₹16 ಕೋಟಿ ವೆಚ್ಚದಲ್ಲಿ 52–54 ಮೀಟರ್ ಎತ್ತರದ ಏರಿಯಲ್ ಲ್ಯಾಡರ್ ವಾಹನ ಖರೀದಿಗೆ ಸಚಿವ ಸಂಪುಟ ಅನುಮೋದನೆ
ಬೆಂಗಳೂರು:ರಾಜ್ಯದಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯನ್ನು ಆಧುನಿಕ ತಂತ್ರಜ್ಞಾನ, ಅತ್ಯಾಧುನಿಕ ಉಪಕರಣಗಳು ಹಾಗೂ ಅಗತ್ಯ ಮೂಲ ಸೌಕರ್ಯಗಳೊಂದಿಗೆ ಬಲಪಡಿಸುವ ನಿಟ್ಟಿನಲ್ಲಿ ಬಹುಮಹಡಿ ಕಟ್ಟಡಗಳಲ್ಲಿ ಸಂಭವಿಸಬಹುದಾದ ಅಗ್ನಿ ಅವಘಡಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು 52ರಿಂದ 54 ಮೀಟರ್ ಎತ್ತರದವರೆಗೆ ತಲುಪಬಲ್ಲ ಅತ್ಯಾಧುನಿಕ ಏರಿಯಲ್ ಲ್ಯಾಡರ್ ಪ್ಲಾಟ್ಫಾರಂ ವಾಹನವನ್ನು ₹16 ಕೋಟಿ ವೆಚ್ಚದಲ್ಲಿ ಖರೀದಿಸಲು ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಗೃಹ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
2026–27ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಘೋಷಿಸಲಾಗಿದ್ದ ಈ ಯೋಜನೆಯ ಅನುಷ್ಠಾನಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಹೆಚ್ಚುತ್ತಿರುವ ಬಹುಮಹಡಿ ಕಟ್ಟಡಗಳು, ವಸತಿ ಸಂಕೀರ್ಣಗಳು ಹಾಗೂ ವಾಣಿಜ್ಯ ಕಟ್ಟಡಗಳಲ್ಲಿ ಅಗ್ನಿ ಅವಘಡಗಳು ಸಂಭವಿಸಿದ ಸಂದರ್ಭದಲ್ಲಿ ತ್ವರಿತವಾಗಿ ಕಾರ್ಯಾಚರಣೆ ನಡೆಸಲು ಈ ವಾಹನ ಮಹತ್ವದ ನೆರವು ನೀಡಲಿದೆ ಎಂದು ಸಚಿವರು ಹೇಳಿದ್ದಾರೆ.
ಎತ್ತರದ ಕಟ್ಟಡಗಳಲ್ಲಿನ ರಕ್ಷಣಾ ಕಾರ್ಯಾಚರಣೆಗೆ ಅನುಕೂಲ
52ರಿಂದ 54 ಮೀಟರ್ ಎತ್ತರದವರೆಗೆ ತಲುಪುವ ಸಾಮರ್ಥ್ಯ ಹೊಂದಿರುವ ಏರಿಯಲ್ ಲ್ಯಾಡರ್ ಪ್ಲಾಟ್ಫಾರಂ ವಾಹನವು ಎತ್ತರದ ಕಟ್ಟಡಗಳ ಮೇಲಿನ ಮಹಡಿಗಳಲ್ಲಿ ಸಂಭವಿಸುವ ಅಗ್ನಿ ಅವಘಡಗಳನ್ನು ನಿಯಂತ್ರಿಸಲು ಅನುಕೂಲವಾಗಲಿದೆ. ಕಟ್ಟಡಗಳಲ್ಲಿ ಸಿಲುಕಿರುವವರನ್ನು ಸುರಕ್ಷಿತವಾಗಿ ಕೆಳಕ್ಕೆ ಕರೆತರಲು, ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಕೈಗೊಳ್ಳಲು ಹಾಗೂ ತುರ್ತು ಸಂದರ್ಭಗಳಲ್ಲಿ ಅಗ್ನಿಶಾಮಕ ಸಿಬ್ಬಂದಿ ಸುರಕ್ಷಿತವಾಗಿ ಕಾರ್ಯನಿರ್ವಹಿಸಲು ಇದು ನೆರವಾಗಲಿದೆ.
ನಗರೀಕರಣ ಮತ್ತು ಬಹುಮಹಡಿ ಕಟ್ಟಡಗಳ ಹೆಚ್ಚಳದ ಹಿನ್ನೆಲೆಯಲ್ಲಿ ಅಗ್ನಿಶಾಮಕ ಇಲಾಖೆಯ ಕಾರ್ಯಾಚರಣಾ ಸಾಮರ್ಥ್ಯವನ್ನು ಕಾಲಕ್ಕೆ ತಕ್ಕಂತೆ ಹೆಚ್ಚಿಸುವುದು ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಆಧುನಿಕ ವಾಹನಗಳು ಮತ್ತು ರಕ್ಷಣಾ ಉಪಕರಣಗಳ ಲಭ್ಯತೆಯನ್ನು ಹೆಚ್ಚಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.
ಅಗ್ನಿಶಾಮಕ ಇಲಾಖೆಯ ಆಧುನೀಕರಣಕ್ಕೆ ₹50 ಕೋಟಿ
2026–27ನೇ ಸಾಲಿನ ಆಯವ್ಯಯದಲ್ಲಿ ಕೆ-ಸೇಫ್-2 ಯೋಜನೆಯಡಿ ಅಗ್ನಿಶಾಮಕ ಕಟ್ಟಡಗಳ ನಿರ್ಮಾಣ, ವಾಹನಗಳು ಹಾಗೂ ಆಧುನಿಕ ಅಗ್ನಿಶಾಮಕ ಮತ್ತು ರಕ್ಷಣಾ ಉಪಕರಣಗಳಿಗಾಗಿ ₹50 ಕೋಟಿ ಮೀಸಲಿಡಲಾಗಿದೆ. ಇದರೊಂದಿಗೆ ಬಹುಮಹಡಿ ಕಟ್ಟಡಗಳ ಅಗ್ನಿ ಅವಘಡಗಳನ್ನು ತಡೆಗಟ್ಟಲು ಏರಿಯಲ್ ಲ್ಯಾಡರ್ ವಾಹನ ಒದಗಿಸುವುದಾಗಿ ಘೋಷಿಸಲಾಗಿತ್ತು.
ಅಗ್ನಿಶಾಮಕ ಸಿಬ್ಬಂದಿಯ ಕಾರ್ಯಕ್ಷಮತೆ, ಸುರಕ್ಷತೆ ಮತ್ತು ಕಲ್ಯಾಣದ ಜೊತೆಗೆ ಇಲಾಖೆಯ ತಾಂತ್ರಿಕ ಸಾಮರ್ಥ್ಯವನ್ನು ಹೆಚ್ಚಿಸುವುದಕ್ಕೂ ಸರ್ಕಾರ ಆದ್ಯತೆ ನೀಡಿದೆ.
ಸಾರ್ವಜನಿಕರ ಜೀವ ಮತ್ತು ಆಸ್ತಿಪಾಸ್ತಿಗಳ ರಕ್ಷಣೆಗೆ ಆದ್ಯತೆ
ಅಗ್ನಿ ಅವಘಡಗಳು ಸಂಭವಿಸಿದಾಗ ಆರಂಭಿಕ ಹಂತದಲ್ಲೇ ಪರಿಣಾಮಕಾರಿ ಕ್ರಮ ಕೈಗೊಳ್ಳುವುದು ಅತ್ಯಂತ ಮುಖ್ಯವಾಗಿದೆ. ವಿಶೇಷವಾಗಿ ಎತ್ತರದ ಕಟ್ಟಡಗಳಲ್ಲಿ ಸಂಭವಿಸುವ ಅಗ್ನಿ ಅನಾಹುತಗಳ ಸಂದರ್ಭದಲ್ಲಿ ಅತ್ಯಾಧುನಿಕ ವಾಹನಗಳು ಮತ್ತು ಉಪಕರಣಗಳ ಲಭ್ಯತೆ ರಕ್ಷಣಾ ಕಾರ್ಯಾಚರಣೆಯ ಯಶಸ್ಸಿನಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ.
ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯನ್ನು ಭವಿಷ್ಯದ ಅಗತ್ಯಗಳಿಗೆ ಅನುಗುಣವಾಗಿ ಸಜ್ಜುಗೊಳಿಸುವ ಮೂಲಕ ಸಾರ್ವಜನಿಕರ ಜೀವ, ಆಸ್ತಿಪಾಸ್ತಿ ಹಾಗೂ ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಇಲಾಖೆಯ ಆಧುನೀಕರಣ ಮತ್ತು ಬಲವರ್ಧನೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿಶೇಷ ಗಮನ ಹರಿಸಿದ್ದಾರೆ.
