ಮಾದಕ ವಸ್ತುಗಳ ಸೇವೆ ವಿರುದ್ಧ ಜನಜಾಗೃತಿ ಮೂಡಿಸಲು ರಾಜ್ಯ ಪೊಲೀಸ್ ಇಲಾಖೆ ಬೆಂಗಳೂರಿನಲ್ಲಿಂದು ಪೊಲೀಸ್ ಓಟ ಕಾರ್ಯಕ್ರಮ ಆಯೋಜಿಸಿತ್ತು. ವಿಧಾನಸೌಧದ ಮುಂಭಾಗದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಓಟಕ್ಕೆ ಚಾಲನೆ ನೀಡಿದರು.
ಈ ವೇಳೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಎಂ.ಎ. ಸಲೀಂ, ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
10 ಕಿಲೋ ಮೀಟರ್ ಹಾಗೂ 5 ಕಿಲೋಮೀಟರ್ ಎರಡು ವಿಭಾಗಗಳಲ್ಲಿ ನಡೆದ ಓಟದಲ್ಲಿ ನೂರಾರು ಮಂದಿ ಸ್ಪರ್ಧಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು.
ವಿಧಾನಸೌಧದ ಮುಂಭಾಗದಿಂದ ಹೊರಟು, ಚಿನ್ನಸ್ವಾಮಿ ಕ್ರೀಡಾಂಗಣ, ಕಂಠೀರವ ಕ್ರೀಡಾಂಗಣದ ಮೂಲಕ ಹಾದು ಬಳಿಕ ವಿಧಾನಸೌಧದ ಮುಂಭಾಗದಲ್ಲಿ ಓಟ ಕೊನೆಗೊಂಡಿತು.
ಬಳಿಕ ಡಾ. ಜಿ. ಪರಮೇಶ್ವರ್ ಮಾತನಾಡಿ, ದೇಶಾದ್ಯಂತ ಮಾದಕ ವಸ್ತುಗಳ ಹಾವಳಿ ವಿಪರೀತವಾಗುತ್ತಿದ್ದು, ಕರ್ನಾಟಕದಲ್ಲೂ ಪೊಲೀಸರು ಇದನ್ನು ತಡೆಗಟ್ಟಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಪೊಲೀಸರು ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ಅಪಾಯಗಳ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ಈ ಕಾರ್ಯದಲ್ಲಿ ಸಾರ್ವಜನಿಕರ ಸಹಭಾಗಿತ್ವವು ಅತ್ಯಗತ್ಯವಾಗಿದೆ. ಹಾಗಾಗಿಯೇ ಇಂತಹ ಓಟಗಳನ್ನು ಆಯೋಜಿಸಲಾಗುತ್ತಿದೆ ಎಂದರು.
