ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ಆರಂಭಿಸುವಂತೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದಾರೆ.
ಈ ಸಂಬಂಧ ರೈಲ್ವೆ ಸಚಿವರಿಗೆ ಪತ್ರ ಬರೆದಿರುವ ಕುಮಾರಸ್ವಾಮಿ ಅವರು, ಬೆಂಗಳೂರು ನಗರದಿಂದ ಹಾಸನ- ಮಂಗಳೂರು ಜಂಕ್ಷನ್- ಉಡುಪಿ ಮತ್ತು ಕಾರವಾರ ಮಾರ್ಗವಾಗಿ ಗೋವಾದ ಮಡಗಾಂವ್ ವರೆಗೆ ಅತಿವೇಗದ ವಂದೇ ಭಾರತ್ ರೈಲು ಸೇವೆ ಆರಂಭಿಸುವಂತೆ ಕೋರಿದ್ದಾರೆ.
ಈ ಭಾಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ವಂದೇ ಭಾರತ್ ರೈಲು ಸಂಚಾರಕ್ಕೆ ಅವಕಾಶ ನೀಡುವುದರಿಂದ ಕರಾವಳಿ ಭಾಗದ ಜನರಿಗೆ ಹೆಚ್ಚು ಅನುಕೂಲ ಆಗಲಿದೆ. ಅಭಿವೃದ್ಧಿಗೂ ಹೆಚ್ಚು ಪೂರಕ ವಾಗಿರುತ್ತದೆ ಎಂದು ಸಚಿವರು ರೈಲ್ವೆ ಸಚಿವರ ಗಮನ ಸೆಳೆದಿದ್ದಾರೆ.
ಪಶ್ಚಿಮಘಟ್ಟ ಪ್ರದೇಶ ಸೇರಿದಂತೆ ಈ ಮಾರ್ಗದಲ್ಲಿ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ವೇಗದ ರೈಲು ಸೇವೆ ಆರಂಭಿಸಲು ಇದೀಗ ಸರ್ವ ರೀತಿಯ ಅನುಕೂಲಕರ ಮೂಲಸೌಲಭ್ಯಗಳಿವೆ ಎಂದು ಕುಮಾರಸ್ವಾಮಿ ಅವರು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.
ಪ್ರವಾಸೋದ್ಯಮಕ್ಕೆ ಹೆಚ್ಚು ಅನುಕೂಲ:
ಹಾಸನ, ಮಂಗಳೂರು ಜಂಕ್ಷನ್, ಉಡುಪಿ, ಕಾರವಾರ ಮಾರ್ಗವಾಗಿ ಗೋವಾದ ಮಡಗಾಂವ್‌ಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್ ರೈಲು ಸೇವೆಯಿಂದ ಪ್ರವಾಸೋದ್ಯಮಕ್ಕೆ ಹೆಚ್ಚು ಅನುಕೂಲ ಆಗಲಿದೆ. ಅಲ್ಲದೆ, ಕರಾವಳಿ ಭಾಗದಲ್ಲಿರುವ ಪುಣ್ಯಕ್ಷೇತ್ರಗಳಿಗೆ ಯಾತ್ರಾರ್ಥಿಗಳು ಹೋಗಿ ಬರುವುದು ಸುಲಭವಾಗುತ್ತದೆ. ಶಿಕ್ಷಣ ಹಾಗೂ ವೃತ್ತಿಪರ ಕಾರಣಗಳಿಗಾಗಿ ಈ ಮಾರ್ಗದಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಹೆಚ್ಚಿನ ಪ್ರಯೋಜನ ಆಗಲಿದೆ ಎಂಬ ಅಂಶಗಳನ್ನು ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಭಾರತದ ಐಟಿ ರಾಜಧಾನಿ ಆಗಿರುವ ಬೆಂಗಳೂರು ಮತ್ತು ಬಂದರು ನಗರ ಮಂಗಳೂರು ಸೇರಿದಂತೆ ಕರಾವಳಿ ಕರ್ನಾಟಕದ ಉಳಿದೆಲ್ಲಾ ಪ್ರಮುಖ ವಾಣಿಜ್ಯ ಕೇಂದ್ರಗಳು, ಬಂದರುಗಳು ಮತ್ತು ಪ್ರವಾಸಿ ತಾಣಗಳಿಗೆ ಹಾಗೂ ಗೋವಾ ನಡುವೆ ನೇರ ಹಾಗೂ ವೇಗದ ರೈಲು ಸಂಪರ್ಕ ಕಲ್ಪಿಸುವುದರಿಂದ ಆರ್ಥಿಕ ಚಟುವಟಿಕೆಗಳು ಮತ್ತಷ್ಟು ಚುರುಕಾಗಲಿವೆ ಎಂದು ಕುಮಾರಸ್ವಾಮಿ ಅವರು ಪ್ರತಿಪಾದಿಸಿದ್ದಾರೆ.
ಈ ರೈಲು ಸೇವೆ ಆರಂಭಿಸುವುದರಿಂದ ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆ ಈಡೇರಿಸಿದಂತೆ ಆಗುತ್ತದೆ. ಪ್ರಾದೇಶಿಕ ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸುತ್ತದೆ. ಮಿಗಿಲಾಗಿ ಪ್ರವಾಸೋದ್ಯಮಕ್ಕೆ ಉತ್ತೇಜನ ದೊರೆಯಲಿದೆ. ಉದ್ಯೋಗಾವಕಾಶಗಳ ವೃದ್ಧಿಗೂ ಸಹಕಾರಿಯಾಗಲಿದೆ. ಸಮಗ್ರ, ದಕ್ಷ ಮತ್ತು ಅತ್ಯಾಧುನಿಕ ಧ್ಯೇಯ ಕಾರ್ಯಜಾಲದ ಸರ್ಕಾರದ ಮುನ್ನೋಟಕ್ಕೆ ಸಂಬಂಧಿಸಿದಂತೆ ಅಂತರರಾಜ್ಯ ರೈಲು ಸಂಪರ್ಕವನ್ನು ಬೆಸೆಯುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮನವಿಯನ್ನು ಪರಿಗಣಿಸಿ ವಂದೇ ಭಾರತ್ ರೈಲು ಸೇವೆ ಆರಂಭಿಸುವ ಸಾಧ್ಯಾಸಾಧ್ಯತೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ನೈರುತ್ಯ ರೈಲ್ವೆಯ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ರೈಲ್ವೆ ಸಚಿವರಿಗೆ ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.
