ಸಮಗ್ರ ಸುದ್ದಿ

ಟೆನಿಸ್ ಅಕಾಡೆಮಿಗೆ ಬೆಂಗಳೂರಿನಲ್ಲಿ 5 ಎಕರೆ ಜಮೀನು ಮಂಜೂರಿಗೆ ಚಿಂತನೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ

Share

ಬೆಂಗಳೂರು:ಯುವ ಟೆನಿಸ್ ಆಟಗಾರರನ್ನು ಪ್ರೋತ್ಸಾಹಿಸಲು ಹಾಗೂ ಕ್ರೀಡಾ ಪ್ರತಿಭೆಗಳನ್ನು ಬೆಳೆಸುವ ದೃಷ್ಟಿಯಿಂದ ಟೆನಿಸ್ ಅಕಾಡೆಮಿ ಸ್ಥಾಪನೆಗೆ ಬೆಂಗಳೂರಿನಲ್ಲಿ ಐದು ಎಕರೆ ಜಮೀನು ಮಂಜೂರು ಮಾಡುವ ಬಗ್ಗೆ ಚಿಂತಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದರು.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವತಿಯಿಂದ ಬೆಂಗಳೂರಿನ ಕಬ್ಬನ್ ಪಾರ್ಕ್ ರಸ್ತೆಯಲ್ಲಿರುವ ಎಸ್.ಎಂ. ಕೃಷ್ಣ ಟೆನಿಸ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ‘27ನೇ ಅಖಿಲ ಭಾರತ ಪೊಲೀಸ್ ಲಾನ್ ಟೆನಿಸ್ ಚಾಂಪಿಯನ್‌ಶಿಪ್–2026’ರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಟೆನಿಸ್ ಅಕಾಡೆಮಿ ಸ್ಥಾಪಿಸಲು ಐದು ಎಕರೆ ಜಮೀನು ಬೇಕೆಂದು ನಿನ್ನೆ ನನ್ನ ಬಳಿ ಮನವಿ ಮಾಡಿದರು. ಅದಕ್ಕೆ ತಕ್ಷಣವೇ ಸಕಾರಾತ್ಮಕವಾಗಿ ಸ್ಪಂದಿಸಿದೆ. ಯುವಜನರು ಟೆನಿಸ್‌ನಲ್ಲಿ ತೊಡಗಿಸಿಕೊಂಡು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಸೂಕ್ತ ಜಮೀನು ಗುರುತಿಸಿ, ಅದನ್ನು ಮಂಜೂರು ಮಾಡುವ ಸಾಧ್ಯತೆಯನ್ನು ಪರಿಶೀಲಿಸಲಾಗುವುದು ಎಂದರು.

ಚಿನ್ನದ ಪದಕ ವಿಜೇತರಿಗೆ ₹1 ಕೋಟಿ, ಬೆಳ್ಳಿ ಪದಕ ವಿಜೇತರಿಗೆ ₹75 ಲಕ್ಷ, ಕಂಚಿನ ಪದಕ ವಿಜೇತರಿಗೆ ₹50 ಲಕ್ಷ ನಗದು ಪುರಸ್ಕಾರ

ಚಿನ್ನದ ಪದಕ ವಿಜೇತರಿಗೆ ₹1 ಕೋಟಿ, ಬೆಳ್ಳಿ ಪದಕ ವಿಜೇತರಿಗೆ ₹75 ಲಕ್ಷ ಮತ್ತು ಕಂಚಿನ ಪದಕ ವಿಜೇತರಿಗೆ ₹50 ಲಕ್ಷ ನಗದು ಪುರಸ್ಕಾರ ನೀಡಿದ್ದೇವೆ. ನಮ್ಮ ಕ್ರೀಡಾಪಟುಗಳು ಇನ್ನಷ್ಟು ಸಾಧನೆ ಮಾಡಿ ರಾಜ್ಯಕ್ಕೆ ಹಾಗೂ ದೇಶಕ್ಕೆ ಹೆಚ್ಚಿನ ಪದಕಗಳನ್ನು ತಂದುಕೊಡಲು ಈ ಪುರಸ್ಕಾರಗಳು ಉತ್ತೇಜನ ನೀಡುತ್ತವೆ ಎಂದು ಹೇಳಿದರು.

ಕ್ರೀಡಾಪಟುಗಳಿಗೆ ಸರ್ಕಾರಿ ನೇಮಕಾತಿಯಲ್ಲಿ ಶೇ. 2, ಪೊಲೀಸ್ ನೇಮಕಾತಿಯಲ್ಲಿ ಶೇ. 3ರಷ್ಟು ಮೀಸಲಾತಿ

ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ. 2ರಷ್ಟು ಮೀಸಲಾತಿ ಕಲ್ಪಿಸಿದೆ. ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ಈ ಮೀಸಲಾತಿಯನ್ನು ಶೇ. 3ಕ್ಕೆ ಹೆಚ್ಚಿಸಲಾಗಿದೆ. ಈ ಮೀಸಲಾತಿಯಡಿ ಈಗಾಗಲೇ ಹಲವಾರು ಕ್ರೀಡಾಪಟುಗಳು ಪೊಲೀಸ್ ಅಧಿಕಾರಿಗಳು ಮತ್ತು ಕಾನ್‌ಸ್ಟೆಬಲ್‌ಗಳಾಗಿ ಆಯ್ಕೆಯಾಗಿದ್ದಾರೆ. ಇಂತಹ ಕ್ರಮಗಳನ್ನು ಮತ್ತಷ್ಟು ಬಲಪಡಿಸಿ, ಪ್ರತಿಭಾವಂತ ಕ್ರೀಡಾಪಟುಗಳಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸುತ್ತೇವೆ ಎಂದರು.

ಕರ್ನಾಟಕದ ಇನ್ನಷ್ಟು ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಭಾರತವನ್ನು ಪ್ರತಿನಿಧಿಸಬೇಕು ಹಾಗೂ ಒಲಿಂಪಿಕ್ಸ್‌ನಲ್ಲಿ ಪದಕಗಳನ್ನು ಗೆಲ್ಲಬೇಕು ಎಂಬುದು ನಮ್ಮ ಗುರಿ. ಈ ನಿಟ್ಟಿನಲ್ಲಿ ಶಾಲೆ, ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ಹಂತದಲ್ಲಿಯೇ ಕ್ರೀಡೆಗೆ ಉತ್ತೇಜನ ನೀಡಲಾಗುತ್ತಿದೆ. ಅಥ್ಲೆಟಿಕ್ಸ್, ಫುಟ್‌ಬಾಲ್, ಹಾಕಿ ಮತ್ತು ಟೆನಿಸ್‌ನಂತಹ ಕ್ರೀಡೆಗಳಲ್ಲಿ ಪ್ರತಿಭೆಗಳನ್ನು ಬೆಳೆಸಲು ಒತ್ತು ನೀಡಲಾಗುವುದು ಎಂದು ತಿಳಿಸಿದರು.

ಕರ್ನಾಟಕ ಪೊಲೀಸ್ ಇಲಾಖೆ ದೇಶದ ಅತ್ಯುತ್ತಮ ಪೊಲೀಸ್ ಇಲಾಖೆಗಳಲ್ಲಿ ಒಂದಾಗಿದೆ. ಇದು ನಮಗೆ ಹೆಮ್ಮೆಯ ಸಂಗತಿ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ನಮ್ಮ ಪೊಲೀಸ್ ಸಿಬ್ಬಂದಿ ಕ್ರೀಡಾ ಕ್ಷೇತ್ರಕ್ಕೂ ಮಹತ್ವದ ಕೊಡುಗೆ ನೀಡಿದ್ದಾರೆ. ಪೊಲೀಸ್ ಸೇವೆಯಲ್ಲಿ ಕ್ರೀಡೆಗೆ ಸದಾ ಮಹತ್ವದ ಸ್ಥಾನವಿದೆ. ಪೊಲೀಸ್ ಸಿಬ್ಬಂದಿ ಒಲಿಂಪಿಕ್ಸ್ ಮತ್ತು ಏಷ್ಯನ್ ಕ್ರೀಡಾಕೂಟ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತವನ್ನು ಪ್ರತಿನಿಧಿಸಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಕರ್ನಾಟಕ ಪೊಲೀಸ್ ಇಲಾಖೆ ಕ್ರೀಡಾ ಚಟುವಟಿಕೆಗಳನ್ನು ನಿರಂತರವಾಗಿ ಪ್ರೋತ್ಸಾಹಿಸುತ್ತಿದ್ದು, ಹಲವು ರಾಷ್ಟ್ರೀಯ ಮಟ್ಟದ ಪಂದ್ಯಾವಳಿ ಮತ್ತು ಚಾಂಪಿಯನ್‌ಷಿಪ್‌ಗಳನ್ನು ಯಶಸ್ವಿಯಾಗಿ ಆಯೋಜಿಸಿದೆ. ದೇಶದ ವಿವಿಧ ಭಾಗಗಳಿಂದ ಆಗಮಿಸಿದ ಪೊಲೀಸ್ ಸಿಬ್ಬಂದಿಯ ಉತ್ಸಾಹಭರಿತ ಪಾಲ್ಗೊಳ್ಳುವಿಕೆಯಿಂದ ಪಂದ್ಯಾವಳಿ ಯಶಸ್ಸಿಯಾಗಿದೆ ಎಂದರು.

ಆರು ದಿನಗಳ ಚಾಂಪಿಯನ್‌ಷಿಪ್‌ ಅನ್ನು ಯಶಸ್ವಿಯಾಗಿ ಆಯೋಜಿಸಿದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯನ್ನು ಅಭಿನಂದಿಸಿದ ಡಾ. ಪರಮೇಶ್ವರ್, ಡಾ. ಸಲೀಂ ಹಾಗೂ ಆಯೋಜನೆಯಲ್ಲಿ ಶ್ರಮಿಸಿದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿದರು. ಪಂದ್ಯಾವಳಿಯಲ್ಲಿ ಭಾಗವಹಿಸಿದ ಎಲ್ಲ 167 ಕ್ರೀಡಾಪಟುಗಳು, ವಿಜೇತರು, ದ್ವಿತೀಯ ಸ್ಥಾನ ಪಡೆದವರು ಹಾಗೂ ಸಮಗ್ರ ಚಾಂಪಿಯನ್‌ಗಳನ್ನು ಅಭಿನಂದಿಸಿದರು.

ಸಚಿವ ರಿಜ್ವಾನ್ ಅರ್ಷದ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾನಿರೀಕ್ಷಕ ಡಾ. ಎಂ.ಎ. ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಆರ್. ಹಿತೇಂದ್ರ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Share

You cannot copy content of this page