ನವದೆಹಲಿ: ಗ್ರಾಮೀಣ ನೀರು ಸರಬರಾಜು ಕ್ಷೇತ್ರದ ಪರಿಣಾಮಕಾರಿ ಕಾರ್ಯಾಚರಣೆ ಮತ್ತು ನಿರ್ವಹಣೆಗಾಗಿ ಸುಸ್ಥಿರತೆ, ಆರ್ಥಿಕ ದೃಢತೆ, ಸಾಮರ್ಥ್ಯ ವೃದ್ಧಿ, ನೀರಿನ ಗುಣಮಟ್ಟ ಮತ್ತು ಸಮುದಾಯದ ಒಳಗೊಳ್ಳುವಿಕೆಯ ಮೇಲೆ ವಿಶೇಷ ಗಮನ ಹರಿಸುವ ಮೂಲಕ ಕರ್ನಾಟಕ ಸರ್ಕಾರ ಯೋಜನೆಯನ್ನು ಜಾರಿಗೊಳಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ನವದೆಹಲಿಯಲ್ಲಿ ನಡೆದ ಗ್ರಾಮೀಣ ಕುಡಿಯುವ ನೀರಿನ ಸೇವೆಗಳ ಸುಸ್ಥಿರ ಕಾರ್ಯಾಚರಣೆ ಮತ್ತು ನಿರ್ವಹಣೆ ಕುರಿತು ಸಚಿವರ ಮಟ್ಟದ ನೀತಿ ಸಂವಾದದಲ್ಲಿ ಭಾಗವಹಿಸಿದ್ದರು. ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಸಚಿವರುಗಳು, ರಾಜ್ಯಗಳ ಗ್ರಾಮೀಣ ನೀರು ಸರಬರಾಜು ಸಚಿವರು ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು. ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಸಮೀರ್ ಶುಕ್ಲಾ ಹಾಗೂ ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
