ಸಮಗ್ರ ಸುದ್ದಿ

ಮಹಾತ್ಮ ಗಾಂಧಿ ಉದ್ಯಾನದ ಅಭಿವೃದ್ಧಿ ಕಾಮಗಾರಿಯನ್ನು ಕೂಡಲೇ ಪ್ರಾರಂಭಿಸಿ : ಎನ್.ಎ. ಹ್ಯಾರಿಸ್

Share

ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಶಾಂತಿನಗರ ವಿಭಾಗದ ಮಹಾತ್ಮ ಗಾಂಧಿ ಉದ್ಯಾನದಲ್ಲಿ ಅಭಿವೃದ್ಧಿ ಕಾಮಗಾರಿಯನ್ನು ಕೂಡಲೇ ಪ್ರಾರಂಭಿಸಬೇಕೆಂದು ಶಾಸಕರಾದ ಎನ್.ಎ. ಹ್ಯಾರಿಸ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಶಾಂತಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇಂದು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಮಹಾತ್ಮ ಗಾಂಧಿ ಉದ್ಯಾನದ ಪುನರ್‌ ಅಭಿವೃದ್ಧಿ ಕಾಮಗಾರಿಯ ವಿನ್ಯಾಸವನ್ನು ಪರಿಶೀಲಿಸಿ, ಕೂಡಲೇ ಕಾಮಗಾರಿಯನ್ನು ಆರಂಭಿಸಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಎಂ.ಜಿ. ರಸ್ತೆಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು. ರಸ್ತೆ ಮೇಲ್ದರ್ಜೆಗೇರಿಸುವ ಸಲುವಾಗಿ ಸ್ಟೋನ್ ಮೆಟ್ರಿಕ್ಸ್ ಆಸ್ಫಾಲ್ಟ್ ಅಥವಾ ಮೈಕ್ರೋ ಸರ್ಫೇಸಿಂಗ್ ಮಾಡಬೇಕು. ಫಾಮ್ ಗ್ರೂವ್ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಮುಕ್ತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಶಾಂತಿನಗರ ವಿಭಾಗದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು, ಮೂಲಸೌಕರ್ಯ ಯೋಜನೆಗಳು ಹಾಗೂ ಸಾರ್ವಜನಿಕ ಸೌಲಭ್ಯಗಳ ಪ್ರಗತಿಯನ್ನು ಪರಿಶೀಲಿಸಿದ ಅವರು, ಎಲ್ಲಾ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸುವಂತೆ ತಿಳಿಸಿದರು. ಪರಿಶೀಲನೆ ನಡೆಸಿರುವ ಎಲ್ಲಾ ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಯಾವುದೇ ಕಾಮಗಾರಿ ಕೈಗೆತ್ತಿಕೊಂಡಾಗ ಗುಣಮಟ್ಟವನ್ನು ಕಡ್ಡಾಯವಾಗಿ ಕಾಪಾಡಬೇಕು. ಇಲಾಖೆಗಳ ನಡುವಿನ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

300 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣ:

ಶಾಂತಿನಗರದಲ್ಲಿರುವ ಆಸ್ಪತ್ರೆ ಜಾಗದಲ್ಲಿ 300 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣಕ್ಕೆ ಉದ್ದೇಶಿಸಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಅಗತ್ಯ ಕ್ರಮಗಳನ್ನು ಕೈಗೊಂಡು ಶೀಘ್ರವಾಗಿ ಕಾಮಗಾರಿಯನ್ನು ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ ರಾವ್ ಅವರು ಮಾತನಾಡಿ, ಶಾಂತಿನಗರ ವಿಭಾಗದಲ್ಲಿ ಕೈಗೆತ್ತಿಕೊಂಡಿರುವ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುವಂತೆ ಹಾಗೂ ಅವುಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಮಿನಿ ಟ್ರಾನ್ಸ್‌ಫರ್ ಸ್ಟೇಷನ್ ತೆರವುಗೊಳಿಸಿ ಬೃಹತ್ ಘನ ತ್ಯಾಜ್ಯ ಸಂಗ್ರಹಣಾ ಘಟಕ ಸ್ಥಾಪನೆಗೆ ಕ್ರಮವಹಿಸುವಂತೆ ಸೂಚಿಸಿದರು.

ಆಸ್ಟಿನ್ ಟೌನ್ ಬಳಿ ಹಳೆಯ ಹೆರಿಗೆ ಆಸ್ಪತ್ರೆ ತೆರವುಗೊಳಿಸಿ ಹೊಸ ಕಟ್ಟಡ ನಿರ್ಮಾಣಕ್ಕೆ ಕ್ರಮ. ಶಾಂತಿನಗರ ‘ಒನ್’ ಕಟ್ಟಡ ಕಾಮಗಾರಿಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಸೂಚನೆ ನೀಡಿದರು.

ಆಸ್ಟಿನ್ ಟೌನ್ ಶಾಲೆ ಹಾಗೂ ಕಾಲೇಜು ಕಟ್ಟಡಗಳ ಕಾಮಗಾರಿಯನ್ನು ಪರಿಶೀಲಿಸಿ ಶೀಘ್ರ ಪೂರ್ಣಗೊಳಿಸಲು ಸೂಚಿಸಿದರು.

ಪರಿಶೀಲನೆ ವೇಳೆ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್, ಬೆಂಗಳೂರು ಘನ ತ್ಯಾಜ್ಯ ನಿರ್ವಹಣೆ ನಿಯಮಿತದ ಸಿಇಒ ಕರೀಗೌಡ, ಅಪರ ಆಯುಕ್ತರಾದ ದಲ್ಜಿತ್ ಕುಮಾರ್, ಬೆಂಗಳೂರು ಘನ ತ್ಯಾಜ್ಯ ನಿರ್ವಹಣೆ ನಿಯಮಿತದ ಸಿಓಓ ರಮಾಮಣಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.


Share

You cannot copy content of this page