ಬೆಂಗಳೂರು, ನ.23: ನೀರಾವರಿ ಇಲಾಖೆ ಹಾಗೂ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಭೂಸ್ವಾಧೀನ ಕೋರ್ಟ್ ಪ್ರಕರಣಗಳ ಕರ್ತವ್ಯ ಲೋಪಗಳ ಬಗ್ಗೆ ತನಿಖೆಗೆ ಎಸ್ಐಟಿ ರಚಿಸಲಾಗುವುದು. ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳನ್ನು ಅಮಾನತುಗೊಳಿಸಿ, ವಕೀಲರನ್ನು ವಜಾಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಜಲ ಸಂಪನ್ಮೂಲ, ಬಿಡಿಎ ಭೂಸ್ವಾಧೀನ ಪ್ರಕರಣಗಳ ಕುರಿತು ಬೆಂಗಳೂರು ನಗರಾಭಿವೃದ್ಧಿ ಹಾಗೂ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದಲ್ಲಿ ಶನಿವಾರ ಸಭೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ನೀರಾವರಿ ಇಲಾಖೆ ಹಾಗೂ ಬಿಡಿಎ ವ್ಯಾಪ್ತಿಯಲ್ಲಿನ ಭೂಸ್ವಾಧೀನ ಪ್ರಕ್ರಿಯೆ ವಿಚಾರವಾಗಿ ನ್ಯಾಯಾಲಯ ಪ್ರಕರಣಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ಇಲಾಖೆಗಳಲ್ಲಿ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಎಷ್ಟು ಪ್ರಕರಣಗಳಿವೆ, ಯಾವ ಕಾರಣಕ್ಕೆ ಇವೆ, ಯಾಕೆ ಇವು ಇತ್ಯರ್ಥವಾಗಿಲ್ಲ ಎಂಬ ವಿಚಾರವಾಗಿ ನಾನು ಇಲಾಖೆಯಲ್ಲಿ ತನಿಖೆ ಮಾಡಿಸಿದ್ದೇನೆ. ನನಗೆ ಬಂದ ಮಾಹಿತಿ ಪ್ರಕಾರ ಈ ಪ್ರಕರಣಗಳಿಂದ ಸರ್ಕಾರಕ್ಕೆ ಬಹಳ ಹೊರೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡರು, ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅವರು ಹಾಗೂ ದೆಹಲಿಯ ವಕೀಲರ ತಂಡ ಸಭೆಯಲ್ಲಿ ಚರ್ಚೆ ನಡೆಸಿದ್ದೇವೆ ಎಂದು ತಿಳಿಸಿದರು.
*ನೀರಾವರಿ ಇಲಾಖೆಗೆ ಸಂಬಂಧಿಸಿದ 61, 843 ಪ್ರಕರಣಗಳು ಬಾಕಿ*:
ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಇತ್ತೀಚೆಗೆ ಕೃಷ್ಣ ಭಾಗ್ಯ ಜಲ ನಿಗಮದಲ್ಲಿ ಒಪ್ಪಿತ ಭೂಸ್ವಾಧೀನಕ್ಕೆ ಪರಿಹಾರದ ಮೊತ್ತ ಹೆಚ್ಚಿಸುವ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದೇವೆ. ಇದಕ್ಕೆ ಸುಮಾರು 75 ಸಾವಿರ ಕೋಟಿ ರೂ. ಮೀಸಲಿರಿಸಲಾಗುವುದು. ವಿವಿಧ ನೀರಾವರಿ ನಿಗಮಗಳ ವ್ಯಾಪ್ತಿಯಲ್ಲಿ 61,843 ಪ್ರಕರಣಗಳಿವೆ. ಕೆಎನ್ಎನ್ಎಲ್ ನಲ್ಲಿ 25,356, ವಿಜೆಎನ್ಎಲ್ ನಲ್ಲಿ 2,856, ಸಿಎನ್ಎನ್ಎಲ್ ನಲ್ಲಿ 4455, ಯುಕೆಪಿ, ಆರ್ ಅಂಡ್ ಆರ್ ಹಾಗೂ ಕೆಬಿಜೆಎನ್ಎಲ್ ನಲ್ಲಿ 29,176 ಪ್ರಕರಣಗಳು ಬಾಕಿ ಉಳಿದಿವೆ.
ಕಂದಾಯ ಇಲಾಖೆಯವರು ಬೆಂಗಳೂರು ವ್ಯಾಪ್ತಿಯಲ್ಲಿ ತನಿಖೆ ಮಾಡಲು ಆದೇಶ ಮಾಡಿದ್ದು, ಅಧಿಕಾರಿಗಳು, ಕಾನೂನು ತಂಡದವರು ಸೇರಿ ಸರಿಯಾದ ಸಮಯದಲ್ಲಿ ಅರ್ಜಿ ಹಾಕದೇ ಕಾಲಹರಣ ಮಾಡಿರುವುದು ಕಂಡುಬಂದಿದೆ. ಈ ವಿಚಾರವಾಗಿ ವರದಿ ಸಲ್ಲಿಸುವಂತೆ ಸೂಚಿಸಿದ್ದೇವೆ.
ಎಸ್ಐಟಿ ರಚಿಸಿ ಎಲ್ಲೆಲ್ಲಿ ಯಾವ ರೀತಿ ಪಿತೂರಿ ನಡೆದಿದೆ ಎಂದು ವಿಚಾರಣೆ ನಡೆಸಲಾಗುವುದು. ಕರ್ತವ್ಯ ಲೋಪ ಮಾಡಿರುವ ಅಧಿಕಾರಿಗಳ ವಿರುದ್ಧ ಇಲಾಖೆವಾರು ತನಿಖೆಗೆ ಆದೇಶಿಸಿ ಎಲ್ಲರನ್ನು ಅಮಾನತುಗೊಳಿಸಲು ನಿರ್ಧರಿಸಲಾಗಿದೆ. ಇನ್ನು ವಕೀಲರುಗಳ ಪೈಕಿ ಯಾರು ಸಮಯಕ್ಕೆ ಸರಿಯಾಗಿ ನ್ಯಾಯಾಲಯದಲ್ಲಿ ಅರ್ಜಿಯನ್ನು ಕಾನೂನುಬದ್ಧವಾಗಿ ಸಲ್ಲಿಸದೇ ಕರ್ತವ್ಯ ಲೋಪ ಎಸಗಿದ್ದಾರೆ ಅವರನ್ನು ವಜಾಗೊಳಿಸಲು ತೀರ್ಮಾನಿಸಲಾಗಿದೆ. ಅಧಿಕಾರಿಗಳು, ವಕೀಲರು ಎಲ್ಲರನ್ನು ಹೊಣೆಗಾರರನ್ನಾಗಿ ಮಾಡಲು ನಿರ್ಧರಿಸಿದ್ದೇವೆ. ಇದರಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸುತ್ತೇವೆ ಎಂದರು.
ನೀರಾವರಿ ಇಲಾಖೆ ಪ್ರಕರಣಗಳ ವಾದ ಮಂಡಿಸಲು 219 ವಕೀಲರಿದ್ದಾರೆ. ಇವುಗಳಲ್ಲಿ ಯಾರು ಹೊಣೆಗಾರರಿಲ್ಲ, ಅವರೆಲ್ಲರನ್ನು ಕಿತ್ತೊಗೆದು ಬೇರೆ ವಕೀಲರನ್ನು ನೇಮಿಸಲಾಗುವುದು. ನಮ್ಮ ಇಲಾಖೆಯ ಗೌರವ ಉಳಿಸಲು ರಾಜ್ಯದಲ್ಲೇ ಐತಿಹಾಸಿಕ ತೀರ್ಮಾನಕ್ಕೆ ಬರಲಾಗಿದೆ ಎಂದು ತಿಳಿಸಿದರು.
ನ್ಯಾಯಾಲಯದ ಹೊರಗೆ ಪ್ರಕರಣ ಇತ್ಯರ್ಥಕ್ಕೆ ಪ್ರಾಧಿಕಾರ ರಚನೆ:
ನೂತನ ಕಾಯ್ದೆ ಪ್ರಕಾರ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಪ್ರಾಧಿಕಾರ ರಚನೆಗೆ ಅವಕಾಶವಿದೆ. ಆ ಮೂಲಕ ನ್ಯಾಯಾಲಯದ ಮೆಟ್ಟಿಲೇರದೆ ಇಲ್ಲೇ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲಾಗುವುದು. ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಹಾಗೂ ನೀರಾವರಿ ಇಲಾಖೆಗೆ ಸಂಬಂಧಿಸಿದಂತೆ ಈ ಪ್ರಾಧಿಕಾರವನ್ನು ಯಾವ ರೀತಿ ರಚಿಸಬೇಕು ಎಂದು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು. ನಮ್ಮ ಸರ್ಕಾರ ಈ ಪ್ರಾಧಿಕಾರ ರಚಿಸಲಿದೆ ಎಂದು ತಿಳಿಸಿದರು.
*9 ಲಕ್ಷ ಪರಿಹಾರ ನಿಗದಿಯಾಗಿದ್ದರೆ 9 ಕೋಟಿ ಪರಿಹಾರಕ್ಕೆ ಕೋರ್ಟ್ ತೀರ್ಪು*:
ಕೆಲವು ಸಂದರ್ಭದಲ್ಲಿ ಕಂದಾಯ ಇಲಾಖೆ ಭೂಸ್ವಾಧೀನ ಪ್ರಕ್ರಿಯೆ ಮಾಡಿದರೂ ಪರಿಹಾರ ಹಣ ನೀಡಬೇಕಾಗಿರುವುದು ನೀರಾವರಿ ಇಲಾಖೆಯ ವಿವಿಧ ನಿಗಮಗಳಾಗಿರುತ್ತವೆ. ಇಂತಹ ಪ್ರಕರಣಗಳಲ್ಲಿ ಈ ನಿಗಮಗಳನ್ನೇ ಪಾರ್ಟಿಯನ್ನಾಗಿ ಮಾಡದೇ ಪ್ರಕರಣ ನಡೆಸಲಾಗುತ್ತಿದೆ. ಇಂತಹ ಪ್ರಕರಣಗಳಲ್ಲಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸುತ್ತೇವೆ. ಸುಪ್ರೀಂ ಕೋರ್ಟ್ ನಲ್ಲಿ ಎಸ್ಎಲ್ ಪಿ ಅರ್ಜಿ ಹಾಕುತ್ತಿದ್ದು, ಕೆಲವು ಪ್ರಕರಣವನ್ನು ವಾಪಸ್ ತರಲು ಮುಂದಾಗಿದ್ದೇವೆ. ನೀರಾವರಿ ಇಲಾಖೆಯಲ್ಲಿ 9 ಲಕ್ಷ ರೂಪಾಯಿ ಪರಿಹಾರ ನಿಧಿ ಘೋಷಿಸಿದ್ದರೆ, ನ್ಯಾಯಾಲಯದಲ್ಲಿ ಅರ್ಜಿ ಹಾಕಿ 9, 10, 15, 20 ಕೋಟಿ ರೂಪಾಯಿ ಪರಿಹಾರ ನೀಡಲು ಆದೇಶ ನೀಡಲಾಗಿದೆ. ಹೀಗಾಗಿ ನಮ್ಮ ಸರ್ಕಾರ ಈ ತೀರ್ಮಾನಕ್ಕೆ ಬರಲಾಗಿದೆ ಎಂದರು.
*ಸರ್ಕಾರದ ಪರ ವಕೀಲರ ವಾದ ದಾಖಲಾತಿಗೆ ಪ್ರತ್ಯೇಕ ಘಟಕ ಸ್ಥಾಪಿಸಲಾಗುವುದು*:
ವಿಳಂಬ ಪ್ರಕ್ರಿಯೆ ತಡೆಯಲು ಸುಪ್ರೀಂ ಕೋರ್ಟಿನ ವಕೀಲರ ಸಲಹೆ ಪಡೆದು ಮುಂದಿನ ಅಧಿವೇಶನದಲ್ಲಿ ಕಾನೂನಿಗೆ ತಿದ್ದುಪಡಿ ತರಲು ಮುಂದಾಗಿದ್ದೇವೆ. ದೆಹಲಿಯಲ್ಲಿ ಹಾಗೂ ಬೆಂಗಳೂರಿನಲ್ಲಿ ಇಂತಹ ಕಾನೂನು ಪ್ರಕರಣಗಳ ಪರಿಶೀಲನೆಗೆ ಕಾನೂನು ಘಟಕ ಸ್ಥಾಪಿಸಲು ತೀರ್ಮಾನಿಸಿದ್ದೇವೆ. ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ಹಾಗೂ ಜಿಲ್ಲಾ ನ್ಯಾಯಾಲಯಗಳಲ್ಲಿ ನಮ್ಮ ಪರ ವಕೀಲರು ಮಂಡಿಸುವ ವಾದವನ್ನು ದಾಖಲಾತಿ ಮಾಡಲು ಘಟಕ ಆರಂಭಿಸಲು ತೀರ್ಮಾನಿಸಿದ್ದೇವೆ ಎಂದು ಮಾಹಿತಿ ನೀಡಿದರು.
ಬಿಡಿಎ, ಜಿಬಿಎ ವ್ಯಾಪ್ತಿಯಲ್ಲೂ ಈ ರೀತಿ ವಾದ ದಾಖಲೆಗಳನ್ನು ಮಾಡಲಾಗುವುದು. ಕಾನೂನು ಪ್ರಕ್ರಿಯೆಯನ್ನು ತ್ವರಿತಗೊಳಿಸಲಾಗುವುದು. ಪ್ರಾಧಿಕಾರ ರಚಿಸಲಾಗುವುದು. ಇನ್ನು ಬೆಂಗಳೂರು ಬಿಸಿನೆಸ್ ಕಾರಿಡಾರ್ ರಸ್ತೆ 1 ಹಾಗೂ 2 ರಸ್ತೆಯ ಭೂಸ್ವಾಧೀನಕ್ಕೆ ಪರಿಹಾರ ನೀಡಲು ಐದು ಅವಕಾಶ ನೀಡಲಾಗಿದೆ. ಈ ಯೋಜನೆ ವಿಚಾರದಲ್ಲಿ ನಾವು ಹಿಂದೆ ಸರಿಯುವುದಿಲ್ಲ. ಆರು ತಿಂಗಳಲ್ಲಿ ನಾವು ಕೆಲಸ ಪ್ರಾರಂಭಿಸಬೇಕು. ಒಂದು ತಿಂಗಳ ಒಳಗಾಗಿ ಪರಿಹಾರ ವಿತರಣೆ ಆರಂಭಿಸಬೇಕು, ವಿಳಂಬ ಮಾಡಿದರೆ ಹಳೇ ಅಧಿಕಾರಿಗಳನ್ನು ತೆಗೆದುಹಾಕಿ ಹೊಸ ಅಧಿಕಾರಿಗಳ ನಿಯೋಜಿಸಿ ಕೆಲಸ ಮುಂದುವರಿಸುತ್ತೇವೆ ಎಂದು ತಿಳಿಸಿದರು..
*ಮೇಕೆದಾಟು ಯೋಜನೆ ಹಂತ ಹಂತವಾಗಿ ಜಾರಿ*:
ಮೇಕೆದಾಟು ಯೋಜನೆಯನ್ನು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಜಾರಿಗೊಳಿಸಲಾಗುವುದು. ಈ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ, ನಿಯೋಗವನ್ನು ಕರೆದುಕೊಂಡು ಹೋಗುವ ಬಗ್ಗೆ ಸಂಸದರಿಗೆ ಮಾಹಿತಿ ನೀಡಬೇಕು, ಸರ್ವಪಕ್ಷ ಸಭೆ ಕರೆಯಬೇಕು. ಈ ಸಭೆಯನ್ನು ದೆಹಲಿಯಲ್ಲಿ ಮಾಡಬೇಕೇ ಅಥವಾ ಬೆಂಗಳೂರಿನಲ್ಲಿ ಮಾಡಬೇಕೇ ಎಂದು ಸಿಎಂ ಜತೆ ಚರ್ಚಿಸಿ ತೀರ್ಮಾನ ಮಾಡಲಾಗುವುದು. ಸಿಡಬ್ಲ್ಯೂಎಂಎ, ಸಿಡಬ್ಲ್ಯೂಸಿ ಮುಂದೆಯೇ ಈ ಪ್ರಕರಣ ಇತ್ಯರ್ಥವಾಗಬೇಕು. ನ್ಯಾಯಾಲಯದ ಮೆಟ್ಟಿಲೇರುವ ಪ್ರಮೇಯ ಇರುವುದಿಲ್ಲ. ನಮ್ಮ ನೀರು ನಮ್ಮ ಹಕ್ಕು ಹೆಜ್ಜೆ ಹಾಕಿದ್ದಕ್ಕೆ, ನಮ್ಮ ಪ್ರಾರ್ಥನೆಗೆ ಫಲ ಸಿಕ್ಕಿದೆ. ಇದಕ್ಕೆ ಸಂಬಂಧಿಸಿದಂತೆ ಪರಿಷ್ಕೃತ ಡಿಪಿಆರ್ ಸಲ್ಲಿಸಲಾಗುವುದು” ಎಂದು ತಿಳಿಸಿದರು.
ವಿಧಾನ ಪರಿಷತ್ ಸಭಾಧ್ಯಕ್ಷರ ಸ್ಥಾನವನ್ನು ಪಡೆಯಲು ಪ್ರಯತ್ನಿಸುತ್ತಿರುವ ಬಗ್ಗೆ ಕೇಳಿದಾಗ, “ನಮ್ಮ ಬಳಿ ಬಹುಮತವಿದೆ. ಎಲ್ಲಾ ಪರಿಷತ್ ಸದಸ್ಯರು ನನ್ನನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಮಾಡಿದ್ದಾರೆ. ಮುಂದಿನ ಅಧಿವೇಶನದಲ್ಲಿ ನಾವು ಈ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.
