ಸಮಗ್ರ ಸುದ್ದಿ

ಹೆಣ್ಣು ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಜಿಲ್ಲಾಧಿಕಾರಿ ಜಗದೀಶ.ಜಿ

Share


ಬೆಂಗಳೂರು: ಹೆಣ್ಣು ಮಗು ಮನೆಯ ನಂದಾ ದೀಪ ಇದ್ದಂತೆ ಯಾವಾಗಲೂ ಬೆಳಗಲು ಬಿಡಿ. ಹೆಣ್ಣನ್ನು ಉಳಿಸಿ, ಕಲಿಸಿ, ಬೆಳಸಿ. ಹೆಣ್ಣು ಇರುವ ಮನೆಯು ನಂದಗೋಕುಲದಂತೆ, ಹೆಣ್ಣು ಮಕ್ಕಳಿಗೂ ಸಮಾಜದಲ್ಲಿ ಸಮಾನ ಅವಕಾಶಗಳಿದ್ದು, ಅವಕಾಶಗಳ ಸದುಪಯೋಗ ಪಡೆದುಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ.ಜಿ ಅವರು ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಕರಪತ್ರವನ್ನು ಬಿಡುಗಡೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ದೇಶದ ಸ್ವಾತಂತ್ರ್ಯ, ಸಮಾನತೆ ಪ್ರತಿಯೊಬ್ಬ ಹೆಣ್ಣು ಮಗುವಿಗೂ ಸಿಗಬೇಕು, ಈ ಸಮಾಜದಲ್ಲಿ ಹೆಣ್ಣು ಮಕ್ಕಳು ಎಲ್ಲಾ ಕ್ಷೇತ್ರಗಳಲ್ಲಿಯೂ ಸಹ ಮುಂದುವರೆಯುತ್ತಿದ್ದಾರೆ. ಚಾಲಕನಿಂದ ಹಿಡಿದು ಪೈಲೆಟ್ ವವರೆಗೂ ಪುರುಷರ ಸರಿಸಮಾನವಾಗಿ ಮುಂದುವರೆಯುತ್ತಿದ್ದಾರೆ ಎಂದರು.

ಪ್ರಸ್ತಕ ದಿನಮಾನಗಳಲ್ಲಿ ಮಹಿಳೆಯರಿಗೆ ಬಹಷ್ಟು ಸೌಲಭ್ಯಗಳನ್ನು ನೀಡಲಾಗಿದ್ದು ಅವುಗಳ ಸದುಪಯೋಗ ಪಡೆದುಕೊಂಡು ಮುಂದೆ ಬರಬೇಕು. ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಮಹಿಳೆಯರು ಸ್ವತಂತ್ರವಾಗಿ ಜೀವನ ನಡೆಸಿದಾಗ ಅವರಿಗೆ ನಿಜವಾದ ಸ್ವಾತಂತ್ರ್ಯ ಸಿಗಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಡಾ.ಜಗದೀಶ್ ಜಿ. ನಾಯಕ್,  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ರವೀಂದ್ರನಾಥ ಮೇಟಿ , ತಾಲೂಕು ಮಟ್ಟದ ಆರೋಗ್ಯ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.


Share

You cannot copy content of this page