ಬೆಂಗಳೂರು, ನ.23: ಸಮಾಜ ಕಲ್ಯಾಣ ಇಲಾಖೆಯು ನವೆಂಬರ್ 26 ರಂದು ‘ಸಂವಿಧಾನ ದಿನಾಚರಣೆ’ ಕಾರ್ಯಕ್ರಮವನ್ನು ಆಯೋಜಿಸಿದೆ.
ಈ ಆಚರಣೆಯು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಎಂಬ ಸಂವಿಧಾನದ ಮೂಲ ಮೌಲ್ಯಗಳನ್ನು ಪುನರುಚ್ಚರಿಸುವ ಗುರಿಯನ್ನು ಹೊಂದಿದ್ದು, ಬೆಂಗಳೂರಿನ ವಸಂತನಗರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ.
ವಿಧಾನಸೌಧದ ಮುಂಭಾಗ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಬೆಳಿಗ್ಗೆ 10.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಮಾಜಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಉಪಸ್ಥಿತರಿರಲಿದ್ದಾರೆ.
ನಂತರ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾದ “ಸಂವಿಧಾನ ಕಾಲ್ನಡಿಗೆ ಜಾಥಾ” ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
