ಬೆಂಗಳೂರು:ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ಜೆಟ್ಟಿಂಗ್ ಯಂತ್ರಗಳ ಮೂಲಕ ಸ್ವಚ್ಛತಾ ಕಾರ್ಯ ಕೈಗೊಳ್ಳುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ನಡೆಯುತ್ತಿರುವ ವಾರ್ಡ್ ಒನ್ ಅಭಿಯಾನಕ್ಕೆ ಸಂಬಂಧಿಸಿದಂತೆ ಇಂದು ನಡೆದ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಅವರು, ನಗರವು ಸುಂದರವಾಗಿ ಕಾಣಬೇಕಾದರೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವುದು ಅತ್ಯಂತ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಜೆಟ್ಟಿಂಗ್ ಯಂತ್ರಗಳನ್ನು ಬಳಸಿ ಜಂಕ್ಷನ್ಗಳು, ರಸ್ತೆ ಬದಿಯ ಗೋಡೆಗಳು, ಪಾದಚಾರಿ ಮಾರ್ಗಗಳು, ಬಸ್ ತಂಗುದಾಣಗಳು ಹಾಗೂ ಮೇಲ್ಸೇತುವೆಗಳ ಪಿಲ್ಲರ್ಗಳನ್ನು ಪ್ರೆಶರ್ ವಾಷ್ ಮೂಲಕ ಸ್ವಚ್ಛಗೊಳಿಸಿ, ನಗರದ ಸೌಂದರ್ಯವನ್ನು ಹೆಚ್ಚಿಸಬೇಕು ಎಂದು ನಿರ್ದೇಶನ ನೀಡಿದರು.
ಆಯಾ ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ವಾರ್ಡ್ ಒನ್ ಅಭಿಯಾನ ನಡೆಯುತ್ತಿದ್ದು, ಅದರ ಭಾಗವಾಗಿ ಜೆಟ್ಟಿಂಗ್ ಯಂತ್ರಗಳನ್ನು ಬಳಸಿಕೊಂಡು ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛಗೊಳಿಸಿ ಸುಂದರವಾಗಿ ಕಾಣುವಂತೆ ಮಾಡಬೇಕು. ಈ ಸಂಬಂಧ ಎಲ್ಲಾ ನಗರ ಪಾಲಿಕೆಗಳಲ್ಲಿ ಕೂಡಲೇ ಸೂಕ್ತ ಕ್ರಮ ಕೈಗೊಂಡು ಜೆಟ್ಟಿಂಗ್ ಯಂತ್ರಗಳ ಬಳಕೆಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಿದರು.
ಸಂಸ್ಕರಿಸಿದ ನೀರನ್ನು ಬಳಸಿ:
ಜೆಟ್ಟಿಂಗ್ ಯಂತ್ರಗಳ ಮೂಲಕ ರಸ್ತೆಗಳನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಜಲಮಂಡಳಿಯಿಂದ ಸಂಸ್ಕರಿಸಿದ ನೀರನ್ನು ಬಳಸಿಕೊಳ್ಳಬೇಕು. ಈ ಸಂಬಂಧ ಸಮೀಪದಲ್ಲಿರುವ ಸಂಸ್ಕರಣಾ ಘಟಕಗಳ ಅಧಿಕಾರಿಗಳೊಂದಿಗೆ ಚರ್ಚಿಸಿ, ಸ್ವಚ್ಛತಾ ಕಾರ್ಯವನ್ನು ಕೂಡಲೇ ಆರಂಭಿಸುವಂತೆ ಸೂಚನೆ ನೀಡಿದರು.
ವಾರ್ಡ್ ಒನ್ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ:
ನವೆಂಬರ್ 1ರಿಂದ ವಾರ್ಡ್ ಒನ್ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಅಭಿಯಾನ ನಡೆಯುತ್ತಿರುವ ವಾರ್ಡ್ಗಳಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ ಸ್ವಚ್ಛತಾ ಕಾರ್ಯಗಳಿಗೆ ಆದ್ಯತೆ ನೀಡಬೇಕು. ಇತರೆ ಇಲಾಖೆಗಳ ಸಹಕಾರದೊಂದಿಗೆ ಸಮನ್ವಯ ಸಾಧಿಸಿ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದರು. ಇದೇ ಶನಿವಾರ, ನವೆಂಬರ್ 21ರಂದು ಕೈಗೆತ್ತಿಕೊಳ್ಳಲಿರುವ ವಾರ್ಡ್ ಒನ್ ಅಭಿಯಾನವನ್ನು ಪರಿಣಾಮಕಾರಿಯಾಗಿ ನಡೆಸುವಂತೆ ತಿಳಿಸಿದರು.
ಕೋಣನಕುಂಟೆ ಕ್ರಾಸ್ ಅಭಿವೃದ್ಧಿಗೆ ಕ್ರಮ ಕೈಗೊಳ್ಳಿ:
ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಕೋಣನಕುಂಟೆ ಕ್ರಾಸ್ನ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಸ್ಥಳೀಯವಾಗಿ ಇರುವ ಸಮಸ್ಯೆಗಳನ್ನು ಪರಿಶೀಲಿಸಿ, ಮೆಟ್ರೋ ಅಧಿಕಾರಿಗಳೊಂದಿಗೆ ಚರ್ಚಿಸಬೇಕು. ಜಂಕ್ಷನ್ನಲ್ಲಿರುವ ಐಲ್ಯಾಂಡ್ ಅಭಿವೃದ್ಧಿಪಡಿಸುವುದರ ಜೊತೆಗೆ ಪಾದಚಾರಿ ಮಾರ್ಗವನ್ನು ಅಭಿವೃದ್ಧಿಪಡಿಸಬೇಕು. ಸಂಚಾರ ದಟ್ಟಣೆ ನಿವಾರಿಸಲು ಲೇನ್ ಮಾರ್ಕಿಂಗ್ ಹಾಗೂ ಫ್ರೀ ಲೆಫ್ಟ್ ವ್ಯವಸ್ಥೆ ಕಲ್ಪಿಸುವ ಕುರಿತು ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, ನಗರ ಪಾಲಿಕೆ ಆಯುಕ್ತರಾದ ರಮೇಶ್ ಡಿ.ಎಸ್., ಪೊಮ್ಮಲ ಸುನಿಲ್ ಕುಮಾರ್, ಶಿಲ್ಪಾ ನಾಗ್, ರಮೇಶ್ ಕೆ.ಎನ್., ಜಗದೀಶ್ ಜಿ., ಅಪರ ಆಯುಕ್ತರು, ಮುಖ್ಯ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
