ಸಮಗ್ರ ಸುದ್ದಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ | ಮತದಾರರ ಪಟ್ಟಿ ತಯಾರಿಕಾ ಪ್ರಕ್ರಿಯೆ ನಿಯಮಾನುಸಾರ ಹಾಗೂ ಪಾರದರ್ಶಕವಾಗಿ ನಡೆಸಲು ಸೂಚನೆ : ಮಹೇಶ್ವರ್ ರಾವ್

Share

ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ನಡೆಯುವ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿ ತಯಾರಿಕಾ ಪ್ರಕ್ರಿಯೆಯನ್ನು ನಿಯಮಾನುಸಾರ ಹಾಗೂ ಪಾರದರ್ಶಕವಾಗಿ ನಡೆಸುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ನಗರದ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಇಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ವಾರ್ಡ್‌ವಾರು ಮತದಾರರ ಪಟ್ಟಿಯ ತಯಾರಿಕೆ ಕುರಿತು ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಜಿಬಿಎ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗದಿಂದ 22ನೇ ಜನವರಿ 2026ರಂದು ಪರಿಷ್ಕೃತ ಸುತ್ತೋಲೆ ಹೊರಡಿಸಲಾಗಿದ್ದು, ಅದರಂತೆ ಎಲ್ಲಾ ಐದು ನಗರ ಪಾಲಿಕೆಗಳ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ಕೈಗೊಂಡು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದರು.

ಆಯಾ ನಗರ ಪಾಲಿಕೆಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ವಾರ್ಡ್ ಗಡಿಗಳನ್ನು ಖುದ್ದಾಗಿ ಪರಿಶೀಲನೆ ನಡೆಸಬೇಕು. ಗಡಿಗಳಲ್ಲಿ ಯಾವುದೇ ರೀತಿಯ ಗೊಂದಲಗಳು ಉಂಟಾಗದಂತೆ ನೋಡಿಕೊಳ್ಳಬೇಕು. ಮತದಾರರ ಪಟ್ಟಿ ತಯಾರಿಕಾ ಪ್ರಕ್ರಿಯೆಯನ್ನು ನಿಯಮಾನುಸಾರ ಹಾಗೂ ಪಾರದರ್ಶಕವಾಗಿ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮತದಾರರ ನೋಂದಣಾಧಿಕಾರಿಗಳು ಚುನಾವಣಾ ಸಂಬಂಧಿತ ಕಾರ್ಯಗಳಿಗೆ ಪ್ರತಿದಿನ 2–3 ಗಂಟೆಗಳ ಸಮಯವನ್ನು ಮೀಸಲಿಟ್ಟು ಕಾರ್ಯನಿರ್ವಹಿಸಬೇಕು. ಮತದಾರರ ನೋಂದಣಾಧಿಕಾರಿಗಳು ಆಸ್ತಿ ತೆರಿಗೆ ಸಂಗ್ರಹದ ಜೊತೆಗೆ ಚುನಾವಣಾ ಕಾರ್ಯಗಳಿಗೂ ಆದ್ಯತೆ ನೀಡಿ, ಯಾವುದೇ ಲೋಪದೋಷಗಳು ಉಂಟಾಗದಂತೆ ಮತದಾರರ ಪಟ್ಟಿಯನ್ನು ತಯಾರಿಸಬೇಕೆಂದು ಸೂಚನೆ ನೀಡಿದರು.

ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ–ಮನೆಗೆ ಭೇಟಿ ನೀಡಿ ಸೇರ್ಪಡೆ, ತಿದ್ದುಪಡಿ ಹಾಗೂ ತೆಗೆಯುವಿಕೆ ಪ್ರಕ್ರಿಯೆ ನಡೆಸುವಾಗ ಸಂಬಂಧಿತ ದಾಖಲೆಗಳನ್ನು ಸರಿಯಾಗಿ ಶೇಕರಿಸಿಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ರಾಮಚಂದ್ರನ್ ಅವರು ಮಾತನಾಡಿ, 2002ರ ಮತದಾರರ ಪಟ್ಟಿಗೆ 2025ರ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡುವ ಕಾರ್ಯದಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವಂತೆ ಸೂಚನೆ ನೀಡಿದರು.

ಆಯಾ ನಗರ ಪಾಲಿಕೆಗಳಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿದ ಹಕ್ಕು–ಆಕ್ಷೇಪಣೆಗಳನ್ನು ಸ್ವೀಕರಿಸುವ ಸಂದರ್ಭದಲ್ಲಿ ನಮೂನೆ 6, 7 ಹಾಗೂ 8ಗಳನ್ನು ಸರಿಯಾಗಿ ವಿಲೇವಾರಿ ಮಾಡಬೇಕು. ಜಿಬಿಎ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗದಿಂದ ನೇಮಕಗೊಳ್ಳುವ ವೀಕ್ಷಕರು ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚನೆ ನೀಡಿದರು.

ದಕ್ಷಿಣ ನಗರ ಪಾಲಿಕೆ ಆಯುಕ್ತರಾದ ರಮೇಶ್ ಅವರು ಮಾತನಾಡಿ, ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್ ಗಡಿಗಳನ್ನು ಗುರುತಿಸಲಾಗಿದ್ದು, ಅದರಂತೆ ಎಲ್ಲಾ ಮತದಾರರು ತಮ್ಮ ಸಂಬಂಧಿತ ವಾರ್ಡ್ ಗಡಿ ಒಳಗೇ ಬರುವಂತೆ ಖಚಿತಪಡಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಆಯಾ ನಗರ ಪಾಲಿಕೆಗಳ ವಾರ್ಡ್ ಗಡಿಗಳನ್ನು ಮ್ಯಾಪ್ ಅನ್ನು ಬೂತ್ ಮಟ್ಟದ ಮೇಲ್ವಿಚಾರಕರು ಹಾಗೂ ಬಿಎಲ್‌ಒಗಳಿಗೆ ವಿತರಿಸಿ, ಅದರ ಆಧಾರದ ಮೇಲೆ ಸಮಗ್ರ ಪರಿಶೀಲನೆ ನಡೆಸಿ ಮತದಾರರ ಪಟ್ಟಿಯನ್ನು ಅಂತಿಮಗೊಳಿಸಬೇಕು. ಕುಟುಂಬದ ಸದಸ್ಯರ ಮತಗಳು ಒಂದೇ ಮತಗಟ್ಟೆಯೊಳಗೆ ಬರುವಂತೆ ನೋಡಿಕೊಳ್ಳಬೇಕು. ಸ್ಥಳೀಯ ನಾಗರಿಕರು, ರಾಜಕೀಯ ಪ್ರತಿನಿಧಿಗಳು ಹಾಗೂ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳೊಂದಿಗೆ ಸಭೆ ನಡೆಸಿ, ಮತದಾರರು ಒಂದೇ ವಾರ್ಡ್‌ನಲ್ಲೇ ಒಳಗೊಂಡಿದ್ದಾರೆ ಎಂಬ ಮಾಹಿತಿ ನೀಡುವ ಮೂಲಕ ಯಾವುದೇ ಗೊಂದಲಗಳು ಉಂಟಾಗದಂತೆ ನೋಡಿಕೊಳ್ಳುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ದಕ್ಷಿಣ, ಉತ್ತರ, ಕೇಂದ್ರ ಹಾಗೂ ಪಶ್ಚಿಮ ನಗರ ಪಾಲಿಕೆಗಳ ಅಪರ ಆಯುಕ್ತರು, ಸಹಾಯಕ ಆಯುಕ್ತರು, ಮತದಾರರ ನೋಂದಣಾಧಿಕಾರಿಗಳು, ಮತದಾರರ ಸಹಾಯಕ ನೋಂದಣಾಧಿಕಾರಿಗಳು ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.


Share

You cannot copy content of this page