ಸಮಗ್ರ ಸುದ್ದಿ

ಗ್ರಾಮೀಣ ಆರ್ಥಿಕತೆಯ ಬಲವರ್ಧನೆಯಲ್ಲಿ ಪಶುಸಂಗೋಪನೆಯ ಪಾತ್ರ ಮಹತ್ವದ್ದು:ಡಿಸಿಎಂ ಡಾ. ಜಿ. ಪರಮೇಶ್ವರ

Share

ತುಮಕೂರು:ಪಶುಸಂಗೋಪನಾ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಪಶುಸಂಪತ್ತಿನ ಸಂರಕ್ಷಣೆ ಹಾಗೂ ರೈತರಿಗೆ ಗುಣಮಟ್ಟದ ಪಶುವೈದ್ಯಕೀಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಹೇಳಿದರು.

ನಗರದ ಕಲ್ಟೆಕ್ಸ್‌ ಸರ್ಕಲ್‌ ಸಮೀಪದ ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪಶುಸಂಗೋಪನಾ ಇಲಾಖೆ ವತಿಯಿಂದ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.

ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಇಲಾಖೆಯ ಆಡಳಿತ ಕಚೇರಿ ಹಾಗೂ ಉಪನಿರ್ದೇಶಕರ ಕಚೇರಿಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ, 50 ಲಕ್ಷ ರೂ. ವೆಚ್ಚದಲ್ಲಿ ಸಭಾಂಗಣ ನಿರ್ಮಾಣ ಕಾಮಗಾರಿಗೆ ಚಾಲನೆ, ಬೆಳ್ಳಾವಿ ಮತ್ತು ಅರಕೆರೆಯಲ್ಲಿ ತಲಾ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಪಶು ಆಸ್ಪತ್ರೆಗಳ ನೂತನ ಕಟ್ಟಡಗಳನ್ನು ಉದ್ಘಾಟಿಸಿ, ಹಿರೇಗುಂಡಕಲ್‌ನಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಪಶು ಚಿಕಿತ್ಸಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದೇನೆ ಎಂದು ತಿಳಿಸಿದರು.

ಗ್ರಾಮೀಣ ಆರ್ಥಿಕತೆಯಲ್ಲಿ ಪಶುಸಂಗೋಪನೆಯ ಮಹತ್ವ: ಪಶುಸಂಗೋಪನೆ ನಮ್ಮ ಗ್ರಾಮೀಣ ಆರ್ಥಿಕತೆಯ ಪ್ರಮುಖ ಭಾಗವಾಗಿದೆ. ಮನುಷ್ಯನ ಬದುಕಿನೊಂದಿಗೆ ಪ್ರಾಣಿಗಳ ಬದುಕು ಬೆಸೆದುಕೊಂಡಿದ್ದು, ಅವುಗಳನ್ನು ಸಂರಕ್ಷಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ತುಮಕೂರು ಜಿಲ್ಲೆಯಲ್ಲಿ ಹಸು, ಎಮ್ಮೆ ಸೇರಿದಂತೆ ಸುಮಾರು 5 ಲಕ್ಷ ಜಾನುವಾರುಗಳಿದ್ದು, 17 ಲಕ್ಷ ಕುರಿ ಮತ್ತು ಮೇಕೆಗಳಿವೆ. ವಿಶೇಷವಾಗಿ ಶಿರಾ, ಪಾವಗಡ, ಮಧುಗಿರಿ ಹಾಗೂ ಚಿಕ್ಕನಾಯಕನಹಳ್ಳಿ ತಾಲ್ಲೂಕುಗಳಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ಹೆಚ್ಚಾಗಿದೆ ಎಂದರು.

ಕುರಿ ಸಾಕಾಣಿಕೆಯಲ್ಲಿ ತೊಡಗಿದ್ದ ಬಡ್ಡಿ ಈರಣ್ಣ ಎಂಬುವವರು ಒಬ್ಬರೇ ಸುಮಾರು 5 ಸಾವಿರ ಕುರಿಗಳನ್ನು ಸಾಕುತ್ತಿದ್ದರು. ಪಶುಸಂಗೋಪನೆಯು ರೈತರ ಜೀವನೋಪಾಯಕ್ಕೆ ನೆರವಾಗುವುದರ ಜೊತೆಗೆ ಕೃಷಿ ಚಟುವಟಿಕೆಗಳಿಗೂ ಪೂರಕವಾಗಿದೆ. ಕೃಷಿ ಮತ್ತು ಪಶುಸಂಗೋಪನೆ ಪರಸ್ಪರ ಅವಲಂಬಿತವಾಗಿವೆ ಎಂದು ಹೇಳಿದರು.

ಪ್ರಸ್ತುತ ಜಿಲ್ಲೆಯಲ್ಲಿ ಬರಗಾಲ ಪರಿಸ್ಥಿತಿ ಎದುರಾಗಿದ್ದು, ಮಧುಗಿರಿ, ಪಾವಗಡ ಮತ್ತು ಶಿರಾ ಭಾಗದ ಬಹುತೇಕ ಕೆರೆಗಳು ಒಣಗಿವೆ. ಇಂತಹ ಸಂದರ್ಭದಲ್ಲಿ ಜಾನುವಾರುಗಳಿಗೆ ಅಗತ್ಯ ಮೇವು ಮತ್ತು ನೀರಿನ ವ್ಯವಸ್ಥೆ ಕಲ್ಪಿಸುವ ಮೂಲಕ ಪಶುಸಂಪತ್ತನ್ನು ಉಳಿಸಿಕೊಳ್ಳುವುದು ಅತ್ಯಂತ ಮುಖ್ಯವಾಗಿದೆ. ಮೇವು ಖರೀದಿಗೆ ಹೆಚ್ಚಿನ ಹಣ ವ್ಯಯಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಪಶುಸಂಗೋಪನೆಯಲ್ಲಿ ತೊಡಗಿರುವವರಿಗೆ ಅಗತ್ಯ ನೆರವು ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದರು.

ಪಶುವೈದ್ಯಕೀಯ ಸಂಸ್ಥೆಗಳ ಬಲವರ್ಧನೆಗೆ ₹11 ಕೋಟಿ ಬಿಡುಗಡೆ: ಕೇಂದ್ರ ಸರ್ಕಾರದ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ತುಮಕೂರು ಜಿಲ್ಲೆಯಲ್ಲಿ ಈಗಾಗಲೇ 120 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಹೆಚ್ಚುವರಿಯಾಗಿ 400 ಫಲಾನುಭವಿಗಳನ್ನು ಆಯ್ಕೆ ಮಾಡಿ ಸಹಾಯಧನ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ವಿವಿಧ ಯೋಜನೆಗಳಡಿ ₹11.70 ಕೋಟಿ ಅನುದಾನ ಮಂಜೂರಾಗಿದ್ದು, ಪಶುವೈದ್ಯಕೀಯ ಸಂಸ್ಥೆಗಳ ಬಲವರ್ಧನೆಗೆ ₹11 ಕೋಟಿ ಬಿಡುಗಡೆ ಮಾಡಲಾಗಿದೆ. ಅನುಗ್ರಹ ಯೋಜನೆಯಡಿ ₹17 ಕೋಟಿ ಮಂಜೂರಾಗಿದ್ದು, ಈ ಪೈಕಿ ₹11 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಜಾನುವಾರುಗಳಿಗೆ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಜನರ ಜೀವನೋಪಾಯ, ಕೃಷಿ ಚಟುವಟಿಕೆ ಹಾಗೂ ಗ್ರಾಮೀಣ ಆರ್ಥಿಕತೆಯ ದೃಷ್ಟಿಯಿಂದ ಪಶುಸಂಗೋಪನಾ ಇಲಾಖೆ ಅತ್ಯಂತ ಮಹತ್ವದ್ದಾಗಿದೆ. ಈ ಇಲಾಖೆಯ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಮುಂದಿನ ದಿನಗಳಲ್ಲಿಯೂ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತುಮಕೂರು ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಿಜಾ, ತುಮಕೂರು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಗೌಡ, ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Share

You cannot copy content of this page