ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2026-27 ನೇ ಸಾಲಿನಲ್ಲಿ 4.48 ಲಕ್ಷ ರೂಪಾಯಿ ಬಜೆಟ್ ಮಂಡಿಸಿದ್ದಾರೆ. 17ನೇ ಬಜೆಟ್ ಮಂಡನೆ ಮಾಡುವ ಮೂಲಕ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ಕೀರ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ. ಸಂವಿಧಾನ ಪೀಠಿಕೆ ಬೋಧನೆ ಬಳಿಕ, ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ 207 ಪುಟಗಳ ಸುದೀರ್ಘ ಬಜೆಟ್ ಭಾಷಣ ಓದಿದರು.
ರಾಜ್ಯ ತೆರಿಗೆಯಿಂದ 2 ಲಕ್ಷ 20 ಸಾವಿರ ಕೋಟಿ ರೂಪಾಯಿ ಆದಾಯ ಬಂದರೆ, ಕೇಂದ್ರ ತೆರಿಗೆ ಪಾಲಿನಿಂದ 63 ಸಾವಿರದ 50 ಕೋಟಿ ರೂಪಾಯಿ, ಕೇಂದ್ರ ಸರ್ಕಾರದ ಅನುದಾನಗಳಿಂದ 16 ಸಾವಿರ ಕೋಟಿ ರೂಪಾಯಿ, ತೆರಿಗೆಯೇತರ ರಾಜಸ್ವದಿಂದ 16 ಸಾವಿರ ಕೋಟಿ ರೂಪಾಯಿ ಆದಾಯ ಬರಲಿದೆ ಎಂದು ಬಜೆಟ್ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ.
1 ಲಕ್ಷದ 22 ಸಾವಿರದ 340 ಕೋಟಿ ರೂಪಾಯಿ ಬಹಿರಂಗ ಮಾರುಕಟ್ಟೆ ಸಾಲ ಪಡೆಯುವುದರ ಜೊತೆಗೆ ಕೇಂದ್ರ ಸರ್ಕಾರದಿಂದಲೂ 6 ಸಾವಿರದ 810 ಕೋಟಿ ರೂಪಾಯಿ ಸಾಲ ಸಹಿತ ಒಟ್ಟು 1 ಲಕ್ಷದ 32 ಸಾವಿರ ಕೋಟಿ ರೂಪಾಯಿ ಸಾಲ ಪಡೆಯುವುದಾಗಿ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.
ಈ ಬಾರಿಯ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಅತಿ ಹೆಚ್ಚು 47 ಸಾವಿರದ 224 ಕೋಟಿ ರೂಪಾಯಿ, ಅಂದರೆ ಶೇಕಡ 10ರಷ್ಟು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 34 ಸಾವಿರದ 929 ಕೋಟಿ, ಇಂಧನ 29 ಸಾವಿರದ 947 ಕೋಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ 26 ಸಾವಿರದ 559 ಕೋಟಿ, ನೀರಾವರಿ ಇಲಾಖೆಗೆ 22 ಸಾವಿರದ 436 ಕೋಟಿ, ನಗರಾಭಿವೃದ್ಧಿ ಮತ್ತು ವಸತಿ ಇಲಾಖೆಗೆ 22 ಸಾವಿರದ 203 ಕೋಟಿ, ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ 23 ಸಾವಿರದ 100 ಕೋಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 17 ಸಾವಿರದ 817 ಕೋಟಿ, ಕಂದಾಯ 19 ಸಾವಿರದ 843 ಕೋಟಿ, ಸಮಾಜಕಲ್ಯಾಣ 18 ಸಾವಿರದ 616 ಕೋಟಿ, ಲೋಕೋಪಯೋಗಿ 11 ಸಾವಿರದ 424 ಕೋಟಿ, ಆಹಾರ ಮತ್ತು ನಾಗರಿಕ ಸಬರಾಜು ಇಲಾಖೆಗೆ 7 ಸಾವಿರದ 942 ಕೋಟಿ, ಕೃಷಿ ಮತ್ತು ತೋಟಗಾರಿಕಾ ಇಲಾಖೆಗೆ 8 ಸಾವಿರದ 373 ಕೋಟಿ, ಪಶು ಸಂಗೋಪನೆ ಮತ್ತು ಮೀನುಗಾರಿಕೆಗೆ 4 ಸಾವಿರದ 84 ಕೋಟಿ ಹಾಗೂ ಇತರೆ ವಲಯಕ್ಕೆ 1 ಲಕ್ಷದ 72 ಸಾವಿರದ 757 ಕೋಟಿ ರೂಪಾಯಿ ಮೀಸಲಿಡಲಾಗಿದೆ.
ಹದಿನಾರು ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸಲಾಗುವುದು ಎಂದು ಆಯ-ವ್ಯಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡ ಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ಮತ್ತು ವ್ಯಕ್ತಿತ್ವ ರೂಪಿಸುವ ಸ್ಥಳವಾಗಿರುವ ಶಾಲಾ ಕಾಲೇಜುಗಳು ವಿಶ್ವವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ಜಾಗೃತಿ ಮೂಡಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2026ರ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಬೆಂಗಳೂರಿನ ಐತಿಹಾಸಿಕ ವಿಕ್ಟೋರಿಯಾ ಆಸ್ಪತ್ರೆಯನ್ನು ಇನ್ನು ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಮರುನಾಮಕರಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ವೈದ್ಯಕೀಯ ಸೌಲಭ್ಯ ಹೆಚ್ಚಿಸುವ ನಿಟ್ಟಿನಲ್ಲಿ ಕಾರವಾರ, ಯಾದಗಿರಿಯಲ್ಲಿ ತಲಾ 100 ಕೋಟಿ ರೂಪಾಯಿ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸುವ ಘೋಷಣೆ ಮಾಡಿದ್ದಾರೆ. ವಿಜಯಪುರ ಹಾಗೂ ಕೋಲಾರದಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ಡಿಪಿಆರ್ ನಿರ್ಮಿಸಲು ಸರ್ಕಾರ ಮುಂದಾಗಿದೆ. ವಿಜಯನಗರ ಹಾಗೂ ಕೊಪ್ಪಳದಲ್ಲಿ ಕ್ಯಾನ್ಸರ್ ಆರೈಕೆ ಕೇಂದ್ರ ಸ್ಥಾಪನೆಗೂ ಸರ್ಕಾರ ಮುಂದಾಗಿದೆ.
ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆ ಹಾಗೂ ಕಲಬುರಗಿಯ ವೈದ್ಯಕೀಯ ಕಾಲೇಜಿನಲ್ಲಿ ಐವಿಎಫ್ ಕೇಂದ್ರ ಸ್ಥಾಪನೆಗೆ ತಲಾ 1 ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ. ಮೈಸೂರಿನ 400 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ಆಸ್ಪತ್ರೆಯನ್ನು 600 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ 180 ಕೋಟಿ ರೂಪಾಯಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಜೆಟ್‌ನಲ್ಲಿ ಘೋಷಿಸಿದ್ದಾರೆ.
ಟೈಪ್-1 ಮಧುಮೇಹದಿಂದ ಬಳಲುತ್ತಿರುವ 18 ವರ್ಷ ವಯಸ್ಸಿನವರೆಗಿನ ಮಕ್ಕಳ ಆರೋಗ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಉಚಿತ ಇನ್ಸುಲಿನ್ ಪೆನ್ ನೀಡಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಬೇಡಿಕೆ ಇರುವ 50 ಕೇಂದ್ರಗಳಲ್ಲಿ 150 ಹಾಸಿಗೆ ಸಾಮರ್ಥ್ಯ ಹೆಚ್ಚಿಸುವ ಮೂಲಕ ವಾರ್ಷಿಕವಾಗಿ 1.35 ಲಕ್ಷ ಡಯಾಲಿಸಿಸ್ ಸೇವೆ. ಹಾಗೂ ಇದಕ್ಕಾಗಿ 20 ಕೋಟಿ ರೂಪಾಯಿ ಅನುದಾನವನ್ನು ಮೀಸಲಿಡಲು ನಿರ್ಧರಿಸಲಾಗಿದೆ.
ದಾವಣಗೆರೆ ತಾಲ್ಲೂಕಿನ ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಣ. ಇಸ್ಕಾನ್ ಮೂಲಕ ರೋಗಿಗಳಿಗೆ ಆಹಾರ ಪೂರೈಕೆಯ ಯಶಸ್ವಿ ಮಾದರಿಯನ್ನು ರಾಜ್ಯದ ಆಯ್ದ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಿಗೆ ವಿಸ್ತರಣೆ, ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳ ಆಯ್ದ ಆಯುಷ್ ಆಸ್ಪತ್ರೆಗಳಲ್ಲಿ ಪಂಚಕರ್ಮ ಘಟಕಗಳನ್ನು ಸ್ವಾವಲಂಬಿ ಮಾದರಿಯಲ್ಲಿ ಸ್ಥಾಪನೆಗೆ ನಿರ್ಧರಿಸಲಾಗಿದೆ. ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 2 ಸಾವಿರದ 500 ಹುದ್ದೆಗಳ ಭರ್ತಿಗೂ ಸರ್ಕಾರ ತೀರ್ಮಾನಿಸಿದೆ.
ಮೇಕೆದಾಟು ಯೋಜನೆಯ ಪರಿಷ್ಕೃತ ವಿಸ್ತೃತ ಯೋಜನಾ ವರದಿಯನ್ನು ಶೀಘ್ರವೇ ಸಿದ್ಧಪಡಿಸಿ ಅನುಮೋದನೆಗೆ ಹಾಗೂ ಅರಣ್ಯ ಪ್ರದೇಶದ ಬಳಕೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಆಯ-ವ್ಯಯದಲ್ಲಿ ನಿರ್ಧರಿಸಲಾಗಿದೆ.
ಎರಡನೇ ಹಂತದಲ್ಲಿ ಬಾಕಿಯಿರುವ 18.73 ಕಿಲೋಮೀಟರ್ ಉದ್ದದ ಕಾಲುವೆ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಹೆಚ್ಚುವರಿ ನೀರನ್ನು ಸಂಗ್ರಹಿಸಿ ಸದ್ಭಳಕೆ ಮಾಡಿಕೊಳ್ಳಲು ಕೊರಟಗೆರೆ ತಾಲೂಕಿನ ವಡೇರ ಹಳ್ಳಿ ಸಮೀಪ 1.2 ಟಿಎಂಸಿ ಸಾಮರ್ಥ್ಯದ ಸಮತೋಲನಾ ಜಲಾಶಯ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ. ಉತ್ತರಕರ್ನಾಟಕದ ಅಲಮಟ್ಟಿ ಅಣೆಕಟ್ಟೆಯನ್ನು 519.6 ಮೀಟರ್ ನಿಂದ 524.256 ಮೀಟರ್ ಎತ್ತರಿಸುವ ಕಾಮಗಾರಿಯಿಂದ ಮುಳುಗಡೆಯಾಗುವ ಜಮೀನಿಗೆ ಪರಿಹಾರ ನೀಡಲು ದರ ಪರಿಷ್ಕರಿಸಲಾಗಿದೆ ಎಂದು ಬಜೆಟ್‌ನಲ್ಲಿ ಮುಖ್ಯಮಂತ್ರಿ ತಿಳಿಸಿದ್ದಾರೆ.
ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಆಯವ್ಯಯದಲ್ಲಿ ಹಲವು ಯೋಜನೆಗಳನ್ನು ಘೋಷಿಸಲಾಗಿದೆ. ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ ಜಾರಿಗೆ 100 ಕೋಟಿ ರೂಪಾಯಿ, ಭತ್ತದ ಕೃಷಿಯಲ್ಲಿ ನೀರಿನ ಬಳಕೆಯ ದಕ್ಷತೆಗೆ ಪರ್ಯಾಯ ತೇವ ಒಣಗಿಸುವ ವಿಧಾನಗಳಿಗೆ ಉತ್ತೇಜನ, ಕೋಲಾರದಲ್ಲಿ ರೈತ ಮಾಲ್‌ಗಳ ಸ್ಥಾಪನೆ, ಬೆಳೆಗಳಲ್ಲಿ ಕೀಟ ಹಾಗೂ ರೋಗಗಳ ನಿಯಂತ್ರಣಕ್ಕೆ ಸಸ್ಯ ಸಂಜೀವಿನಿ ಯೋಜನೆ ಜಾರಿಗೆ ತರಲು ನಿರ್ಧರಿಸಲಾಗಿದೆ. ಉತ್ತರ ಕರ್ನಾಟಕದಲ್ಲಿ ಬೆಳೆಯುವ ರೇಷ್ಮೆಗೂಡುಗಳನ್ನು ಎಲ್ಲಾ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಪ್ರತಿ ಕೆ.ಜಿ. ಗೂಡಿನ ಸಾಗಾಣಿಕಾ ವೆಚ್ಚ 20 ರೂಪಾಯಿಗೆ ಹೆಚ್ಚಳ, ರಾಮನಗರ, ಶಿಡ್ಲಘಟ್ಟ, ಹಾವೇರಿ, ತಾಂಡವಪುರ ಹಾಗೂ ಕಲಬುರಗಿಯಲ್ಲಿ ಸಿಲ್ಕ್ ಪಾರ್ಕ್‌ಗಳ ಸ್ಥಾಪಿಸುವುದಾಗಿ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ಶಾಲಾ ಕಾಲೇಜುಗಳಲ್ಲಿ ಖಾಲಿಯಿರುವ 15 ಸಾವಿರ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ. ಇದರೊಂದಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್ ಕಾಲೇಜುಗಳು, ಪಾಲಿಟೆಕ್ನಿಕ್ ಕಾಲೇಜುಗಳು ಮತ್ತು ಯುವಿಸಿವಿ ವಿಶ್ವವಿದ್ಯಾಲಯದಲ್ಲಿ ಒಟ್ಟಾರೆ 2 ಸಾವಿರ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಲಾಗಿದೆ.
ಪ್ರಸಕ್ತ ಸಾಲಿನಲ್ಲಿ 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 30 ಸಾವಿರ ಕೋಟಿ ಕೃಷಿ ಸಾಲ ವಿತರಿಸುವ ಗುರಿ ಹೊಂದಲಾಗಿದೆ. ಕೃಷಿ ಉತ್ಪನ್ನ, ಮಾರುಕಟ್ಟೆ ಸಮಿತಿಗಳ ಕಾರ್ಯ ಚಟುವಟಿಕೆಗಳನ್ನು ಸಂಪೂರ್ಣ ಡಿಜಿಟಲೀಕರಣಗೊಳಿಸಲು 10 ಕೋಟಿ ರೂಪಾಯಿ ವೆಚ್ಚದಲ್ಲಿ ಇಆರ್‌ಪಿ ವ್ಯವಸ್ಥೆ ಜಾರಿ, 1 ಸಾವಿರದ 628 ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಗಳ ಗಣಕೀರಣ, ಪ್ರತಿ ಜಿಲ್ಲೆಯಲ್ಲಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸ್ಥಾಪನೆಗೆ ಆರ್‌ಬಿಐಗೆ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿಯಲ್ಲಿ ನೀಡುತ್ತಿರುವ ಹೆಚ್ಚುವರಿ 5 ಕೆ.ಜಿ. ಅಕ್ಕಿ ಬದಲಾಗಿ, ತೊಗರಿಬೇಳೆ, ಸಕ್ಕರೆ, ಉಪ್ಪು, ಅಡಿಗೆ ಎಣ್ಣೆ ಹೊಳಗೊಂಡ ಇಂದಿರಾ ಆಹಾರ ಕಿಟ್ ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ 12 ನೂತನ ಪೊಲೀಸ್ ಠಾಣೆ ಸ್ಥಾಪನೆಗೂ ರಾಜ್ಯ ಸರ್ಕಾರ ಮುಂದಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಘೋಷಿಸಲಾಗಿದೆ. ಜಿಲ್ಲೆಯ ಮಾಣಿ ಹಾಗೂ ಸಜಿಪನಡು, ಮೈಸೂರಿನ ಉದಯಗಿರಿ, ಕೋಲಾರದ ನರಸಾಪುರ ಕೈಗಾರಿಕಾ ವಲಯ ಪೊಲೀಸ್ ಠಾಣೆ ಸೇರಿದಂತೆ ರಾಜ್ಯದಲ್ಲಿ ಹೊಸ 12 ಠಾಣೆಗಳ ಸ್ಥಾಪನೆ ಆಗಲಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಆಯವ್ಯಯದಲ್ಲಿ 100 ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ.
ಆಯವ್ಯಯದಲ್ಲಿ ರಾಜ್ಯ ಸಾರಿಗೆ ಇಲಾಖೆಗೂ ಭಾರೀ ಅನುದಾನ ಹಾಗೂ ಪ್ರಮುಖ ಯೋಜನೆಗಳನ್ನು ಘೋಷಿಸಲಾಗಿದೆ. ಶಕ್ತಿ ಯೋಜನೆಗೆ 5 ಸಾವಿರದ 300 ಕೋಟಿ ರೂಪಾಯಿ, ಸಾರಿಗೆ ಸಿಬ್ಬಂದಿ ವೇತನ ಬಾಕಿ ಪಾವತಿಗೆ 1 ಸಾವಿರದ 271 ಕೋಟಿ ರೂಪಾಯಿ, 1 ಸಾವಿರ ಡೀಸಲ್ ಬಸ್ ಖರೀದಿ, ಕರ್ನಾಟಕ ಎಲೆಕ್ಟ್ರಿಕ್ ಬಸ್ ಯೋಜನೆಗೆ 2 ಸಾವಿರ ಕೋಟಿ ರೂಪಾಯಿ, 4 ಸಾವಿರ ವಿದ್ಯುತ್ ಚಾಲಿತ ಬಸ್, ತರಿಕೆರೆಯಲ್ಲಿ ಬಸ್ ಡಿಪೋ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗಿದೆ.
ಜಿಎಸ್‌ಟಿ ಸಂಗ್ರಹಣೆಯಲ್ಲಿ ಪ್ರಸಕ್ತ ವರ್ಷ 10 ಸಾವಿರ ಕೋಟಿ ರೂಪಾಯಿ ಮತ್ತು ಮುಂದಿನ ವರ್ಷ 15 ಸಾವಿರ ಕೋಟಿ ರೂಪಾಯಿ ಕೊರತೆಯಾಗಲಿದೆ ಎಂದು ಅಂದಾಜಿಸಲಾಗಿದೆ. ರಾಜ್ಯದ ಒಟ್ಟು ಸಾಲ 8 ಲಕ್ಷದ 24 ಸಾವಿರದ 389 ಕೋಟಿ ರೂಪಾಯಿ ಎಂದು ಆಯ-ವ್ಯಯ ಮಂಡನೆ ವೇಳೆ ಮುಖ್ಯಮಂತ್ರಿ ಘೋಷಿಸಿದ್ದಾರೆ.
ಬಜೆಟ್‌ನಲ್ಲಿ ‘ಬ್ರ್ಯಾಂಡ್ ಬೆಂಗಳೂರು’ ಪರಿಕಲ್ಪನೆಗೆ 7 ಸಾವಿರ ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ. ರಸ್ತೆಗಳ ವೈಟ್ ಟಾಪಿಂಗ್, ಮೂಲಸೌಕರ್ಯ ಸುಧಾರಣೆ, ಸಂಚಾರ ದಟ್ಟಣೆ ನಿವಾರಣೆ, ಪಾದಚಾರಿ ಮಾರ್ಗಗಳ ಅಭಿವೃದ್ಧಿ ಹಾಗೂ ಕೆರೆಗಳ ಜೀರ್ಣೋದ್ಧಾರ ಸೇರಿದಂತೆ ರಾಜಧಾನಿಯ ಸಮಗ್ರ ಅಭಿವೃದ್ಧಿಗೆ ಬಜೆಟ್ ಬಲ ನೀಡಿದೆ. ಬೆಂಗಳೂರು ನಗರದಲ್ಲಿ ರಸ್ತೆ, ಮೂಲಸೌಕರ್ಯ, ಪಾದಚಾರಿ ಮಾರ್ಗ ಹಾಗೂ ಸಂಚಾರ ವ್ಯವಸ್ಥೆಯನ್ನು ಸುಧಾರಿಸುವ ಉದ್ದೇಶದಿಂದ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ. ನಗರದ ಐದು ನಗರ ಪಾಲಿಕೆಗಳಲ್ಲಿ 1 ಸಾವಿರದ 233 ಕೋಟಿ ರೂಪಾಯಿ ವೆಚ್ಚದಲ್ಲಿ ವಾರ್ಡ್ ಮಟ್ಟದ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. 1 ಸಾವಿರದ 700 ಕೋಟಿ ರೂಪಾಯಿ ವೆಚ್ಚದಲ್ಲಿ 158 ಕಿಲೋಮೀಟರ್ ಉದ್ದದ ರಸ್ತೆಗಳಿಗೆ ವೈಟ್ ಟಾಪಿಂಗ್ ಹಾಗೂ 1 ಸಾವಿರದ 936 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರಮುಖ ಮತ್ತು ಉಪ ಮುಖ್ಯ ರಸ್ತೆಗಳ ಅಭಿವೃದ್ಧಿ ಕೈಗೊಳ್ಳಲು ಸರ್ಕಾರ ಯೋಜನೆ ರೂಪಿಸಿದೆ.
ನಗರದ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಕೆಆರ್ ಪುರಂ ಮೆಟ್ರೋ ನಿಲ್ದಾಣದವರೆಗೆ ಹೊರವರ್ತುಲ ರಸ್ತೆ ಅಭಿವೃದ್ಧಿಗೆ 450 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ. ಜೊತೆಗೆ ರಾಜಕಾಲುವೆಗಳ ಮೇಲ್ದರ್ಜೆಗೇರಿಸುವುದು ಮತ್ತು ಕೆರೆಗಳ ಅಭಿವೃದ್ಧಿಗಾಗಿ 273 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಬೆಂಗಳೂರಿನ 450 ಕಿಲೋಮೀಟರ್‌ಗೂ ಹೆಚ್ಚು ರಸ್ತೆಗೆ ವೈಟ್ ಟಾಪಿಂಗ್ ಮಾಡುವ ಯೋಜನೆಯೂ ಪ್ರಮುಖವಾಗಿದೆ. ಇದಕ್ಕಾಗಿ ಸುಮಾರು 3ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗಿದೆ.
ನಗರದ ಪಾದಚಾರಿಗಳ ಸುರಕ್ಷತೆ ಮತ್ತು ಸೌಲಭ್ಯ ಹೆಚ್ಚಿಸಲು 500 ಕಿಲೋಮೀಟರ್ ಉದ್ದದ ಪಾದಚಾರಿ ಮಾರ್ಗಗಳನ್ನು ಮೇಲ್ದರ್ಜೆಗೇರಿಸುವ ಯೋಜನೆ ರೂಪಿಸಲಾಗಿದೆ. ಇದೇ ವೇಳೆ ಸಂಚಾರ ಸುಗಮತೆಗೆ ಹಾಗೂ ಸುರಕ್ಷತೆಗೆ 100 ಸ್ಕೈವಾಕ್‌ಗಳನ್ನು ನಿರ್ಮಿಸುವುದಕ್ಕೂ ಸರ್ಕಾರ ನಿರ್ಧರಿಸಿದೆ. ಇದರ ಜೊತೆಗೆ ನಗರ ಸೌಂದರ್ಯ ಹೆಚ್ಚಳಕ್ಕೂ ಒತ್ತು ನೀಡಲಾಗಿದ್ದು, 175 ಪ್ರಮುಖ ಜಂಕ್ಷನ್‌ಗಳನ್ನು ಆಧುನಿಕವಾಗಿ ಅಭಿವೃದ್ಧಿಪಡಿಸುವ ಯೋಜನೆ ಕೂಡ ಬಜೆಟ್‌ನಲ್ಲಿ ಪ್ರಕಟವಾಗಿದೆ.
ಬೆಂಗಳೂರು ಹೊರವಲಯದ ವಸತಿ ಪ್ರದೇಶಗಳಲ್ಲಿ ಸೆರೆಹಿಡಿದ ಚಿರತೆಗಳ ಪುನರ್ವಸತಿಗಾಗಿ ಬನ್ನೇರುಘಟ್ಟದಲ್ಲಿ 5 ಕೋಟಿ ರೂಪಾಯಿ ವೆಚ್ಚದಲ್ಲಿ ಚಿರತೆ ಪುನರ್ವಸತಿ ಕೇಂದ್ರ ಸ್ಥಾಪನೆ ಘೋಷಿಸಲಾಗಿದೆ. ಬೆಂಗಳೂರಿನ ಮಾದಪ್ಪನಹಳ್ಳಿಯಲ್ಲಿ 153 ಎಕರೆ ಪ್ರದೇಶದಲ್ಲಿ ಬಸವಣ್ಣ ಜೈವಿಕ ಉದ್ಯಾನ ನಿರ್ಮಾಣ ಮಾಡುವ ಬಗ್ಗೆ ಘೋಷಣೆ ಮಾಡಲಾಗಿದೆ.
