ಸಮಗ್ರ ಸುದ್ದಿ

ಮುಖ್ಯ ಕಾರ್ಯದರ್ಶಿಗೆ ಕರೆ ಮಾಡಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅಸಮಾಧಾನ | ಶಿಡ್ಲಘಟ್ಟ ಮಹಿಳಾ ಅಧಿಕಾರಿಗೆ ಅಶ್ಲೀಲವಾಗಿ ಧಮ್ಕಿ ಹಾಕಿದವರ ಮೇಲೆ ಕ್ರಮ ಜರುಗಿಸಲು ಆಗ್ರಹ

Share

ಬೆಂಗಳೂರು : ಅಕ್ರಮವಾಗಿ ಸಾರ್ವಜನಿಕರು ಓಡಾಡುವ ರಸ್ತೆಯಲ್ಲಿ ಹಾಕಲಾಗಿದ್ದ ಬ್ಯಾನರ್ ಅನ್ನು ತೆರವುಗೊಳಿಸಿದ್ದ ಶಿಡ್ಲಘಟ್ಟದ ಪೌರ ಆಯುಕ್ತರಾದ ಅಮೃತಾ ಗೌಡ ಅವರನ್ನು ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಅವಾಚ್ಯವಾಗಿ ನಿಂದಿಸಿದ ಪ್ರಕರಣದ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕರೆ ಮಾಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಈ ಘಟನೆ ಬಗ್ಗೆ ಇಂದು ವಿದ್ಯುನ್ಮಾನ ಮಾಧ್ಯಮಗಳಲ್ಲಿ ವರದಿಗಳು ಪ್ರಸಾರ ಆಗುತ್ತಿದ್ದಂತೆಯೇ ಮುಖ್ಯ ಕಾರ್ಯದರ್ಶಿಗಳಿಗೆ ದೂರವಾಣಿ ಕರೆ ಮಾಡಿದ ಕೇಂದ್ರ ಸಚಿವರು, ಮಹಿಳಾ ಅಧಿಕಾರ ಒಬ್ಬರನ್ನು ನಿಂದಿಸಿದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ತಾವು ಒಬ್ಬ ಮಹಿಳಾ ಅಧಿಕಾರಿ ಆಗಿದ್ದು, ಉನ್ನತ ಸ್ಥಾನ ಅಲಂಕರಿಸುವ ತಮ್ಮ ಅಧೀನದಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿ, ಅಸಹ್ಯ ಪದಗಳನ್ನು ಬಳಸಿ ನಿಂದಿಸಿರುವ ಪ್ರಕರಣ ಖಂಡನೀಯ. ಈ ಸರಕಾರದಲ್ಲಿ ಕಾನೂನುಬದ್ಧವಾಗಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ರಕ್ಷಣೆ ಇಲ್ಲವೇ ಎಂದು ಸಚಿವರು ಮುಖ್ಯ ಕಾರ್ಯದರ್ಶಿ ಅವರನ್ನು ಪ್ರಶ್ನಿಸಿದರು.

ಒಬ್ಬ ಮಹಿಳಾ ಅಧಿಕಾರಿಗೆ ಈ ರೀತಿ ಅವಾಚ್ಯ ಶಬ್ದಗಳಿಂದ ನಿಂದಿಸಿದರೆ ಹೇಗೆ? ನೀವು ಕೂಡ ಮಹಿಳೆ ಆಗಿದ್ದೀರಿ. ಮಹಿಳಾ ಅಧಿಕಾರಿಗಳ ಮೇಲೆ ನಡೆಯುತ್ತಿರುವ ಇಂತಹ ದೌರ್ಜನ್ಯಗಳನ್ನು ಸಹಿಸಬಾರದು,ಮಹಿಳಾ ಅಧಿಕಾರಿಗಳ ರಕ್ಷಣೆ ಸರ್ಕಾರದ ಹೊಣೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕಾನೂನು ಕ್ರಮ ಜರುಗಿಸಬೇಕು ಎಂದು ಕೇಂದ್ರ ಸಚಿವರು ಒತ್ತಾಯ ಮಾಡಿದರು.

ಮಹಿಳಾ ಅಧಿಕಾರಿಗಳ ಮೇಲೆ ಪದೇಪದೇ ಈ ರೀತಿ ದೌರ್ಜನ್ಯಗಳು ನಡೆಯುತ್ತಿವೆ. ಅಧಿಕಾರ ಇರಲಿ, ಇಲ್ಲದಿರಲಿ ಅಧಿಕಾರಿಗಳಿಗೆ ಗೌರವ ನೀಡಬೇಕು. ಅದರಲ್ಲೂ ಮಹಿಳಾ ಅಧಿಕಾರಿಯೊಬ್ಬರ ಮೇಲೆ ಈ ರೀತಿ ನಡೆದುಕೊಂಡಿರುವುದು ಖಂಡನೀಯ ಎಂದು ಸಚಿವರು ಮುಖ್ಯ ಕಾರ್ಯದರ್ಶಿ ಅವರಿಗೆ ಹೇಳಿದರು.


Share

You cannot copy content of this page