ಸಮಗ್ರ ಸುದ್ದಿ

ಬೆಂಗಳೂರು ಪೊಲೀಸ್ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

Share

ಬೆಂಗಳೂರು: ಬೆಂಗಳೂರು ನಗರದ ಪೊಲೀಸ್ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ರೂಪಿಸುವುದು, ನೂತನವಾಗಿ ರಚಿಸಲಾಗಿರುವ ಐದು ಪೊಲೀಸ್ ಆಯುಕ್ತಾಲಯಗಳ ಕಾರ್ಯನಿರ್ವಹಣೆಗೆ ಸೂಕ್ತ ಕಾರ್ಯಯೋಜನೆ ಸಿದ್ಧಪಡಿಸುವುದು ಹಾಗೂ ಪೊಲೀಸ್ ಇಲಾಖೆಯ ಸಾಮರ್ಥ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಗೃಹ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಮತ್ತು ಇ-ಆಡಳಿತ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಇಂದು ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರೊಂದಿಗೆ ಸಭೆ ನಡೆಸಿ ಮಹತ್ವದ ಚರ್ಚೆ ನಡೆಸಿದರು.

ಸಭೆಯಲ್ಲಿ ಹೊಸದಾಗಿ ರಚಿಸಲಾಗಿರುವ ಐದು ಪೊಲೀಸ್ ಆಯುಕ್ತಾಲಯಗಳ ಮುಂದಿನ ಕಾರ್ಯಯೋಜನೆ, ಪೊಲೀಸ್ ವ್ಯವಸ್ಥೆಯ ಸಾಮರ್ಥ್ಯವರ್ಧನೆ, ವಿವಿಧ ಪೊಲೀಸ್ ಘಟಕಗಳ ನಡುವಿನ ಸಮನ್ವಯ ಮತ್ತು ಆಡಳಿತಾತ್ಮಕ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಕುರಿತು ಚರ್ಚಿಸಲಾಯಿತು.

ಬೆಂಗಳೂರು ನಗರದ ಬದಲಾಗುತ್ತಿರುವ ಅಗತ್ಯತೆಗಳಿಗೆ ಅನುಗುಣವಾಗಿ ಪೊಲೀಸ್ ವ್ಯವಸ್ಥೆಯನ್ನು ಇನ್ನಷ್ಟು ಬಲಿಷ್ಠಗೊಳಿಸುವುದು, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ಹಾಗೂ ಪೊಲೀಸ್ ಸೇವೆಗಳನ್ನು ಜನಸ್ನೇಹಿಯಾಗಿ ರೂಪಿಸುವುದು ಸಭೆಯ ಪ್ರಮುಖ ಉದ್ದೇಶವಾಗಿತ್ತು.

ಹೊಸ ಪೊಲೀಸ್ ಆಯುಕ್ತಾಲಯಗಳ ನಡುವೆ ಉತ್ತಮ ಸಮನ್ವಯ ಸಾಧಿಸುವುದರ ಜೊತೆಗೆ, ಪೊಲೀಸ್ ಇಲಾಖೆಯ ಕಾರ್ಯನಿರ್ವಹಣೆಯಲ್ಲಿ ದಕ್ಷತೆ, ಹೊಣೆಗಾರಿಕೆ ಮತ್ತು ಸಾರ್ವಜನಿಕರಿಗೆ ಸ್ಪಂದಿಸುವ ಗುಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವ ಕುರಿತು ಚರ್ಚಿಸಲಾಯಿತು.

ಪರಿಣಾಮಕಾರಿ, ಸ್ಪಂದನಶೀಲ ಹಾಗೂ ಜನಕೇಂದ್ರಿತ ಪೊಲೀಸ್ ವ್ಯವಸ್ಥೆಯನ್ನು ರೂಪಿಸುವುದು ಸರ್ಕಾರದ ಆದ್ಯತೆಯಾಗಿದೆ, ಬೆಂಗಳೂರಿನ ನೂತನ ಪೊಲೀಸ್ ವ್ಯವಸ್ಥೆಯು ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಬೆಂಗಳೂರು ನಗರದ ನಾಗರಿಕರಿಗೆ ಸುರಕ್ಷಿತ ವಾತಾವರಣ ಕಲ್ಪಿಸುವುದು ಹಾಗೂ ಪೊಲೀಸ್ ಸೇವೆಗಳನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ಹೊಸ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದೂ ಸಚಿವರು ಹೇಳಿದ್ದಾರೆ.


Share

You cannot copy content of this page