ಬೆಂಗಳೂರು: ಮೈಸೂರಿನಲ್ಲಿ ನವೆಂಬರ್ 26ರಂದು ನಡೆಯಲಿರುವ ರಾಜ್ಯ ಮಟ್ಟದ ಸಂವಿಧಾನ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ನೆರವೇರಿಸಲು ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಕೃಷಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಹೇಳಿದರು.
ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರ ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂವಿಧಾನ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇದು ರಾಜ್ಯ ಮಟ್ಟದ ಕಾರ್ಯಕ್ರಮವಾಗಿರುವುದರಿಂದ ಸೂಕ್ತ ಬಜೆಟ್ ನಿಗದಿಪಡಿಸಬೇಕು. ಯಾವುದಕ್ಕೂ ಕೊರತೆ ಆಗದಂತೆ ಅಧಿಕಾರಿಗಳು ಕಾರ್ಯಕ್ರಮ ನಡೆಸಬೇಕು. ಹೆಚ್ಚುವರಿ ಅನುದಾನ ಅಗತ್ಯವಿದ್ದರೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಬೇಕು, ಮೈಸೂರು ವಿಭಾಗದ ಎಂಟು ಜಿಲ್ಲೆಗಳ ಉಸ್ತುವಾರಿ ಸಚಿವರ ಹೆಸರನ್ನು ಉಲ್ಲೇಖಿಸಿ, ಎಲ್ಲ ಜಿಲ್ಲೆಗಳ ಶಾಸಕರು ಸೇರಿದಂತೆ ಎಲ್ಲ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ವಕೀಲರ ಸಹಭಾಗಿತ್ವದ ಬಗ್ಗೆಯೂ ಕ್ರಮ ಕೈಗೊಳ್ಳಬೇಕು. ಅಲ್ಲದೆ, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಸಂವಿಧಾನದ ಸಾಕ್ಷ್ಯಚಿತ್ರ ಪ್ರದರ್ಶಿಸುವ ಎಲ್ಇಡಿ ವಾಹನಗಳನ್ನು ಕಳುಹಿಸಬೇಕು ಎಂದು ಸೂಚಿಸಿದರು.
ಐದು ಕೋಟಿ ರೂ.ಬಿಡುಗಡೆ
ರಾಜ್ಯ ಸರ್ಕಾರವು ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕಾಗಿ 5 ಕೋಟಿ ರೂ. ಮಂಜೂರು ಮಾಡಿದೆ.
ಕಾರ್ಯಕ್ರಮದ ವೇದಿಕೆ, ಸ್ತಬ್ಧ ಚಿತ್ರ ಮೆರವಣಿಗೆ, ಕಲಾ ತಂಡಗಳ ಮೆರವಣಿಗೆ ಹಾಗೂ ಊಟದ ವ್ಯವಸ್ಥೆಯನ್ನು ಸರ್ಕಾರದ ವತಿಯಿಂದಲೇ ಮಾಡಬೇಕು. ಕಾರ್ಯಕ್ರಮದಲ್ಲಿ ಸುಮಾರು 1 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಯಾವುದೇ ಲೋಪಗಳಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಯಿತು.
ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಮಾತನಾಡಿ, ಒಂದು ಲಕ್ಷಕ್ಕೆ ಕಡಿಮೆಯಿಲ್ಲದಂತೆ ಜನರನ್ನು ಸೇರಿಸುವುದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜನಪ್ರತಿನಿಧಿಗಳ ಜವಾಬ್ದಾರಿ, ಉಳಿದ ಎಲ್ಲಾ ವ್ಯವಸ್ಥೆಗಳನ್ನು ಅಧಿಕಾರಿಗಳು ನೋಡಿಕೊಳ್ಳಬೇಕು. ಅಗತ್ಯವಿದ್ದರೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
1.5 ಕಿ.ಮೀ. ಮೆರವಣಿಗೆ
ಮೈಸೂರು ನಗರದ ಗನ್ ಹೌಸ್ನಿಂದ ಮಹಾರಾಜ ಕಾಲೇಜು ಆವರಣದವರೆಗೆ 1.5 ಕಿ.ಮೀ. ದೂರ ಬೃಹತ್ ಮೆರವಣಿಗೆ ನಡೆಯಲಿದೆ.
ಇದರಲ್ಲಿ 8 ಕಲಾತಂಡಗಳು, 8 ಮೊಬೈಲ್ ಎಲ್ ಇಡಿ ವ್ಯಾನ್ಗಳು, 6 ಸ್ತಬ್ಧಚಿತ್ರಗಳು ಹಾಗೂ 14 ಸಾಂಸ್ಕೃತಿಕ ಕಲಾ ಪ್ರಕಾರಗಳು ಪಾಲ್ಗೊಳ್ಳಲಿವೆ. 50 ವಿದ್ಯಾರ್ಥಿಗಳು ಸಂವಿಧಾನದ ಆಶಯಗಳ ಭಿತ್ತಿಪತ್ರಗಳನ್ನು ಹಿಡಿದು ಸಾಗಬೇಕು. ಕೊನೆಯ ಸ್ತಬ್ಧಚಿತ್ರಕ್ಕೂ ಮುನ್ನ ವಿದ್ಯಾರ್ಥಿಗಳು ತ್ರಿವರ್ಣ ಧ್ವಜ ಹಿಡಿದು ಪಥಸಂಚಲನ ನಡೆಸಲು ಸೂಚಿಸಲಾಯಿತು.
ಜಿಲ್ಲಾವಾರು ವಾಹನ ವ್ಯವಸ್ಥೆ
ಮೈಸೂರು ವಿಭಾಗದ ಎಂಟು ಜಿಲ್ಲೆಗಳಿಂದ ಜನರನ್ನು ಕರೆತರಲು ಆಯಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಜವಾಬ್ದಾರಿ ವಹಿಸಲಾಯಿತು.
ಸ್ವಸಹಾಯ ಗುಂಪುಗಳ ಸದಸ್ಯರು ಬರುವುದಾದರೆ ಅವರಿಗೂ ವಾಹನ ವ್ಯವಸ್ಥೆ ಕಲ್ಪಿಸಲಾಗುವುದು. ಬೇರೆ ಜಿಲ್ಲೆಗಳಿಂದ ಬರುವವರು ಸ್ವಯಂಪ್ರೇರಿತರಾಗಿ ಕಾರ್ಯಕ್ರಮಕ್ಕೆ ಬಂದು ಭಾಗವಹಿಸಬೇಕು ಎಂದು ಕೋರಲಾಯಿತು.
ಮೈಸೂರಿಗೆ 500 ಬಸ್, ಮಂಡ್ಯಗೆ 400 ಬಸ್, ಚಾಮರಾಜನಗರಕ್ಕೆ 250 ಬಸ್, ಹಾಸನಕ್ಕೆ 150 ಬಸ್ ಹಾಗೂ ಕೊಡಗು ಜಿಲ್ಲೆಗೆ 100 ಬಸ್ ಗಳನ್ನು ಕಳುಹಿಸಿಕೊಡಲು ತೀರ್ಮಾನಿಸಲಾಯಿತು.
ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಕ್ರಮ
ಕಾರ್ಯಕ್ರಮಕ್ಕೆ ಸುಮಾರು 25 ಸಾವಿರ ವಾಹನಗಳು ಬರುವ ನಿರೀಕ್ಷೆಯಿರುವುದರಿಂದ ರಾಮನಗರ, ಮದ್ದೂರು ಮತ್ತು ಮಂಡ್ಯ ಭಾಗಗಳಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದು ಎಡಿಜಿಪಿ ಪಿ.ಹರಿಶೇಖರನ್ ಸಭೆಗೆ ತಿಳಿಸಿದರು.
ಆಯಾ ಜಿಲ್ಲೆಯ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಮೈಸೂರು ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು 100 ಹೆಚ್ಚುವರಿ ಸಂಚಾರಿ ಪೊಲೀಸರನ್ನು ನಿಯೋಜಿಸಲಾಗುವುದು. ಯಾವುದೇ ಅಪಘಾತಗಳು ಸಂಭವಿಸದಂತೆ ಎಚ್ಚರಿಕೆ ವಹಿಸುವುದು ಅಗತ್ಯ ಎಂದು ಹೇಳಿದರು.
ಕಾರ್ಯಕ್ರಮದ ಸ್ಥಳದಲ್ಲಿ ವಿದ್ಯುತ್ ಮತ್ತು ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಪ್ರತಿ ತಾಲ್ಲೂಕಿನ ದಲಿತ ಸಂಘಟನೆಗಳ ಮುಖಂಡರಿಗೆ ಪಾಸ್ ವ್ಯವಸ್ಥೆ ಮಾಡಬೇಕು. ಜಿಲ್ಲಾ ಮಟ್ಟದಲ್ಲಿ ಸಂಘಟನೆಗಳೊಂದಿಗೆ ಪೂರ್ವಭಾವಿ ಸಭೆ ನಡೆಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸಚಿವರುಗಳು ನಿರ್ದೇಶನ ನೀಡಿದರು.
ಸಮಾರಂಭದಲ್ಲಿ ಪ್ರಧಾನ ಭಾಷಣ ಮಾಡುವ ಸಂಪನ್ಮೂಲ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡುವಂತೆ ಸಲಹೆ ನೀಡಲಾಯಿತು.
ಸಭೆಯಲ್ಲಿ ಸಚಿವರಾದ ಯತೀಂದ್ರ ಸಿದ್ದರಾಮಯ್ಯ, ಪುಟ್ಟರಂಗಶೆಟ್ಟಿ, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ನಾಗರಾಜ್, ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ, ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪ ಇತರರು ಇದ್ದರು.
