ಸಮಗ್ರ ಸುದ್ದಿ

ಬಾಲ್ಯದಿಂದಲೇ ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸುವುದು ಅಗತ್ಯ: ಡಿಸಿಎಂ ಡಾ. ಜಿ. ಪರಮೇಶ್ವರ

Share

5ನೇ ಮಿನಿ ಕರ್ನಾಟಕ ಕ್ರೀಡಾಕೂಟದಲ್ಲಿ 5,000 ಮಕ್ಕಳ ಭಾಗಿ; ವಿಜೇತರಿಗೆ ಡಿಸಿಎಂ ಬಹುಮಾನ ವಿತರಣೆ

ಬೆಂಗಳೂರು:ಮಕ್ಕಳಲ್ಲಿ ಚಿಕ್ಕ ವಯಸ್ಸಿನಿಂದಲೇ ಕ್ರೀಡೆಯ ಬಗ್ಗೆ ಆಸಕ್ತಿ ಬೆಳೆಸಬೇಕು. ಸ್ಮಾರ್ಟ್‌ಫೋನ್‌ಗಳ ಅತಿಯಾದ ಬಳಕೆ ಹಾಗೂ ಅನಗತ್ಯ ಚಟುವಟಿಕೆಗಳಿಂದ ಅವರನ್ನು ದೂರವಿಟ್ಟು, ಶಿಸ್ತುಬದ್ಧ ಜೀವನ ರೂಪಿಸಿಕೊಳ್ಳಲು ಕ್ರೀಡೆಯಲ್ಲಿ ತೊಡಗಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಉಪಮುಖ್ಯಮಂತ್ರಿಗಳು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಹೇಳಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಕರ್ನಾಟಕ ಒಲಿಂಪಿಕ್ ಸಂಸ್ಥೆಯ ವತಿಯಿಂದ ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ 5ನೇ ಮಿನಿ ಕರ್ನಾಟಕ ಕ್ರೀಡಾಕೂಟ–2026’ರ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ, ವಿಜೇತ ಕ್ರೀಡಾಪಟುಗಳಿಗೆ ಬಹುಮಾನಗಳನ್ನು ವಿತರಿಸಿ ಅವರು ಮಾತನಾಡಿದರು.

ಮಕ್ಕಳ ಭವಿಷ್ಯ ರೂಪಿಸುವಲ್ಲಿ ಕ್ರೀಡೆಯ ಪಾತ್ರ ಮಹತ್ವದ್ದು:

ಕರ್ನಾಟಕದಲ್ಲಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಮಕ್ಕಳಿಗೆ ಕ್ರೀಡೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುವುದರ ಜೊತೆಗೆ, ಅವರಲ್ಲಿ ಕ್ರೀಡೆಯ ಬಗ್ಗೆ ಆಸಕ್ತಿ ಮೂಡಿಸಬೇಕು ಎಂಬ ಉದ್ದೇಶದಿಂದ ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷರಾದ ಡಾ. ಕೆ. ಗೋವಿಂದರಾಜು ಅವರು ಹಿಂದಿನ ಮುಖ್ಯಮಂತ್ರಿಗಳ ಮನವೊಲಿಸಿ ಮಿನಿ ಕರ್ನಾಟಕ ಕ್ರೀಡಾಕೂಟವನ್ನು ಆರಂಭಿಸಿದ್ದಾರೆ. ಇದೀಗ ಐದನೇ ಆವೃತ್ತಿ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಹೇಳಿದರು.

ಸ್ಮಾರ್ಟ್‌ಫೋನ್‌ಗಳ ಅತಿಯಾದ ಬಳಕೆಯಿಂದ ಮಕ್ಕಳನ್ನು ದೂರವಿಟ್ಟು ಕ್ರೀಡೆಯಲ್ಲಿ ತೊಡಗಿಸಬೇಕು

ಇಂದಿನ ಮಕ್ಕಳು ಸ್ಮಾರ್ಟ್‌ಫೋನ್‌ಗಳ ಬಳಕೆಗೆ ಹೆಚ್ಚು ಒಗ್ಗಿಕೊಂಡಿದ್ದಾರೆ. ಚಿಕ್ಕ ವಯಸ್ಸಿನಲ್ಲಿ ಮೊಬೈಲ್‌ಗಳ ಅತಿಯಾದ ಬಳಕೆಯಿಂದ ಮಕ್ಕಳ ಏಕಾಗ್ರತೆ, ಆಸಕ್ತಿ ಹಾಗೂ ಮಾನಸಿಕ ಬೆಳವಣಿಗೆಯ ಮೇಲೆ ದುಷ್ಪರಿಣಾಮ ಉಂಟಾಗುವ ಆತಂಕವಿದೆ. ಮೊಬೈಲ್‌ಗಳಿಂದ ಹೊರಹೊಮ್ಮುವ ತರಂಗಗಳ ಪರಿಣಾಮದ ಬಗ್ಗೆಯೂ ಕಳವಳ ವ್ಯಕ್ತಪಡಿಸಿದ ಅವರು, ಮಕ್ಕಳ ಗಮನವನ್ನು ಉತ್ತಮ ಚಟುವಟಿಕೆಗಳತ್ತ ಹರಿಸುವುದು ಅಗತ್ಯವಾಗಿದೆ ಎಂದರು.

ಕ್ರೀಡೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಮಗುವೂ ಚಿನ್ನದ ಪದಕ ಗೆಲ್ಲಬೇಕು, ಒಲಿಂಪಿಕ್ಸ್ ಅಥವಾ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಬೇಕು ಎಂಬುದಷ್ಟೇ ನಮ್ಮ ಉದ್ದೇಶವಲ್ಲ. ಮಕ್ಕಳು ಯಾವುದಾದರೂ ಒಂದು ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಂಡು ನಿರಂತರವಾಗಿ ತೊಡಗಿಸಿಕೊಂಡರೆ ಅನಗತ್ಯ ಚಟುವಟಿಕೆಗಳಿಂದ ಸಹಜವಾಗಿಯೇ ದೂರವಿರುತ್ತಾರೆ. ಇದೇ ಉದ್ದೇಶದಿಂದ 14 ವರ್ಷದೊಳಗಿನ ಮಕ್ಕಳಿಗೆ ಈ ಕ್ರೀಡಾಕೂಟದ ಮೂಲಕ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಅನೇಕ ಅಂತರರಾಷ್ಟ್ರೀಯ ಕ್ರೀಡಾಪಟುಗಳ ಜೀವನಚರಿತ್ರೆಗಳನ್ನು ಗಮನಿಸಿದರೆ, ಅವರು ಐದು ಅಥವಾ ಆರು ವರ್ಷದ ವಯಸ್ಸಿನಲ್ಲಿಯೇ ಕ್ರೀಡಾಭ್ಯಾಸ ಆರಂಭಿಸಿರುವುದು ತಿಳಿಯುತ್ತದೆ. ವಿಶ್ವಮಟ್ಟದಲ್ಲಿ ಸಾಧನೆ ಮಾಡಿರುವ ಕೆಲವು ಟೆನಿಸ್ ಆಟಗಾರರು ಐದನೇ ವಯಸ್ಸಿನಲ್ಲಿಯೇ ರ‍್ಯಾಕೆಟ್ ಹಿಡಿದಿರುವುದನ್ನು ತಮ್ಮ ಆತ್ಮಚರಿತ್ರೆಯಲ್ಲಿ ದಾಖಲಿಸಿದ್ದಾರೆ. ಹೀಗಾಗಿ ಬಾಲ್ಯದಲ್ಲಿಯೇ ಕ್ರೀಡಾಭ್ಯಾಸ ಆರಂಭಿಸಿದರೆ ಉತ್ತಮ ಕ್ರೀಡಾಪಟುಗಳಾಗಿ ಬೆಳೆಯುವುದರ ಜೊತೆಗೆ ಶಿಸ್ತುಬದ್ಧ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ನನ್ನ ಕ್ರೀಡಾ ಪಯಣ ಶಾಲಾ ದಿನಗಳಲ್ಲಿ ಆರಂಭವಾಯಿತು:

ತಮ್ಮ ಬಾಲ್ಯದ ಅನುಭವವನ್ನು ಸ್ಮರಿಸಿದ ಡಾ. ಜಿ. ಪರಮೇಶ್ವರ ಅವರು, ನಾನು ಪ್ರೌಢಶಾಲೆಯಲ್ಲಿ ಓದುತ್ತಿದ್ದಾಗ ನಮ್ಮ ಗ್ರಾಮದ ಶಿಕ್ಷಕರೊಬ್ಬರು ನನ್ನ ಓಟದ ಸಾಮರ್ಥ್ಯವನ್ನು ಗುರುತಿಸಿ ಓಟದ ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಿದ್ದರು. ಅವರ ಮಾತಿನಂತೆ ಓಡಿದಾಗ ಶಾಲೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದೆ. ನಂತರ ಶಿಕ್ಷಕರು ನನಗೆ ತರಬೇತಿ ನೀಡಲು ಆರಂಭಿಸಿದರು ಎಂದು ಹೇಳಿದರು.

ಅಂದು ಶಾಲೆಯಲ್ಲಿ ಆರಂಭವಾದ ನನ್ನ ಕ್ರೀಡಾ ಪಯಣವು ವಿಶ್ವ ವಿಶ್ವವಿದ್ಯಾನಿಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುವ ಅವಕಾಶ ದೊರೆಯುವವರೆಗೂ ಕೊಂಡೊಯ್ದಿತು. ಅಂದು ಶಿಕ್ಷಕರು ನನ್ನನ್ನು ಗುರುತಿಸಿ ಪ್ರೋತ್ಸಾಹಿಸದಿದ್ದರೆ ಬಹುಶಃ ನಾನು ಕ್ರೀಡಾಪಟುವಾಗಿ ಬೆಳೆಯಲು ಸಾಧ್ಯವಾಗುತ್ತಿರಲಿಲ್ಲ. ಕ್ರೀಡೆಯ ಮೂಲಕ ಶಿಸ್ತುಬದ್ಧ ಜೀವನ ರೂಪಿಸಿಕೊಳ್ಳಲು ಸಾಧ್ಯವಾಯಿತು. ಹೀಗಾಗಿ ಮಕ್ಕಳ ಪ್ರತಿಭೆಯನ್ನು ಚಿಕ್ಕ ವಯಸ್ಸಿನಲ್ಲಿಯೇ ಗುರುತಿಸಿ ಪ್ರೋತ್ಸಾಹಿಸುವುದು ಬಹಳ ಮುಖ್ಯ ಎಂದು ತಿಳಿಸಿದರು.

ರಾಜ್ಯಾದ್ಯಂತ ಕ್ರೀಡಾ ಮೂಲಸೌಕರ್ಯಗಳ ಅಭಿವೃದ್ಧಿ:

ರಾಜ್ಯದಲ್ಲಿ ಕ್ರೀಡಾಪಟುಗಳಿಗೆ ಉತ್ತಮ ಮೂಲಸೌಕರ್ಯ ಕಲ್ಪಿಸಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಈಗಾಗಲೇ ಸುಮಾರು 13 ಸಿಂಥೆಟಿಕ್ ಟ್ರ್ಯಾಕ್‌ಗಳನ್ನು ಹೊಂದಿರುವ ಕ್ರೀಡಾಂಗಣಗಳನ್ನು ನಿರ್ಮಿಸಲಾಗಿದೆ. ಪ್ರತಿಯೊಂದು ಜಿಲ್ಲೆಯ ಕ್ರೀಡಾಂಗಣಗಳಲ್ಲಿಯೂ ಸಿಂಥೆಟಿಕ್ ಟ್ರ್ಯಾಕ್ ಅಳವಡಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆ ಎಂದು ಹೇಳಿದರು.

ಇದರೊಂದಿಗೆ ಈಜುಕೊಳಗಳು, ಹಾಕಿ ಮತ್ತು ಫುಟ್‌ಬಾಲ್ ಮೈದಾನಗಳನ್ನು ಅಭಿವೃದ್ಧಿಪಡಿಸಲಾಗಿದೆ. ಕ್ರಿಕೆಟ್, ಟೆನಿಸ್ ಹಾಗೂ ಈಜು ಸೇರಿದಂತೆ ವಿವಿಧ ಕ್ರೀಡೆಗಳಿಗೆ ಅಕಾಡೆಮಿಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿಯೂ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಬೆಂಗಳೂರಿನ ಜಯನಗರ ಮತ್ತು ಬಸವನಗುಡಿ ಭಾಗದಲ್ಲಿರುವ ಈಜು ಸಂಸ್ಥೆಗಳ ಸಾಧನೆಯನ್ನು ಪ್ರಸ್ತಾಪಿಸಿದ ಅವರು, ಈ ವರ್ಷ ಏಷ್ಯನ್ ಈಜು ಚಾಂಪಿಯನ್‌ಶಿಪ್ ಆಯೋಜಿಸಲಾಗಿದೆ. ಈ ಸಂಸ್ಥೆಗಳು ರಾಷ್ಟ್ರೀಯ ಚಾಂಪಿಯನ್‌ಶಿಪ್‌ಗಳಲ್ಲಿಯೂ ಸುಮಾರು 30 ವರ್ಷಗಳಿಂದ ನಿರಂತರ ಸಾಧನೆ ಮಾಡುತ್ತಿವೆ. ಇಂತಹ ಕ್ರೀಡಾ ಸಂಸ್ಥೆಗಳು ಮತ್ತು ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಾಗಿದೆ ಎಂದರು.

ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಪ್ರೋತ್ಸಾಹಧನ ಹೆಚ್ಚಳ:

ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡುವ ಕರ್ನಾಟಕದ ಕ್ರೀಡಾಪಟುಗಳಿಗೆ ಹೆಚ್ಚಿನ ಆರ್ಥಿಕ ಪ್ರೋತ್ಸಾಹ ನೀಡುವ ಉದ್ದೇಶದಿಂದ ಸರ್ಕಾರ ಬಹುಮಾನದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಿದೆ ಎಂದು ತಿಳಿಸಿದರು.

ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತರಿಗೆ ₹1 ಕೋಟಿ

ಈ ಹಿಂದೆ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ವಿಜೇತರಿಗೆ ₹35 ಲಕ್ಷ, ಬೆಳ್ಳಿ ಪದಕ ವಿಜೇತರಿಗೆ ₹25 ಲಕ್ಷ ಹಾಗೂ ಕಂಚಿನ ಪದಕ ವಿಜೇತರಿಗೆ ₹15 ಲಕ್ಷ ನೀಡಲಾಗುತ್ತಿತ್ತು. ಇದೀಗ ಈ ಮೊತ್ತವನ್ನು ಕ್ರಮವಾಗಿ ₹1 ಕೋಟಿ, ₹75 ಲಕ್ಷ ಹಾಗೂ ₹50 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಹೇಳಿದರು.

ಇತ್ತೀಚಿನ ಏಷ್ಯನ್ ಗೇಮ್ಸ್‌ನಲ್ಲಿ ಕರ್ನಾಟಕದ ಸುಮಾರು ಏಳು ಕ್ರೀಡಾಪಟುಗಳು ಪದಕಗಳನ್ನು ಗಳಿಸಿದ್ದಾರೆ. ಏಷ್ಯನ್ ಗೇಮ್ಸ್ ಹಾಗೂ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕಗಳನ್ನು ಗೆದ್ದ ಕ್ರೀಡಾಪಟುಗಳಿಗೆ ಹೆಚ್ಚಿಸಿರುವ ಪ್ರೋತ್ಸಾಹಧನವನ್ನು ಇದೇ ವರ್ಷ ವಿತರಿಸಲಾಗಿದೆ ಎಂದು ತಿಳಿಸಿದರು.

ಒಲಿಂಪಿಕ್ಸ್ ಚಿನ್ನದ ಪದಕ ವಿಜೇತರಿಗೆ ₹6 ಕೋಟಿ ಪ್ರೋತ್ಸಾಹಧನ

ಅದೇ ರೀತಿ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ಚಿನ್ನದ ಪದಕಕ್ಕೆ ₹6 ಕೋಟಿ, ಬೆಳ್ಳಿ ಪದಕಕ್ಕೆ ₹4 ಕೋಟಿ ಹಾಗೂ ಕಂಚಿನ ಪದಕಕ್ಕೆ ₹3 ಕೋಟಿ ಪ್ರೋತ್ಸಾಹಧನ ನೀಡಲಾಗುವುದು. ಕ್ರೀಡಾಪಟುಗಳು ಇನ್ನಷ್ಟು ಆಸಕ್ತಿಯಿಂದ ಅಭ್ಯಾಸ ಮಾಡಿ ಉತ್ತಮ ಸಾಧನೆ ಮಾಡುವಂತೆ ಉತ್ತೇಜಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದರು.

ಸರ್ಕಾರಿ ಉದ್ಯೋಗದಲ್ಲಿ ಕ್ರೀಡಾಪಟುಗಳಿಗೆ ಮೀಸಲಾತಿ:

ಕ್ರೀಡಾಪಟುಗಳಿಗೆ ಉದ್ಯೋಗ ಭದ್ರತೆ ಕಲ್ಪಿಸುವ ಉದ್ದೇಶದಿಂದ ಸರ್ಕಾರಿ ನೇಮಕಾತಿಯಲ್ಲಿ ಮೀಸಲಾತಿ ಒದಗಿಸಲಾಗಿದೆ. ಪೊಲೀಸ್ ಹಾಗೂ ಅರಣ್ಯ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ಶೇ.3ರಷ್ಟು ಮತ್ತು ರಾಜ್ಯದ ಇತರ ಇಲಾಖೆಗಳಲ್ಲಿ ಶೇ.2ರಷ್ಟು ಮೀಸಲಾತಿ ಕಲ್ಪಿಸಲಾಗಿದೆ ಎಂದು ಹೇಳಿದರು.

ಈ ಮೀಸಲಾತಿಯ ಪ್ರಯೋಜನದಿಂದ ಈಗಾಗಲೇ 12 ಮಂದಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ಗಳು ಹಾಗೂ 72 ಮಂದಿ ಪೊಲೀಸ್ ಕಾನ್‌ಸ್ಟೆಬಲ್‌ಗಳು ಆಯ್ಕೆಯಾಗಿದ್ದಾರೆ. ಕ್ರೀಡಾಪಟುಗಳ ಸಾಧನೆಯನ್ನು ಗುರುತಿಸಿ ಅವರಿಗೆ ಸರ್ಕಾರಿ ಸೇವೆಯಲ್ಲಿ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರವು ಪ್ರಸ್ತುತ ಸುಮಾರು 72 ಸಾವಿರ ಹುದ್ದೆಗಳಿಗೆ ನೇಮಕಾತಿ ಕೈಗೊಳ್ಳುತ್ತಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ ವಿವಿಧ ಇಲಾಖೆಗಳ ಮೀಸಲಾತಿಯಡಿ ಸುಮಾರು 1,500 ಹುದ್ದೆಗಳು ಕ್ರೀಡಾಪಟುಗಳಿಗೆ ದೊರೆಯಲಿವೆ ಎಂದು ವಿವರಿಸಿದರು.

ವಿಶ್ವವಿದ್ಯಾನಿಲಯ ಮಟ್ಟದಲ್ಲಿಯೂ ಕ್ರೀಡಾಕೂಟ ಆರಂಭಿಸಲು ಚಿಂತನೆ:

ಮಿನಿ ಕರ್ನಾಟಕ ಕ್ರೀಡಾಕೂಟದ ಮಾದರಿಯಲ್ಲಿಯೇ ವಿಶ್ವವಿದ್ಯಾನಿಲಯ ಹಂತದ ವಿದ್ಯಾರ್ಥಿಗಳಿಗೂ ಕ್ರೀಡೆಯಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವ ಉದ್ದೇಶದಿಂದ ‘ಯೂನಿವರ್ಸಿಟಿ ಗೇಮ್ಸ್’ ಆರಂಭಿಸುವ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ ಎಂದು ಹೇಳಿದರು.

ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಸೂಕ್ತ ತರಬೇತಿ ಹಾಗೂ ಸ್ಪರ್ಧಾತ್ಮಕ ಅವಕಾಶಗಳನ್ನು ಕಲ್ಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ವಿಶ್ವವಿದ್ಯಾನಿಲಯ ಕ್ರೀಡಾಕೂಟಗಳನ್ನು ಆರಂಭಿಸಲು ಅಗತ್ಯ ಸೌಲಭ್ಯ ಹಾಗೂ ಸಿದ್ಧತೆಗಳನ್ನು ಮಾಡಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದರು.

ಮಕ್ಕಳನ್ನು ಕ್ರೀಡೆಯಲ್ಲಿ ತೊಡಗಿಸಲು ಪೋಷಕರು ಪ್ರೋತ್ಸಾಹಿಸಬೇಕು:

ಐದನೇ ಮಿನಿ ಕರ್ನಾಟಕ ಕ್ರೀಡಾಕೂಟದಲ್ಲಿ ಸುಮಾರು 5,000 ಮಕ್ಕಳು ಭಾಗವಹಿಸಿರುವುದು ಸಂತಸದ ಸಂಗತಿಯಾಗಿದೆ. ಕೆಲವರು ಪದಕಗಳನ್ನು ಗಳಿಸಿದ್ದಾರೆ. ಎಲ್ಲರಿಗೂ ಪದಕ ಗೆಲ್ಲಲು ಸಾಧ್ಯವಾಗದಿದ್ದರೂ ಕ್ರೀಡಾಕೂಟದಲ್ಲಿ ಭಾಗವಹಿಸಿರುವುದೇ ಮುಖ್ಯ. ಸ್ಪರ್ಧೆಗಳಲ್ಲಿ ಭಾಗವಹಿಸಿದ ಎಲ್ಲ ಮಕ್ಕಳಿಗೂ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ಮಕ್ಕಳು ಕ್ರೀಡೆಯಲ್ಲಿ ಭಾಗವಹಿಸಲು ಪೋಷಕರ ಪ್ರೋತ್ಸಾಹ ಅತ್ಯಂತ ಅಗತ್ಯವಾಗಿದೆ. ಪೋಷಕರು ಆಸಕ್ತಿ ತೋರಿಸಿರುವುದರಿಂದಲೇ ಇಷ್ಟೊಂದು ಮಕ್ಕಳು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿದೆ. ಮಕ್ಕಳನ್ನು ಕ್ರೀಡೆಯಿಂದ ದೂರವಿಟ್ಟರೆ ಅವರು ಮಾದಕವಸ್ತು ಹಾಗೂ ಮದ್ಯಪಾನದಂತಹ ದುಶ್ಚಟಗಳಿಗೆ ಬಲಿಯಾಗುವ ಅಪಾಯವಿದೆ. ಇಂತಹ ಚಟಗಳು ಅವರ ಭವಿಷ್ಯವನ್ನು ಹಾಳುಮಾಡಬಹುದು ಎಂದು ಎಚ್ಚರಿಸಿದರು.

ಮಕ್ಕಳು ಕ್ರೀಡೆಯಲ್ಲಿ ಗೆದ್ದರೂ ಸೋತರೂ ಪೋಷಕರು ಅವರನ್ನು ಪ್ರೋತ್ಸಾಹಿಸಬೇಕು. ಯಾವುದಾದರೂ ಒಂದು ಕ್ರೀಡೆಯಲ್ಲಿ ನಿರಂತರವಾಗಿ ಭಾಗವಹಿಸುವಂತೆ ಉತ್ತೇಜಿಸಬೇಕು. ಕ್ರೀಡೆಯಿಂದ ಮಕ್ಕಳಲ್ಲಿ ಶಿಸ್ತು, ಆತ್ಮವಿಶ್ವಾಸ, ಏಕಾಗ್ರತೆ ಹಾಗೂ ಉತ್ತಮ ಜೀವನಶೈಲಿ ರೂಪುಗೊಳ್ಳುತ್ತದೆ ಎಂದು ಹೇಳಿದರು.

ಮಿನಿ ಕರ್ನಾಟಕ ಕ್ರೀಡಾಕೂಟವು ಮುಂದಿನ ವರ್ಷಗಳಲ್ಲಿಯೂ ಯಶಸ್ವಿಯಾಗಿ ನಡೆಯಲಿ. ರಾಜ್ಯದ ಇನ್ನಷ್ಟು ಮಕ್ಕಳಿಗೆ ಕ್ರೀಡೆಯಲ್ಲಿ ಭಾಗವಹಿಸಲು ಅವಕಾಶ ದೊರೆಯಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ‌ ಅರಣ್ಯ ಸಚಿವರಾದ ರಾಮಲಿಂಗಾ ರೆಡ್ಡಿ, ಕರ್ನಾಟಕ ಒಲಂಪಿಕ್‌ ಸಂಸ್ಥೆಯ ಅಧ್ಯಕ್ಷರಾದ ಡಾ. ಕೆ.ಗೋವಿಂದರಾಜು, ಯುವ ಸಬಲೀಕರಣ‌ ಮತ್ತು ಕ್ರೀಡಾ ಆಯುಕ್ತರಾದ ಎಂ.ಎನ್.ಅನುಚೇತ್, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಅರುಣ್ ಮಾಚಯ್ಯ ಅವರು ಇದ್ದರು.


Share

You cannot copy content of this page