ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ತಡೆಗಟ್ಟಿ, ಆ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ಉದ್ದೇಶದಿಂದ ದೇಶದಲ್ಲೇ ಮೊದಲ ಬಾರಿಗೆ ಡಿಸಿಆರ್‌ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ಈ ನಿಟ್ಟಿನಲ್ಲಿ ಡಿಸಿಆರ್‌ಇ ಪೊಲೀಸ್ ಠಾಣೆಗಳು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.
ಪೊಲೀಸ್ ಪ್ರಧಾನ ಕಚೇರಿಯಲ್ಲಿ ನಡೆದ ‘ಹಿರಿಯ ಪೊಲೀಸ್ ಅಧಿಕಾರಿಗಳ 2ನೇ ದಿನದ ಸಮಾವೇಶ’ದಲ್ಲಿ ಪಾಲ್ಗೊಂಡು ಅಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.
ಅಂತರ್ಜಾತಿ ವಿವಾಹವಾದ ಯುವತಿಯನ್ನು ಆಕೆಯ ತಂದೆಯೇ ಕೊಲೆ ಮಾಡುತ್ತಾನೆ ಎಂದರೆ ಹೇಗೆ ಸಹಿಸುವುದು. ಎಸ್‌ಸಿ, ಎಸ್‌ಟಿ ಸಮುದಾಯದ ಜನರ ಮೇಲಾಗುತ್ತಿರುವ ಶೋಷಣೆಯನ್ನು ತಡೆಗಟ್ಟಲು ಅನುಕೂಲವಾಗಲಿದೆ ಎಂಬ ನಿಟ್ಟಿನಲ್ಲಿ ಪ್ರತ್ಯೇಕವಾಗಿ ಡಿಸಿಆರ್‌ಇ ಠಾಣೆಗಳನ್ನು ಮಾಡಲಾಗಿದೆ. ಶೋಷಿತರೊಂದಿಗೆ ನಾವಿದ್ದೇವೆ ಎಂಬ ಭರವಸೆ ಮೂಡಿಸಬೇಕಲ್ಲವೇ. ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ ಎಂದು ತಿಳಿಸಿದರು.
ಈ ಬಾರಿ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದಲ್ಲಿ ಜನದಟ್ಟಣೆ ನಿಯಂತ್ರಣ, ಸೈಬರ್ ಕ್ರೈಂ, ಭಯೋತ್ಪಾದನಾ ಚಟುವಟಿಕೆ, ಡ್ರಗ್ಸ್ ದಂಧೆ, ಅಕ್ರಮ ವಲಸಿಗರು, ಎಫ್‌ಎಸ್‌ಎಲ್ ಕುರಿತ ವಿಷಯಗಳು ಸೇರಿದಂತೆ ಆಧುನಿಕ ಪೊಲೀಸ್ ವ್ಯವಸ್ಥೆಗೆ ಬೇಕಾದ ವಿಚಾರಗಳ ಕುರಿತು ಚರ್ಚಿಸಲಾಗಿದೆ. ಈ ಎಲ್ಲ ವಿಚಾರಗಳು ಕೆಳಹಂತದ ಸಿಬ್ಬಂದಿಗಳಿಗೆ ತಲುಪಬೇಕು. ಅಂದಾಗ ಮಾತ್ರ ರಾಜ್ಯ ಪೊಲೀಸರ ಕಾರ್ಯಕ್ಷಮತೆ ಹೆಚ್ಚಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಪೊಲೀಸ್ ಇಲಾಖೆಯ ಮೇಲೆ ಹೆಚ್ಚಿನ ಜವಾಬ್ದಾರಿ:
ಪೊಲೀಸ್ ಇಲಾಖೆಯ ಮೇಲೆ ಜವಾಬ್ದಾರಿ ಹೆಚ್ಚಿದೆ. ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಉತ್ತಮವಾಗಿದ್ದರೆ, ಆರ್ಥಿಕತೆ, ಕೃಷಿ, ಕೈಗಾರಿಕೆ ಸೇರಿದಂತೆ ಎಲ್ಲವೂ ಅಭಿವೃದ್ಧಿಯಾಗುತ್ತದೆ ಎಂದ ಅವರು, ಕೆಲವು ರಾಜ್ಯಗಳಲ್ಲಿ ಹೂಡಿಕೆ ಮಾಡಲು ಹಿಂಜರಿಯುತ್ತಿದ್ದಾರೆ. ಆರ್ಥಿಕವಾಗಿ ಹಿಂದೆ ಉಳಿದಿವೆ. ಅಲ್ಲಿನ ಕಾನೂನು ಸುವ್ಯವಸ್ಥೆ ಉತ್ತಮವಾಗದಿರುವುದೇ ಇದಕ್ಕೆ ಕಾರಣ.
ದೇಶದಲ್ಲಿ ಕಳೆದ 25 ವರ್ಷಗಳಿಂದ ಕರ್ನಾಟಕವನ್ನು ಬೇರೆಯೇ ದೃಷ್ಟಿಯಿಂದ ನೋಡಲಾಗುತ್ತಿದೆ. ರಾಜ್ಯದಲ್ಲಿ ಕಳೆದ ವರ್ಷ 10 ಲಕ್ಷ ಕೋಟಿ ರೂ. ಹೂಡಿಕೆಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿರುವುದು ಇದಕ್ಕೆ ಕಾರಣ ಎಂದರು.
ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಮೂಡಿಸುವ ಪೋಸ್ಟ್ ಗಳಿಗೆ ಕ್ರಮಕೈಗೊಳ್ಳಿ:
ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಮೂಡಿಸುವಂತಹ ವಿಚಾರಗಳನ್ನು ಪೋಸ್ಟ್ ಮಾಡಲಾಗುತ್ತಿದೆ. ಇದರಿಂದ ಸಮಾಜದಲ್ಲಿ ಅಶಾಂತಿ ಉಂಟಾಗಿ ಗಲಭೆಗಳಾಗುತ್ತವೆ. ತಪ್ಪಿತಸ್ಥರ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಿ, ಆರಂಭಿಕ ಹಂತದಲ್ಲೇ ಮಟ್ಟ ಹಾಕಬೇಕು ಎಂದರು.
ರಾಜ್ಯದಲ್ಲಿ ಲಕ್ಷಾಂತರ ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿದ್ದಾರೆ ಎಂದು ವರದಿಯಾಗುತ್ತಿದೆ. ಸ್ಥಳೀಯ ಪೊಲೀಸರು ಏನು ಮಾಡುತ್ತಿದ್ದಾರೆ? ಪ್ರತಿ ಏರಿಯಾದ ಮಾಹಿತಿ ಪೊಲೀಸರಿಗೆ ಗೊತ್ತಿರಬೇಕು ಎಂಬ ಉದ್ದೇಶದಿಂದ ‘ಮನೆಮನೆಗೆ ಪೊಲೀಸ್’ ಕಾರ್ಯಕ್ರಮವನ್ನು ತರಲಾಗಿದೆ. ಯಾರು, ಎಲ್ಲಿಂದ ಬಂದಿದ್ದಾರೆ ಎಂದು ಪೊಲೀಸ್ ಠಾಣೆ ಹಂತದಲ್ಲಿ ತಿಳಿದುಕೊಳ್ಳಲು ಅಗುವುದಿಲ್ಲವೆ? ಎಂದು ತರಾಟೆಗೆ ತೆಗೆದುಕೊಂಡರು.
ಅಕ್ರಮ ಚಟುವಟಿಕೆಗಳಲ್ಲಿ ತೊಡಗುವ ಅಧಿಕಾರಿಗಳ ವಿರುದ್ಧ ಕ್ರಮ:
ಪೊಲೀಸರು ಸಮಜಾಘಾತುಕರೊಂದಿಗೆ ಕೈಜೋಡಿಸಬಾರದು ಎಂದು ಪ್ರತಿ ಸಭೆಯಲ್ಲಿಯೂ ಎಚ್ಚರಿಸಲಾಗುತ್ತದೆ. ಆದಾಗ್ಯೂ ಈ ವಿಚಾರ ಮರುಕಳಿಸುತ್ತಿದೆ. ಠಾಣೆಯಲ್ಲಿ ಕುಳಿತು ಅಕ್ರಮ ವ್ಯವಹಾರ ನಡೆಸುವುದನ್ನು ಸಹಿಸುವುದಿಲ್ಲ. ಅಂಥವರ ಅನಿವಾರ್ಯತೆ ಪೊಲೀಸ್ ಇಲಾಖೆಗೆ ಇಲ್ಲ. ರೌಡಿಗಳ ಹುಟ್ಟುಹಬ್ಬದ ಪಾರ್ಟಿಯಲ್ಲಿ ಪೊಲೀಸ್ ಅಧಿಕಾರಿಗಳು ಪಾಲ್ಗೊಳ್ಳುತ್ತಿದ್ದಾರೆ. ಇದೆಲ್ಲವನ್ನು ನೋಡಿಕೊಂಡು ಸುಮ್ಮನಿರಬೇಕೆ? ಈ ಬಗ್ಗೆ ಎಲ್ಲ ಅಧಿಕಾರಿಗಳು ಎಚ್ಚೆತ್ತುಕೊಳ್ಳದಿದ್ದರೆ ಮತ್ತಷ್ಟು ಕಠಿಣ ಪರಿಣಾಮ ಎದುರಿಸಬೇಕಾಗುತ್ತದೆ. ಅಕ್ರಮ ಚಟುವಟಿಕೆಗಳಲ್ಲಿ ತೊಡಗುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಬೇಕು ಎಂದು ಹೇಳಿದರು.
ಡ್ರಗ್ಸ್ ದಂಧೆ ಮತ್ತು ಸೈಬರ್ ಅಪರಾಧಗಳನ್ನು ಮಟ್ಟ ಹಾಕಲು ಸೂಚನೆ:
ಡ್ರಗ್ಸ್ ದಂಧೆ, ಸೈಬರ್ ಅಪರಾಧಗಳನ್ನು ಮಟ್ಟಹಾಕುವುದು ಸವಾಲಾಗುತ್ತಿದೆ. ಇಲಾಖೆಯು ತಾಂತ್ರಿಕವಾಗಿ ಬಲಗೊಳ್ಳಬೇಕು. ಹೊಸ ತಂತ್ರಜ್ಞಾನ, ಆವಿಷ್ಕಾರಗಳನ್ನು ಅಳವಡಿಸಿಕೊಂಡು ಡ್ರಗ್ಸ್ ದಂಧೆ ಮತ್ತು ಸೈಬರ್ ಅಪರಾಧಗಳನ್ನು ಮಟ್ಟ ಹಾಕಬೇಕು ಎಂದು ಹೇಳಿದರು.
ಹಿರಿಯ ಪೊಲೀಸ್ ಅಧಿಕಾರಿಗಳು ಶಾಲಾ-ಕಾಲೇಜುಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಉಪನ್ಯಾಸ ನಡೆಸಬೇಕು. ಯುವ ಸಮೂಹದಲ್ಲಿ ಬದಲಾವಣೆ ಮೂಡುತ್ತದೆ. ಎಲ್ಲ ಅಧಿಕಾರಿಗಳು ಸಭೆಯಿಂದ ಹೋಗುವ ಮೊದಲು, ‘ಡ್ರಗ್ಸ್ ದಂಧೆಯನ್ನು ಸಂಪೂರ್ಣವಾಗಿ ಮಟ್ಟ ಹಾಕುತ್ತೇವೆ’ ಎಂದು ಆತ್ಮಸಾಕ್ಷಿಯಿಂದ ಪ್ರಮಾಣ ಮಾಡಬೇಕು.
ಕರ್ನಾಟಕ ಪೊಲೀಸ್ ದೇಶದಲ್ಲೇ ಮೊದಲ ಸ್ಥಾನ ಪಡೆಯಲು ಕ್ರಮವಹಿಸಿ:
ಗಂಭೀರವಾಗಿ ಪರಿಗಣಿಸಿ ಕೆಲಸ ಮಾಡದಿದ್ದರೆ ಜನಸಮುದಾಯ ಹಾಳಾಗುತ್ತದೆ. ಎಲ್ಲ ಐಪಿಎಸ್ ಅಧಿಕಾರಿಗಳ ಹಿನ್ನೆಲೆ ಗೊತ್ತಿದೆ. ಬಹುತೇಕರು ಒಂದಲ್ಲ ಒಂದು ರೀತಿಯಲ್ಲಿ, ಬಡತನ, ಕಷ್ಟಗಳಿಂದ ಬಂದಿದ್ದೀರಿ. ಸಮಾಜದ ಪರಿಸ್ಥಿತಿಯ ಬಗ್ಗೆ ನಿಮಗೆ ಹೆಚ್ಚಿನ ಅರಿವಿದೆ. ನಿಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಬೇಕು. ಕರ್ನಾಟಕ ಪೊಲೀಸ್ ದೇಶದಲ್ಲೇ ಮೊದಲ ಸ್ಥಾನ ಪಡೆಯಬೇಕು ಎಂದರು.
ರಾಜ್ಯದ ಎಫ್‌ಎಸ್‌ಎಲ್ ಉತ್ತಮವಾಗಿ ಕೆಲಸ ಮಾಡುತ್ತಿದೆ. ಈ ಬಗ್ಗೆ ಹೆಮ್ಮೆ ಇದೆ. ವಿಧಿ ವಿಜ್ಞಾನ ಪ್ರಯೋಗಾಲಯವನ್ನು ಅತ್ಯುತ್ತಮಗೊಳಿಸಲಾಗುವುದು ಎಂದು ತಿಳಿಸಿದರು.
ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ ಎಂ.ಎ.ಸಲೀಂ, ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಯ ಮಹಾನಿರ್ದೇಶಕರಾದ ಪ್ರಶಾಂತ್ ಕುಮಾರ್ ಠಾಕೂರ್, ಡಿಜಿಪಿ ಪ್ರಣವ್ ಮೊಹಾಂತಿ, ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ, ಗುಪ್ತವಾರ್ತೆ ಎಡಿಜಿಪಿ ರವಿ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಎಲ್ಲ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
