ಬೆಂಗಳೂರು : ಹಿರಿಯ ಪತ್ರಕರ್ತರು ಹಾಗೂ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡಬೊಮ್ಮಯ್ಯ ಅವರು ತೀವ್ರ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.
‘ಇಂದು ಸಂಜೆ’ ಪತ್ರಿಕೆಯಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ದೊಡ್ಡಬೊಮ್ಮಯ್ಯ ಅವರು ಸಂಜೆವಾಣಿಯಲ್ಲಿ ಮುಖ್ಯ ವರದಿಗಾರರಾಗಿ, ದೂರದರ್ಶನ, ಆಕಾಶವಾಣಿ, ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಸತತ 30 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದರು.
ಪತ್ರಿಕೋದ್ಯಮದ ಮೂಲಕ ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಅವರ ಸೇವೆ ಹಾಗೂ ಕಾರ್ಯವೈಖರಿ ಸದಾ ಸ್ಮರಣೀಯವಾಗಿತ್ತು.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದ ವರದಿಗಾಗಿ ತೆರಳಿದ್ದ ಅವರು, ಅಧಿವೇಶನ ಮುಗಿಸಿಕೊಂಡು ಡಿಸೆಂಬರ್ 19ರಂದು ಬೆಳಗಾವಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು. ಬೆಂಗಳೂರಿಗೆ ಆಗಮಿಸಿದ ಬಳಿಕ, ಇಂದು ಮುಂಜಾನೆ ಕೆಂಪೇಗೌಡ ಬಸ್ ನಿಲ್ದಾಣದಿಂದ ಮನೆಗೆ ತೆರಳಲು ಬಿಎಂಟಿಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತೀವ್ರ ಹೃದಯಾಘಾತದಿಂದ ಅವರು ನಿಧನರಾಗಿದ್ದಾರೆ
ಶ್ರೀಯುತರ ಅಗಲಿಕೆಯಿಂದ ಪತ್ರಿಕೋದ್ಯಮ ಕ್ಷೇತ್ರವು ಒಬ್ಬ ಹಿರಿಯ ಹಾಗೂ ಅನುಭವಿ ಪತ್ರಕರ್ತರನ್ನು ಕಳೆದುಕೊಂಡಿದ್ದು, ಇದು ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಹಠಾತ್ ನಿಧನದಿಂದ ದುಃಖದಲ್ಲಿರುವ ಕುಟುಂಬ ಸದಸ್ಯರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
