ಬೆಂಗಳೂರು:ಪಾಲಿಕೆ ವ್ಯಾಪ್ತಿಯಲ್ಲಿ ಮಾನ್ಯ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ರವರ ನಿರ್ದೇಶನದ ಮೇರೆಗೆ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನವನ್ನು ನಿರಂತರವಾಗಿ ಕೈಗೊಳ್ಳಲಾಗುತ್ತಿದ್ದು, ವಾಣಿಜ್ಯ ಸಂಸ್ಥೆಗಳು, ಬೀದಿಬದಿ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ತ್ಯಾಜ್ಯದ ವೈಜ್ಞಾನಿಕ ವಿಲೇವಾರಿ ಮಾಡುವಂತೆ ಮತ್ತು ನಿಷೇಧಿತ ಏಕಬಳಕೆಯ ಪ್ಲಾಸ್ಟಿಕ್ ಬಳಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಕೆಲವು ವಾಣಿಜ್ಯ ಸಂಸ್ಥೆಗಳು, ಬೀದಿಬದಿ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ತ್ಯಾಜ್ಯವನ್ನು ಮೂಲದಲ್ಲೇ ವಿಂಗಡಿಸದೆ ಅಸಮರ್ಪಕ ತ್ಯಾಜ್ಯ ನಿರ್ವಹಣೆ ಮಾಡುತ್ತಿರುವುದು, ನಿಷೇಧಿತ ಏಕಬಳಕೆಯ ಪ್ಲಾಸ್ಟಿಕ್ ಬಳಸುವುದು ಹಾಗೂ ರಸ್ತೆಬದಿಗಳಲ್ಲಿ ಅನಧಿಕೃತವಾಗಿ ಕಸ ಎಸೆಯುತ್ತಿರುವುದು ಕಂಡುಬರುತ್ತಿದೆ. ಈ ನಿಟ್ಟಿನಲ್ಲಿ ಪಾಲಿಕೆಯ ಆಯುಕ್ತರಾದ ಕೆ. ಎನ್. ರಮೇಶ್ ರವರ ನೇತೃತ್ವದಲ್ಲಿ ಅಧಿಕಾರಿಗಳು ನಿರಂತರ ತಪಾಸಣೆ ಹಾಗೂ ಜಾಗೃತಿ ಕಾರ್ಯಾಚರಣೆ ನಡೆಸಿ, ದಂಡ ವಿಧಿಸಿ ಎಚ್ಚರಿಕೆ ನೀಡುತ್ತಿದ್ದಾರೆ.
ಈಜಿಪುರದ ಪಬ್ನಲ್ಲಿ ಅಸಮರ್ಪಕ ತ್ಯಾಜ್ಯ ನಿರ್ವಹಣೆ; 10,000 ರೂ. ದಂಡ
ಈ ಕಾರ್ಯಾಚರಣೆಯ ಅಂಗವಾಗಿ ಬಿಟಿಎಂ ವಿಭಾಗದ ಈಜಿಪುರದ 80 ಅಡಿ ರಸ್ತೆಯಲ್ಲಿರುವ ‘ಜಾಲಿ ಜಾನಿ ಪಬ್’ (Jolly Johnny Pub) ಪರಿಶೀಲನೆ ವೇಳೆ ತ್ಯಾಜ್ಯವನ್ನು ಹಸಿ ಮತ್ತು ಒಣ ಕಸವಾಗಿ ವಿಂಗಡಿಸದೆ ಅಸಮರ್ಪಕ ನಿರ್ವಹಣೆ ಮಾಡುತ್ತಿರುವುದು ಕಂಡುಬಂದಿದೆ. ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಪಬ್ಗೆ 10,000 ರೂ. ದಂಡ ವಿಧಿಸಿ, ಸಮರ್ಪಕ ಕಸ ವಿಂಗಡಣೆ ಕುರಿತು ಜಾಗೃತಿ ಮೂಡಿಸಲಾಯಿತು.
ಕೋರಮಂಗಲದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಜಾಗೃತಿ; 24 ಪ್ರಕರಣಗಳಲ್ಲಿ 12,900 ರೂ. ದಂಡ
ಬಿಟಿಎಂ ವಿಧಾನಸಭಾ ಕ್ಷೇತ್ರದ ಕೋರಮಂಗಲದ ಸರ್ಜಾಪುರ ಮುಖ್ಯರಸ್ತೆಯ ಪಾದಚಾರಿ ಮಾರ್ಗಗಳಲ್ಲಿ ವ್ಯಾಪಾರ ನಡೆಸುವ ಬೀದಿಬದಿ ವ್ಯಾಪಾರಿಗಳಿಗೆ ಘನತ್ಯಾಜ್ಯ ನಿರ್ವಹಣೆ ಹಾಗೂ ಏಕಬಳಕೆ ಪ್ಲಾಸ್ಟಿಕ್ (SUP) ನಿಷೇಧದ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವ್ಯಾಪಾರಿಗಳು ತಮ್ಮ ಅಂಗಡಿಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳುವುದು, ಏಕಬಳಕೆ ಪ್ಲಾಸ್ಟಿಕ್ ಬಳಸದಿರುವುದು ಹಾಗೂ ಹಸಿ, ಒಣ ಮತ್ತು ನಿರಾಕರಿಸಿದ ತ್ಯಾಜ್ಯಕ್ಕೆ ಪ್ರತ್ಯೇಕ ಕಸದ ಬುಟ್ಟಿಗಳನ್ನು ಇರಿಸುವಂತೆ ಅರಿವು ಮೂಡಿಸಲಾಯಿತು. ತಪಾಸಣೆ ವೇಳೆ ನಿಯಮ ಉಲ್ಲಂಘಿಸಿದ 24 ಪ್ರಕರಣಗಳನ್ನು ದಾಖಲಿಸಿ ಒಟ್ಟು 12,900 ರೂ. ದಂಡ ವಸೂಲಿ ಮಾಡಲಾಗಿದೆ.
ಸಿಂಗಸಂದ್ರ ವಾರ್ಡ್ನಲ್ಲಿ ರಸ್ತೆಬದಿ ಕಸ ಎಸೆದವರಿಗೆ 1,000 ರೂ. ದಂಡ
ಮತ್ತೊಂದೆಡೆ, ಸಿಂಗಸಂದ್ರ ವಾರ್ಡ್ ವ್ಯಾಪ್ತಿಯಲ್ಲಿ ಅಧಿಕಾರಿಗಳು ಗಸ್ತು ಕಾರ್ಯಾಚರಣೆ ನಡೆಸಿ ಸಾರ್ವಜನಿಕರಿಗೆ ಘನತ್ಯಾಜ್ಯ ನಿರ್ವಹಣೆ ಕುರಿತು ಅರಿವು ಮೂಡಿಸಿದರು. ಈ ಸಂದರ್ಭದಲ್ಲಿ ನಾಗನಾಥಪುರದ 1ನೇ ಕ್ರಾಸ್ ಬಳಿ ರಸ್ತೆಬದಿಯಲ್ಲಿ ಅನಧಿಕೃತವಾಗಿ ಕಸ ಎಸೆದ ವ್ಯಕ್ತಿಗೆ 1,000 ರೂ. ದಂಡ ವಿಧಿಸಲಾಯಿತು. ಇದರೊಂದಿಗೆ ಪಾಲಿಕೆ ವ್ಯಾಪ್ತಿಯಲ್ಲಿ ಇಂದು ನಡೆದ ಕಾರ್ಯಾಚರಣೆಯಲ್ಲಿ ಒಟ್ಟು 23,900 ರೂ. ದಂಡ ವಸೂಲಿ ಮಾಡಲಾಗಿದೆ.
ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಹಾಗೂ ನಿಯಮ ಪಾಲನೆಗೆ ಕಟ್ಟುನಿಟ್ಟಿನ ಸೂಚನೆ
ದಂಡ ವಿಧಿಸಿದ ಬಳಿಕ ಸಂಬಂಧಪಟ್ಟ ಸಂಸ್ಥೆಗಳ ಸಿಬ್ಬಂದಿ, ಬೀದಿಬದಿ ವ್ಯಾಪಾರಿಗಳು ಹಾಗೂ ಸಾರ್ವಜನಿಕರಿಗೆ ತ್ಯಾಜ್ಯ ನಿರ್ವಹಣೆಯ ಮಹತ್ವದ ಕುರಿತು ಅಧಿಕಾರಿಗಳು ತಿಳಿವಳಿಕೆ ನೀಡಿದರು. ಉತ್ಪತ್ತಿಯಾಗುವ ಕಸವನ್ನು ಮೂಲದಲ್ಲೇ ಕಡ್ಡಾಯವಾಗಿ ಹಸಿ, ಒಣ ಹಾಗೂ ನಿರಾಕರಿಸಿದ ತ್ಯಾಜ್ಯವೆಂದು ಪ್ರತ್ಯೇಕ ಬುಟ್ಟಿಗಳಲ್ಲಿ ವಿಂಗಡಿಸಿ ಕಸ ಸಂಗ್ರಹಣಾ ವಾಹನಗಳಿಗೆ ನೀಡಬೇಕು, ಯಾವುದೇ ಕಾರಣಕ್ಕೂ ರಸ್ತೆಬದಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯಬಾರದು ಮತ್ತು ಪರಿಸರಕ್ಕೆ ಹಾನಿಕಾರಕವಾದ ನಿಷೇಧಿತ ಏಕಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಪೂರ್ಣವಾಗಿ ತ್ಯಜಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ
ಪಬ್ಗಳು, ಹೋಟೆಲ್ಗಳು, ವಾಣಿಜ್ಯ ಸಂಸ್ಥೆಗಳು, ಬೀದಿಬದಿ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಕಡ್ಡಾಯವಾಗಿ ಘನತ್ಯಾಜ್ಯ ನಿರ್ವಹಣೆ ಹಾಗೂ ಪ್ಲಾಸ್ಟಿಕ್ ನಿಷೇಧದ ನಿಯಮಗಳನ್ನು ಪಾಲಿಸಬೇಕು. ನಿಯಮ ಉಲ್ಲಂಘಿಸಿ ನಗರದ ನೈರ್ಮಲ್ಯಕ್ಕೆ ಧಕ್ಕೆ ತರುವವರ ವಿರುದ್ಧ ಮುಲಾಜಿಲ್ಲದೆ ನಿರಂತರ ತಪಾಸಣೆ ನಡೆಸಿ ದಂಡ ಹಾಗೂ ಕಾನೂನು ಕ್ರಮ ಮುಂದುವರಿಸಲಾಗುವುದು ಎಂದು ಆಯುಕ್ತರಾದ ಕೆ. ಎನ್. ರಮೇಶ್ ರವರು ಎಚ್ಚರಿಕೆ ನೀಡಿದ್ದಾರೆ.
ಕಾರ್ಯಾಚರಣೆಯಲ್ಲಿ ಕಿರಿಯ ಆರೋಗ್ಯ ಪರಿವೀಕ್ಷಕರು, ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.
