ಸಮಗ್ರ ಸುದ್ದಿ

ಹತ್ತು ವಾರಗಳ ಕಾಲ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ- ಪ್ರಿಯಾಂಕ್‌ ಖರ್ಗೆ

Share

ಬೆಂಗಳೂರು, ನ.12:

ನವೆಂಬರ್ 24 ರಿಂದ 2026 ರವರೆಗೆ 10 ವಾರಗಳ ಕಾಲ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ ಮತ್ತು ಒಂದು ದಿನ ಮಕ್ಕಳ ವಿಶೇಷ ಗ್ರಾಮ ಸಭೆಯನ್ನು ನಡೆಸಲು ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಮಕ್ಕಳಿಗೆ ಅವಶ್ಯವಾದ ಸುಧಾರಣಾ ಕ್ರಮಗಳನ್ನು ಕೈಗೊಳ್ಳುವುದು ಸರ್ಕಾರದ ಎಲ್ಲಾ ಇಲಾಖೆಗಳು, ಜನಪ್ರತಿನಿಧಿಗಳ ಮತ್ತು ಸಮುದಾಯದ ಜವಾಬ್ದಾರಿಯಾಗಿದೆ. ಮಕ್ಕಳ ರಕ್ಷಣೆ ಹಾಗೂ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರಗಳು ರೂಪಿಸಿರುವ ಹಲವು ಯೋಜನೆಗಳ ಹಿನ್ನೆಲೆಯಲ್ಲಿ ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಎಲ್ಲರ ಕರ್ತವ್ಯವೂ ಆಗಿರುತ್ತದೆ ಎಂದು ತಿಳಿಸಿದ್ದಾರೆ.

ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳು ಹಾಗೂ ಮಕ್ಕಳಿಗೆ ಸಂಬಂಧಿಸಿದ ಸಮಗ್ರ ಅಭಿವೃದ್ಧಿಯ ಅಂಶಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ‘ಮಕ್ಕಳ ಸ್ನೇಹಿ ಮತ್ತು ಮಕ್ಕಳ ಸುರಕ್ಷಿತ’ ಪಂಚಾಯತಿಗಳನ್ನಾಗಿಸಲು ‘ಮಕ್ಕಳ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ’ವನ್ನು ಆಯೋಜಿಸಿ, ಈ ಅವಧಿಯಲ್ಲಿ ಒಂದು ದಿನ ಮಕ್ಕಳ ಗ್ರಾಮ ಸಭೆಯನ್ನು ನಡೆಸುವಂತೆ ಎಲ್ಲಾ ಗ್ರಾಮಪಂಚಾಯತಿಗಳಿಗೆ ತಿಳಿಸಲಾಗಿದೆ. ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಮಕ್ಕಳ ಗ್ರಾಮ ಸಭೆ ನಡೆಸಲು ದಿನಾಂಕವನ್ನು ನಿಗದಿಗೊಳಿಸಲು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಮಕ್ಕಳ ಜನನ ನೋಂದಣಿ ಹಾಗೂ ಜನನ ಪ್ರಮಾಣ ಪತ್ರ ವಿತರಣೆ, ಪೌಷ್ಠಿಕ ಆಹಾರ ಕುರಿತು ಮಾರ್ಗದರ್ಶನ ಹಾಗೂ ಜಾಗೃತಿ, ಮಕ್ಕಳಿಗೆ ಚುಚ್ಚುಮದ್ದು ಕೊಡುವ ಪ್ರಾಮುಖ್ಯತೆ ಬಗ್ಗೆ ಮಕ್ಕಳ ಗ್ರಾಮಸಭೆಯಲ್ಲಿ ಆದ್ಯತೆ ನೀಡಬೇಕು ಹಾಗೂ ಮಾನಸಿಕ ಆರೋಗ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಶಾಲೆಯಿಂದ ಹೊರಗುಳಿದ 11ರಿಂದ 14 ವರ್ಷದ ಮಕ್ಕಳನ್ನು ಪುನಃ ಶಾಲೆಗೆ ಸೇರಿಸಿಕೊಳ್ಳಲು ಹಾಗೂ 14ರಿಂದ 18 ವರ್ಷದೊಳಗಿನ ಶಾಲೆ ಬಿಟ್ಟ ಮಕ್ಕಳನ್ನು ಕೌಶಲ್ಯಾಭಿವೃದ್ಧಿ ತರಬೇತಿ ಸಂಸ್ಥೆಗಳಿಗೆ ಸೇರಿಸಲು ಕ್ರಮ ವಹಿಸಬೇಕೆಂದು ಸಚಿವರು ಗ್ರಾಮ ಪಂಚಾಯತಿಗಳಿಗೆ ತಿಳಿಸಿದ್ದಾರೆ.

ಮಕ್ಕಳ ಹಕ್ಕುಗಳು, ಬಾಲ್ಯ ವಿವಾಹ ನಿಷೇಧ, ಕಿಶೋರಾವಸ್ಥೆಯಲ್ಲಿ ಉದ್ಯೋಗ ನಿಷೇಧದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸಚಿವರು ನಿರ್ದೇಶಿಸಿದ್ದಾರೆ


Share

You cannot copy content of this page