ಸಮಗ್ರ ಸುದ್ದಿ

ರಾಜ್ಯದಲ್ಲಿ 4,500 ಕೋಟಿ ರೂ. ವೆಚ್ಚದಲ್ಲಿ 1,350 ಕೆಪಿಎಸ್ ಶಾಲೆಗಳ ನಿರ್ಮಾಣ: ಸಚಿವ ಮಧು ಬಂಗಾರಪ್ಪ

Share

ರಾಮನಗರ:ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ಮತ್ತು ಅವರ ಭವಿಷ್ಯವನ್ನು ಉಜ್ವಲಗೊಳಿಸುವ ಉದ್ದೇಶದಿಂದ ರಾಜ್ಯದಲ್ಲಿ ಕೆಪಿಎಸ್ (ಕರ್ನಾಟಕ ಪಬ್ಲಿಕ್ ಸ್ಕೂಲ್) ಶಾಲೆಗಳ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ನಾಂದಿ ಹಾಡಲಾಗುತ್ತಿದೆ. ರಾಜ್ಯಾದ್ಯಂತ ಸುಮಾರು 1,350 ಕೆಪಿಎಸ್ ಶಾಲೆಗಳನ್ನು 4,500 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಮಾಗಡಿ ವಿಧಾನಸಭಾ ಕ್ಷೇತ್ರದ ಕೂಟಗಲ್ ಹೋಬಳಿಯ ಯರೇಹಳ್ಳಿ ಗ್ರಾಮದಲ್ಲಿ ಇಂದು ನೂತನ ಕೆಪಿಎಸ್ ಶಾಲೆ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿ ಮತ್ತು ಪೌರಾಡಳಿತ ಸಚಿವ ಎಚ್.ಸಿ. ಬಾಲಕೃಷ್ಣ ಅವರ ನೇತೃತ್ವದಲ್ಲಿ ಕೂಟಗಲ್ ವ್ಯಾಪ್ತಿಯಲ್ಲಿ ಸುಮಾರು 50 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.

ಖಾಸಗಿ ಶಾಲೆಗಳಿಗೆ ಕಡಿಮೆಯಿಲ್ಲದ ಗುಣಮಟ್ಟದ ಶಿಕ್ಷಣ

ಶಿಕ್ಷಣ ಸಚಿವನಾಗಿ ಮಕ್ಕಳ ಭವಿಷ್ಯ ರೂಪಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ. ಯರೇಹಳ್ಳಿ ಗ್ರಾಮದಲ್ಲಿ ಕೆಪಿಎಸ್ ಶಾಲೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿರುವುದು ಸಂತೋಷ ತಂದಿದೆ. ಗ್ರಾಮಸ್ಥರು ತಮ್ಮ ಮಕ್ಕಳನ್ನು ಈ ಶಾಲೆಗೆ ದಾಖಲಿಸಬೇಕು. ಒಂದೇ ಸೂರಿನಡಿ ಎಲ್‌ಕೆಜಿಯಿಂದ ಪಿಯುಸಿವರೆಗೆ ಸುಮಾರು 14 ವರ್ಷಗಳ ಗುಣಮಟ್ಟದ ಶಿಕ್ಷಣ ದೊರೆಯಲಿದೆ ಎಂದು ಹೇಳಿದರು.

ಕೆಪಿಎಸ್ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗೂ ಕಡಿಮೆಯಿರುವುದಿಲ್ಲ. ಪ್ರತಿಯೊಂದು ವಿಷಯಕ್ಕೂ ಪ್ರತ್ಯೇಕ ಶಿಕ್ಷಕರಿರುತ್ತಾರೆ. ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ, ಮೂರನೇ ತರಗತಿಯಿಂದ ಕೃತಕ ಬುದ್ಧಿಮತ್ತೆ (ಎಐ) ಕಲಿಕೆ, ಆರನೇ ತರಗತಿಯಿಂದ ವೃತ್ತಿ ಶಿಕ್ಷಣ ಸೇರಿದಂತೆ ಆಧುನಿಕ ಶಿಕ್ಷಣ ಸೌಲಭ್ಯಗಳನ್ನು ಒದಗಿಸಲಾಗುವುದು. ದ್ವಿ ಭಾಷಾ ನೀತಿ ಇರುತ್ತದೆ. ಅಷ್ಟೇ ಅಲ್ಲದೆ, ಕೆಪಿಎಸ್ ಶಾಲೆಗಳ ವಿದ್ಯಾರ್ಥಿಗಳಿಗೆ ಸರ್ಕಾರದಿಂದಲೇ ಉಚಿತ ಬಸ್ ವ್ಯವಸ್ಥೆಯನ್ನೂ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

18 ಸಾವಿರ ಶಿಕ್ಷಕರ ನೇಮಕಾತಿಗೆ ಚಾಲನೆ:

ಶಾಲೆಗಳ ಅಭಿವೃದ್ಧಿಗೆ ಮೂಲಸೌಕರ್ಯ ಎಷ್ಟು ಮುಖ್ಯವೋ, ಶಿಕ್ಷಕರೂ ಅಷ್ಟೇ ಮುಖ್ಯ. ಈ ಹಿನ್ನೆಲೆಯಲ್ಲಿ ನಮ್ಮ ಇಲಾಖೆಯಿಂದ ಸುಮಾರು 18 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಇದು ರಾಜ್ಯದಲ್ಲಿ ಒಂದೇ ಹಂತದಲ್ಲಿ ನಡೆಯುತ್ತಿರುವ ಅತಿ ದೊಡ್ಡ ಶಿಕ್ಷಕರ ನೇಮಕಾತಿ ಪ್ರಯತ್ನಗಳಲ್ಲಿ ಒಂದಾಗಿರುವುದು ಹೆಮ್ಮೆಯ ಸಂಗತಿ ಎಂದರು.

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಕರೆ ಮಾಡಿ, ನನಗೆ ಬೇರೆ ಇಲಾಖೆ ಬೇಕೇ ಎಂದು ಕೇಳಿದ್ದರು. ಆದರೆ, ಯಾವುದೇ ಯೋಚನೆಯಿಲ್ಲದೆ ನನಗೆ ಶಿಕ್ಷಣ ಇಲಾಖೆಯೇ ಬೇಕು ಎಂದು ತಿಳಿಸಿದ್ದೆ. ದೇವರನ್ನು ಎರಡನೇ ಸ್ಥಾನದಲ್ಲಿಟ್ಟು, ಶಾಲಾ ಮಕ್ಕಳನ್ನು ಮೊದಲ ಸ್ಥಾನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿದ್ದೇನೆ. ಮಕ್ಕಳ ಭವಿಷ್ಯ ರೂಪಿಸುವುದಕ್ಕಿಂತ ದೊಡ್ಡ ಜವಾಬ್ದಾರಿ ಮತ್ತೊಂದಿಲ್ಲ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರನ್ನು ಈ ಸಂದರ್ಭದಲ್ಲಿ ಸ್ಮರಿಸಿದ ಸಚಿವರು, ಬಂಗಾರಪ್ಪ ಅವರ ಶಿಷ್ಯರಾಗಿರುವ ಡಿ.ಕೆ. ಶಿವಕುಮಾರ್ ಅವರೊಂದಿಗೆ ಇಂದು ಕೆಲಸ ಮಾಡುತ್ತಿರುವುದು ತಂದೆಯವರ ಆಡಳಿತದಲ್ಲಿ ಕೆಲಸ ಮಾಡಿದ ತೃಪ್ತಿ ನೀಡುತ್ತಿದೆ. ಡಿ.ಕೆ. ಶಿವಕುಮಾರ್ ಅವರು ಚಿಕ್ಕ ವಯಸ್ಸಿನಲ್ಲಿಯೇ ಸಚಿವರಾಗಲು ಬಂಗಾರಪ್ಪ ಅವರು ಅವಕಾಶ ಕಲ್ಪಿಸಿದ್ದರು ಎಂದು ನೆನಪಿಸಿಕೊಂಡರು.

ರಾಜ್ಯದ ಐದು ಗ್ಯಾರಂಟಿ ಯೋಜನೆಗಳು ಜನರಿಗೆ ಪರಿಣಾಮಕಾರಿಯಾಗಿ ತಲುಪಿದ್ದು, ಅವರ ಬದುಕಿಗೆ ಆರ್ಥಿಕ ಶಕ್ತಿ ತುಂಬಿವೆ. ಈ ಭಾಗದ ಭೂಮಿ ಹಸಿರಾಗಿರಲು ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ದೂರದೃಷ್ಟಿಯೇ ಪ್ರಮುಖ ಕಾರಣ. ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸಿದ್ದರು ಎಂದು ತಿಳಿಸಿದರು.

ರೈತರ ಬದುಕಿಗೆ ಶಕ್ತಿ ತುಂಬಿದ ಬಂಗಾರಪ್ಪ: ಡಿ ಕೆ ಸುರೇಶ್

“ಬಮೂಲ್ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್* ಮಾತನಾಡಿ, ಸುಮಾರು 35 ವರ್ಷಗಳ ಹಿಂದೆ ಎಸ್. ಬಂಗಾರಪ್ಪ ಅವರು ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದ್ದರು. ಅಂದಿನಿಂದ ಇಂದಿನವರೆಗೂ ಈ ಯೋಜನೆ ಮುಂದುವರಿದಿದೆ. ರೈತರಿಗೆ ನೀಡುವ ಉಚಿತ ವಿದ್ಯುತ್‌ನ ವೆಚ್ಚವನ್ನು ಸರ್ಕಾರವೇ ಭರಿಸುತ್ತಿದೆ. ಇದೀಗ ಕಾಂಗ್ರೆಸ್ ಸರ್ಕಾರ ಮನೆಗಳಿಗೂ ಉಚಿತ ವಿದ್ಯುತ್ ನೀಡುವ ಮೂಲಕ ಜನರ ಬದುಕಿಗೆ ನೆರವಾಗುತ್ತಿದೆ ಎಂದರು.

ಮಧು ಬಂಗಾರಪ್ಪ ಅವರು ಇಲ್ಲಿಗೆ ಕೇವಲ ಕಾರ್ಯಕ್ರಮಕ್ಕಾಗಿ ಬಂದಿಲ್ಲ. ಈ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಬಂದಿದ್ದಾರೆ. ಪ್ರತಿಯೊಬ್ಬ ಪೋಷಕರಿಗೂ ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಬೇಕೆಂಬ ಆಸೆಯಿರುತ್ತದೆ. ಆ ಆಶಯವನ್ನು ಕೆಪಿಎಸ್ ಶಾಲೆಗಳು ಈಡೇರಿಸಲಿವೆ. ಎಲ್‌ಕೆಜಿಯಿಂದ ಪಿಯುಸಿವರೆಗೆ ಒಂದೇ ಸೂರಿನಡಿ ಶಿಕ್ಷಣ ದೊರೆಯುವ ವ್ಯವಸ್ಥೆ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ತರಲಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಹಕಾರದೊಂದಿಗೆ ಸಚಿವ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ರಾಜ್ಯಾದ್ಯಂತ ಸುಮಾರು 1,300 ಕೆಪಿಎಸ್ ಶಾಲೆಗಳನ್ನು ಸ್ಥಾಪಿಸಲಾಗುತ್ತಿದ್ದು, ಇದು ಶಿಕ್ಷಣ ವ್ಯವಸ್ಥೆಯಲ್ಲಿ ಹೊಸ ಕ್ರಾಂತಿ ಸೃಷ್ಟಿಸಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪಶುಸಂಗೋಪನಾ ಸಚಿವ ಪುಟ್ಟರಂಗಶೆಟ್ಟಿ, ವಿಧಾನ ಪರಿಷತ್ ಸದಸ್ಯ ಎಸ್. ರವಿ, ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ಪಿ. ನಾಗರಾಜ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜು ಎಚ್.ವಿ., ಮಾಜಿ ವಿಧಾನ ಪರಿಷತ್ ಸದಸ್ಯ ಸಿ.ಎಂ. ಲಿಂಗಪ್ಪ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.


Share

You cannot copy content of this page