ಬೆಂಗಳೂರು: ಮಾರ್ಚ್ 6 ರಂದು ಮಂಡನೆಯಾಗಲಿರುವ 2026-27ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಭಾಗಕ್ಕೆ ವಿಶೇಷ ಆದ್ಯತೆ ದೊರಕಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪ್ರತಿ ಬಜೆಟ್ ನಲ್ಲೂ ತಮ್ಮ ಸರ್ಕಾರ ಕಲ್ಯಾಣ ಕರ್ನಾಟಕಕ್ಕೆ ಒತ್ತು ನೀಡುತ್ತಲೇ ಇದೆ. ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ ನಮ್ಮ ಸರ್ಕಾರದ ಆದ್ಯತೆಯಾಗಿದ್ದು, ಕೈಗಾರಿಕೆಗಳು ಮತ್ತು ಹೂಡಿಕೆಗೆ ಸಂಬಂಧಿಸಿದಂತೆ ಕೆಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇರಾನ್, ಇಸ್ರೇಲ್ ಸಂಘರ್ಷದಿಂದ ದುಬೈನಲ್ಲಿ ಕರ್ನಾಟಕದ ನಾಗರಿಕರು ಸಿಲುಕಿಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಅವರು ಪ್ರಧಾನಿ ಅವರಿಗೆ ಪತ್ರ ಬರೆದು, ಸಂಕಷ್ಟದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ವಾಪಸ್ ಕರೆತರಲು ನೆರವು ನೀಡಬೇಕು ಎಂದು ಕೋರಿದ್ದಾರೆ.
ಕೇಂದ್ರ ಸರ್ಕಾರವು ಆ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. ಒಮ್ಮೆ ವಿಮಾನಯಾನ ಪುನಾರಂಭವಾದರೆ, ಎಲ್ಲ ಜನರನ್ನು ಸುರಕ್ಷಿತವಾಗಿ ವಾಪಸ್ ಕರೆತರುವ ಕಾರ್ಯ ನಡೆಯಲಿದೆ ಎಂದು ತಿಳಿಸಿದ್ದಾರೆ.
