ಸಮಗ್ರ ಸುದ್ದಿ

ಶಿವಾಜಿನಗರದ ರಸೆಲ್ ಮಾರುಕಟ್ಟೆ ಪುನರ್ ಅಭಿವೃದ್ಧಿಗೆ ಕೂಡಲೇ ಟೆಂಡರ್ ಆಹ್ವಾನಿಸಿ: ಮಹೇಶ್ವರ್ ರಾವ್

Share

ಬೆಂಗಳೂರು: ಶಿವಾಜಿನಗರದ ರಸೆಲ್ ಮಾರುಕಟ್ಟೆಯ ಪುನರ್ ಅಭಿವೃದ್ಧಿಗೆ ಕೂಡಲೇ ಟೆಂಡರ್ ಆಹ್ವಾನಿಸುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೇಂದ್ರ ನಗರ ಪಾಲಿಕೆಯ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ರಸೆಲ್ ಮಾರುಕಟ್ಟೆಯ ಪುನರ್ ಅಭಿವೃದ್ಧಿಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿ (ಡಿಪಿಆರ್) ಕಾರ್ಯ ಈಗಾಗಲೇ ಪೂರ್ಣಗೊಂಡಿದ್ದು, ಅದನ್ನು ತ್ವರಿತವಾಗಿ ಅನುಷ್ಠಾನಕ್ಕೆ ತರಲು ಸೂಚಿಸಿದರು.

ರಸೆಲ್ ಮಾರುಕಟ್ಟೆ ಒಂದು ಪಾರಂಪರಿಕ ಕಟ್ಟಡವಾಗಿದ್ದು, ಅದಕ್ಕೆ ಆಧುನಿಕ ಸ್ಪರ್ಶ ನೀಡುವ ಮೂಲಕ ಬೆಂಗಳೂರಿಗೆ ಜೀವಂತ, ಶಾಶ್ವತ ಹಾಗೂ ಜನಸ್ನೇಹಿ ಮಾರುಕಟ್ಟೆಯಾಗಿ ರೂಪಿಸಬೇಕು. ಈ ಸಂಬಂಧ ಮಾರುಕಟ್ಟೆಯಲ್ಲಿರುವ ವ್ಯಾಪಾರಿಗಳಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಬೇರೆಡೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಿ, ಕಾಮಗಾರಿ ಪ್ರಾರಂಭಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಾರುಕಟ್ಟೆ ಅಭಿವೃದ್ಧಿ ಕಾರ್ಯದ ಸಂದರ್ಭದಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸಿ, ಪಾರ್ಕಿಂಗ್ ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಸೂಕ್ತ ವ್ಯವಸ್ಥೆ ಮಾಡಬೇಕು. ಮಾರುಕಟ್ಟೆ ಸದಾ ಸ್ವಚ್ಛವಾಗಿರುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಸಮಗ್ರ ತ್ಯಾಜ್ಯ ವಿಂಗಡಣೆ ಹಾಗೂ ಕಾಂಪೋಸ್ಟಿಂಗ್ ವ್ಯವಸ್ಥೆ ಅಳವಡಿಸಲು ಸೂಚಿಸಿದರು.

ಅಗ್ನಿ ಸುರಕ್ಷತಾ ವ್ಯವಸ್ಥೆ, ಶೌಚಾಲಯ ಸೌಲಭ್ಯಗಳು, ಸಾರ್ವಜನಿಕರ ಓಡಾಟದ ಸ್ಥಳಗಳಲ್ಲಿ ಗ್ರಾನೈಟ್ ಅಳವಡಿಕೆ, ಕ್ಲಾಕ್ ಟವರ್ ವಿನ್ಯಾಸ ಸೇರಿದಂತೆ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟ ಕಾಪಾಡಿಕೊಂಡು ನಿರ್ವಹಿಸಬೇಕು. ಜೊತೆಗೆ ರಸೆಲ್ ಮಾರುಕಟ್ಟೆ ಸುತ್ತಮುತ್ತಲಿನ ಪ್ರದೇಶಗಳನ್ನೂ ಅಭಿವೃದ್ಧಿಪಡಿಸಲು ಸಮಗ್ರ ಯೋಜನೆ ರೂಪಿಸುವಂತೆ ಸೂಚನೆ ನೀಡಲಾಯಿತು.

ಕಂದಾಯ ವಸೂಲಾತಿ ಅಭಿಯಾನ (Tax Drive) ನಡೆಸಿ:

ರಸೆಲ್ ಮಾರುಕಟ್ಟೆ ಸುತ್ತಮುತ್ತಲಿನ ಪ್ರದೇಶದಲ್ಲಿ ಆಸ್ತಿಗಳ ತೆರಿಗೆ ಪರಿಷ್ಕರಣೆ ನಡೆಸಿ, ಕಂದಾಯ ವಸೂಲಾತಿ ಅಭಿಯಾನ (Tax Drive) ಮೂಲಕ ಆಸ್ತಿ ತೆರಿಗೆ ಸಂಗ್ರಹಿಸುವ ಕಾರ್ಯ ಕೈಗೊಳ್ಳಬೇಕು. ಈ ಸಂಬಂಧ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಲಮಾರ್ಗ ನಿರ್ಮಾಣಕ್ಕೆ ಯೋಜನೆ ರೂಪಿಸಿ:

ಹಲಸೂರು ಕೆರೆಗೆ ಮೂರು ಇನ್ಲೆಟ್‌ಗಳು ಬರುತ್ತಿದ್ದು, ಅವುಗಳನ್ನು ಪರಿಶೀಲಿಸಿ ಕೆ–100 ಮಾದರಿಯಲ್ಲಿ ನಾಗರಿಕ ಜಲಮಾರ್ಗ ನಿರ್ಮಾಣಕ್ಕೆ ಯೋಜನೆ ರೂಪಿಸುವಂತೆ ಸೂಚಿಸಿದರು. ಜೊತೆಗೆ ಹಲಸೂರು ಕೆರೆಯ ಅಭಿವೃದ್ಧಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಹಲಸೂರು ಕೆರೆಯಲ್ಲಿ ಪಾದಚಾರಿಗಳಿಗಾಗಿ ವಾಯುವಿಹಾರ ಮಾರ್ಗ ಹಾಗೂ ಆರ್.ಸಿ.ಸಿ ತಡೆಗೋಡೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಅಲ್ಲದೆ ಕಲ್ಯಾಣಿ ಪುನರ್ ವಿನ್ಯಾಸ, ದ್ವೀಪ (ಐಲ್ಯಾಂಡ್) ಅಭಿವೃದ್ಧಿ ಹಾಗೂ ಹೂಳೆತ್ತುವ ಕಾರ್ಯಗಳನ್ನು ಕೈಗೆತ್ತಿಕೊಳ್ಳಬೇಕಿದೆ. ಕೆರೆಯ ಸುತ್ತಲೂ ಸಾರ್ವಜನಿಕರಿಗೆ ಓಡಾಟಕ್ಕೆ ಅವಕಾಶ ಕಲ್ಪಿಸಬೇಕಿರುವುದರಿಂದ, ಹಲಸೂರು ಕೆರೆಯ ಬಳಿಯ ರಕ್ಷಣಾ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದು ವಾಯುವಿಹಾರ ಮಾರ್ಗ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಿಜ್ವಾನ್ ಹರ್ಷದ್ ಅವರು ಮಾತನಾಡಿ, ಶಿವಾಜಿನಗರ ವ್ಯಾಪ್ತಿಯಲ್ಲಿರುವ ರಸೆಲ್ ಮಾರುಕಟ್ಟೆ ಅತ್ಯಂತ ಪುರಾತನ ಕಟ್ಟಡವಾಗಿದ್ದು, ಅದಕ್ಕೆ ಯಾವುದೇ ರೀತಿಯ ಧಕ್ಕೆ ಉಂಟಾಗದಂತೆ ಪುನರ್ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಅಲ್ಲದೆ ಸ್ಥಳೀಯವಾಗಿ ಯಾವುದೇ ಸಮಸ್ಯೆಗಳು ಉಂಟಾಗದಂತೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಪುನರ್ ವಿನ್ಯಾಸಗೊಳಿಸಲಾಗುವ ರಸೆಲ್ ಮಾರುಕಟ್ಟೆಯಲ್ಲಿ ಸಂಚಾರದ ಸುಲಭತೆ, ದೃಶ್ಯಾವಲೋಕನ ಹಾಗೂ ಪ್ರವೇಶ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಮಾರಾಟಗಾರರು ಹಾಗೂ ಗ್ರಾಹಕರಿಬ್ಬರಿಗೂ ಅನುಕೂಲವಾಗುವಂತೆ ಸುಂದರ ತಾಣವನ್ನಾಗಿ ಮರುರಚನೆ ಮಾಡಲಾಗುವುದೆಂದು ಹೇಳಿದರು.

ಹಫೀಜಿಯ ಶಾಲೆಯ ಕಟ್ಟಡ ಕಾಮಗಾರಿ ಪರಿಶೀಲನೆ:

ಹಫೀಜಿಯ ಶಾಲೆಯಲ್ಲಿ ನೆಲ + 3 ಅಂತಸ್ತಿನ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದ್ದು, ಜನವರಿ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಮೂರನೇ ಅಂತಸ್ತಿನ ಮೇಲ್ಭಾಗದಲ್ಲಿ ಫೆನ್ಸಿಂಗ್ ಅಳವಡಿಸಿ ಮಕ್ಕಳಿಗಾಗಿ ಕ್ರೀಡಾ ಸೌಲಭ್ಯ ಕಲ್ಪಿಸುವಂತೆ ಸೂಚನೆ ನೀಡಿದರು. ಈ ಸಂಬಂಧ ಫೆನ್ಸಿಂಗ್ ಅಳವಡಿಸಿ ಶೂಟಿಂಗ್, ಬ್ಯಾಡ್ಮಿಂಟನ್, ಬಾಸ್ಕೆಟ್‌ಬಾಲ್ ಸೇರಿದಂತೆ ವಿವಿಧ ಕ್ರೀಡೆಗಳಿಗೆ ವ್ಯವಸ್ಥೆ ಮಾಡಬೇಕು. ಜೊತೆಗೆ ಮೈದಾನದಲ್ಲಿ ವಾಕಿಂಗ್ ಟ್ರ್ಯಾಕ್ ನಿರ್ಮಾಣ ಸೇರಿದಂತೆ ಇತರೆ ಅಗತ್ಯ ಕಾಮಗಾರಿಗಳಿಗೆ ಹೆಚ್ಚುವರಿ ಅನುದಾನದ ಅಗತ್ಯವಿದ್ದು, ಅದಕ್ಕಾಗಿ ಅನುದಾನ ಒದಗಿಸುವಂತೆ ಸೂಚಿಸಿದರು.

ಈ ವೇಳೆ ಅಭಿವೃದ್ಧಿ ಅಪರ ಆಯುಕ್ತರಾದ ದಲ್ಜಿತ್ ಕುಮಾರ್, ಜಂಟಿ ಆಯುಕ್ತರಾದ ಹೇಮಂತ್ ಶರಣ್, ಮುಖ್ಯ ಅಭಿಯಂತರರಾದ ವಿಜಯ್ ಕುಮಾರ್ ಹರಿದಾಸ್, ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಸಂಬಂಧಪಟ್ಟ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.


Share

You cannot copy content of this page