ಉತ್ತರ ಕನ್ನಡ ಜಿಲ್ಲೆಯಲ್ಲಿ 4 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೆ ಏರಿಕೆಗೊಂಡಿದ್ದು, ಅವುಗಳಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಶೀಘ್ರದಲ್ಲಿಯೇ ಪೂರೈಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ್ ಹೇಳಿದರು.
ಅವರು ಶನಿವಾರ ಕ್ಯಾದಗಿಯಲ್ಲಿ ರೂ.9 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ಉತ್ತಮ ವೈದ್ಯರು ಮತ್ತು ಸಿಬ್ಬಂದಿ ವರ್ಗ ಇದ್ದಾಗ ಮಾತ್ರ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಲು ಸಾಧ್ಯ. ಖಾಯಿಲೆಗಳ ಹೆಚ್ಚಳಕ್ಕೆ ನಮ್ಮ ಜೀವನ ಶೈಲಿಯೂ ಮುಖ್ಯ ಕಾರಣವಾಗಿದ್ದು, ಹೆಚ್ಚಿನ ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದ ಅವರು ಶಿರಸಿಯ ಆಸ್ಪತ್ರೆಗೆ ಜಿಲ್ಲಾ ಆಸ್ಪತ್ರೆಯಲ್ಲಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಭರವಸೆಯನ್ನು ನೀಡಿದರು.
ರೋಗ ಉಲ್ಭಣಗೊಂಡ ನಂತರ ಚಿಕಿತ್ಸೆ ಪಡೆಯುವ ಬದಲು ಆರಂಭಿಕ ಹಂತದಲ್ಲಿಯೇ ರೋಗ ಪತ್ತೆ ಹಚ್ಚಿ ಸೂಕ್ತ ಮಾರ್ಗದರ್ಶನ ನೀಡುವ ಉದ್ದೇಶದಿಂದ ರಾಜ್ಯದಲ್ಲಿ ಗೃಹ ಆರೋಗ್ಯ ಯೋಜನೆಯನ್ನು ಜಾರಿ ಮಾಡಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿದೆ, ಕ್ಯಾದಗಿಯಲ್ಲಿ ಹಲವಾರು ವರ್ಷಗಳ ಬೇಡಿಕೆಯಾದ ಸಮುದಾಯ ಆರೋಗ್ಯ ಕೇಂದ್ರದ ಉದ್ಘಾಟನೆ ಗೊಂಡಿರುವುದು ಎಲ್ಲರಿಗೂ ಸಂತಸ ತಂದಿದೆ. ಈ ಭಾಗದಲ್ಲಿರುವ ಮಂಗನ ಕಾಯಿಲೆ ತಪಾಸಣೆಗೋಸ್ಕರ ರೂ.4೦ ಲಕ್ಷ ವೆಚ್ಚದಲ್ಲಿ ಶಿರಸಿಯಲ್ಲಿ ತಪಾಸಣಾ ಕೇಂದ್ರ ತೆರೆಯಲು ಆರೋಗ್ಯ ಸಚಿವರು ಸಹಕರಿಸಿದ್ದಾರೆ ಎಂದರು.
ವೇದಿಕೆಯಲ್ಲಿ ಆರೋಗ್ಯ ಇಲಾಖೆಯ ಬೆಳಗಾವಿ ವಿಭಾಗದ ಸಹ ನಿರ್ದೇಶಕಿ ಡಾ.ಪುಷ್ಪಾ, ತಾಲ್ಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ ಜಿ ನಾಗರಾಜ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶಂಕರ ರಾವ್, ತಹಶೀಲ್ದಾರ ಎಂ. ಆರ್. ಕುಲಕರ್ಣಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ದೇವರಾಜ ಹಿತ್ತಲಕೊಪ್ಪ, ಕ್ಯಾದಗಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕುಸುಮಾ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಲಕ್ಷ್ಮೀಕಾಂತ ನಾಯ್ಕ ಇದ್ದರು.
