ನಲ್ಲಿ ₹6 ಲಕ್ಷ ಹಾಗೂ ದೆಹಲಿಯಲ್ಲಿ ₹5 ಲಕ್ಷ ಆದಾಯ ಮಿತಿ ಇದ್ದು, ನೆರೆಯ ರಾಜ್ಯಗಳಲ್ಲಿ ಇದಕ್ಕಿಂತಲೂ ಕಡಿಮೆ ಮಿತಿ ಇದೆ.
ಆರ್‌ಟಿಇ ಕಾಯ್ದೆಯಡಿ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಮತ್ತು ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರ್ಕಾರವೇ ಭರಿಸುತ್ತದೆ. ಶಿಕ್ಷಣದಲ್ಲಿ ಸಮಾನ ಅವಕಾಶ ಕಲ್ಪಿಸುವ ಹಾಗೂ ಪ್ರತಿಯೊಂದು ಮಗುವಿಗೂ ಉಚಿತ ಮತ್ತು ಕಡ್ಡಾಯ ಶಿಕ್ಷಣ ಒದಗಿಸುವ ಆಶಯಕ್ಕೆ ಮತ್ತಷ್ಟು ಬಲ ಸಿಗಲಿದೆ.
