ಬೆಂಗಳೂರು: ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರನ್ನು ಹಾಗೂ ಲಿಂಗಾಯತರನ್ನು ಅವಹೇಳನ ಮಾಡಿರುವ ಲೇಖಕ ರವಿ ಹಂಜ್ ವಿರುದ್ಧ ಕಾನೂನು ಕ್ರಮಕ್ಕೆ ಹಾಗೂ ಬಸವಮಂಟಪ ಕೃತಿ ಮುಟ್ಟುಗೋಲಿಗೆ ಸಚಿವ ಸಂಪುಟ ಸಮ್ಮತಿ ಸೂಚಿಸಿದ್ದು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರೂ ಆದ ಸಚಿವ ಈಶ್ವರ ಬಿ ಖಂಡ್ರೆ ಧನ್ಯವಾದ ಅರ್ಪಿಸಿದ್ದಾರೆ.
ರವಿ ಹಂಜಿ ಬಸವಣ್ಣನವರ ಬಗ್ಗೆ ಆಡಿರುವ ಅವಹೇಳನಕಾರಿ ಮಾತುಗಳ ವಿಡಿಯೋಗಳನ್ನು ಸಾಮಾಜಿಕ ತಾಣಗಳಿಂದ ಈ ಕುರಿತ ಎಲ್ಲ ವಿಡಿಯೋ ತೆಗೆದು ಹಾಕುವಂತೆ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಿದ್ದು, ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸಂಪುಟ ಒಪ್ಪಿಗೆ ಸೂಚಿಸಿದೆ ಎಂದೂ ತಿಳಿಸಿದ್ದಾರೆ.
12ನೇ ಶತಮಾನದಲ್ಲೇ ಶ್ರೇಣಿರಹಿತ, ವರ್ಗರಹಿತ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಬಸವಣ್ಣನಂತಹ ಮಹಾಪುರಷರ ಬಗ್ಗೆ ಈ ರೀತಿ ಅವಹೇಳನಕಾರಿಯಾಗಿ ಮಾತನಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಚಿವ ಸಂಪುಟದ ಸಹೋದ್ಯೋಗಿಗಳಾದ ಎಂ.ಬಿ. ಪಾಟೀಲ್, ಡಾ.ಶರಣ ಪ್ರಕಾಶ್ ಪಾಟೀಲ್, ಎಸ್.ಎಸ್. ಮಲ್ಲಿಕಾರ್ಜುನ್, ಬಸವರಾಜ ರಾಯರೆಡ್ಡಿ, ಕೆ.ಎಚ್.ಮುನಿಯಪ್ಪ ಸೇರಿದಂತೆ ಎಲ್ಲರೂ ಸಹಮತ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿಯವರು ಈ ನಿರ್ಣಯಕ್ಕೆ ಅನುಮೋದನೆ ನೀಡಿದ್ದಾರೆ ಎಂದೂ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರ ಖಂಡ್ರೆ ಅವರು, ಬಸವಣ್ಣನವರ ಬಗ್ಗೆ ಅವಹೇಳನಕಾರಿ ಅಂಶಗಳನ್ನು ಒಳಗೊಂಡಿರುವ ಬಸವಮಂಟಪ ಕೃತಿ ಮುಟ್ಟುಗೋಲು ಹಾಕುವಂತೆ, ಬಸವಣ್ಣ ಹಾಗೂ ಲಿಂಗಾಯತರ ಬಗ್ಗೆ ಕೀಳಾಗಿ ಮಾತನಾಡಿರುವ ಹಂಜಿ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಲು ಆದೇಶಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ತಿಳಿಸಿದ್ದರು.
ಸಚಿವನಾಗಿ ತಾವು ಒಂದು ಕೃತಿಯನ್ನು ಮುಟ್ಟುಗೋಲು ಹಾಕುವಂತೆ ಬಹಿರಂಗವಾಗಿ ಒತ್ತಾಯಿಸಬಾರದು, ಆದರೆ ಇಡೀ ಲಿಂಗಾಯತ ಸಮುದಾಯಕ್ಕೆ ಮತ್ತು ವಿಶ್ವಗುರು ಬಸವಣ್ಣನವರ ಅನುಯಾಯಿಗಳಿಗೆ ಘಾಸಿ ಉಂಟು ಮಾಡುವಂತೆ ಆಧಾರ ರಹಿತ ಆರೋಪ ಮಾಡಿರುವ ರವಿ ಹಂಜಿ ಕೃತಿ ಸಮಾಜದ ಸ್ವಾಸ್ಥ್ಯ ಕದಡುವಂತಿದ್ದು, ಕೂಡಲೇ ಮುಟ್ಟುಗೋಲು ಹಾಕುವಂತೆ ಮುಖ್ಯಮಂತ್ರಿಗಳಿಗೆ ಹಾಗೂ ಗೃಹ ಸಚಿವರಿಗೆ ತಾವು ಒತ್ತಾಯಿಸುವುದಾಗಿ ತಿಳಿಸಿದ್ದರು.
ಸಂವಿಧಾನದತ್ತವಾದ ವಾಕ್ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ತಾವು ಗೌರವ ನೀಡುವುದಾಗಿ ಹೇಳಿದ ಅವರು, ಮಹನೀಯರನ್ನು ಅವಮಾನಿಸುವುದನ್ನು ಮತ್ತು ಪ್ರಚೋದನಕಾರಿಯಾಗಿ ಮಾತನಾಡಿ, ಜನರ ಭಾವನೆ ಕೆರಳಿಸುವುದನ್ನು ಒಪ್ಪಲು ಸಾಧ್ಯವೇ ಇಲ್ಲ. ಹೀಗಾಗಿ ಈ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಮತ್ತು ಕೂಡಲೇ ಈ ಸಂಬಂಧ ರವಿ ಹಂಜಿ ವಿಡಿಯೋಗಳನ್ನು ಸಾಮಾಜಿಕ ತಾಣದಿಂದ ತೆಗೆದುಹಾಕಬೇಕು ಎಂದು ಈಶ್ವರ ಖಂಡ್ರೆ ಆಗ್ರಹಿಸಿದ್ದರು.
ಲಿಂಗಾಯತರನ್ನು ಲಿಂಗಾಹತರು ಎಂದು ಹೇಳಿದ್ದಾರೆ. ಇದು ಪ್ರಚೋದನಕಾರಿ ಹೇಳಿಕೆಯಾಗಿದೆ. ಇದು ವಿಶ್ವಾದ್ಯಂತ ಇರುವ ಸಮಾಜ ಬಾಂಧವರ ಮನಸ್ಸಿಗೆ ತೀವ್ರ ನೋವುಂಟು ಮಾಡಿದೆ, ಭಾವನಾತ್ಮಕ ವಿಚಾರಗಳ ಬಗ್ಗೆ ಯಾವುದೇ ಸಂಶೋಧನೆ ಇಲ್ಲದೆ ಸ್ವಯಂಘೋಷಿತ ಸಂಶೋಧಕರೆಂದು ಮಾತನಾಡುವುದು ಸರಿಯಲ್ಲ. ಈ ವ್ಯಕ್ತಿಯ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಕಾರಣಕ್ಕೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು, ಕಾನೂನು ರೀತ್ಯ ಕಠಿಣ ಕ್ರಮ ಜರುಗಿಸಬೇಕು ಎಂದೂ ಒತ್ತಾಯಿಸಿದ್ದರು.
