ಸಮಗ್ರ ಸುದ್ದಿ

ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿನ ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗೆ ಕ್ರಮ – ಸಚಿವ ಡಾ.ಎಂ.ಸಿ.ಸುಧಾಕರ್

Share

ಬೆಂಗಳೂರು:ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವ ಮತ್ತು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ದೃಷ್ಟಿಯಿಂದ, ರಾಜ್ಯದ ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದರು.

ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಗೋವಿಂದರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇತ್ತೀಚಿನ ಬಜೆಟ್ ಭಾಷಣದಲ್ಲಿ ಘೋಷಿಸಿರುವಂತೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್ ಕಾಲೇಜುಗಳು, ಪಾಲಿಟೆಕ್ನಿಕ್‍ಗಳು ಮತ್ತು ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದಲ್ಲಿ (UVCE) ಒಟ್ಟಾರೆ 2,000 ಬೋಧಕ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲು ಸರ್ಕಾರ ಅನುಮತಿ ನೀಡಿದೆ. ಇದರೊಂದಿಗೆ ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ 1,000 ಬೋಧಕ ಹುದ್ದೆಗಳನ್ನು ತರ್ಕಬದ್ಧಗೊಳಿಸಿ, ಹಂತ ಹಂತವಾಗಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಉನ್ನತ ಶಿಕ್ಷಣ ಇಲಾಖೆಯ ಅಂಕಿ ಅಂಶಗಳ ಪ್ರಕಾರ, ರಾಜ್ಯದ 32 ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ ಬೋಧಕ ಮತ್ತು ಬೋಧಕೇತರ ಹುದ್ದೆಗಳು ಖಾಲಿ ಇರುವುದು ಸರ್ಕಾರದ ಗಮನದಲ್ಲಿದೆ. ಈ ಹುದ್ದೆಗಳ ಭರ್ತಿಯಿಂದ ಶಿಕ್ಷಣದ ಗುಣಮಟ್ಟ ಸುಧಾರಣೆಯಾಗಲಿದೆ ಎಂಬುದು ಸರ್ಕಾರದ ಆಶಯ. ಎಲ್ಲಾ ನೇಮಕಾತಿ ಪ್ರಕ್ರಿಯೆಗಳನ್ನು ಸರ್ಕಾರವು ನಿಗದಿಪಡಿಸಿದ ನಿಯಮಾವಳಿಗಳಂತೆ, ಪಾರದರ್ಶಕವಾಗಿ ನಡೆಸಲು ಸೂಚನೆ ನೀಡಲಾಗಿದೆ.

ಖಾಲಿ ಇರುವ ಹುದ್ದೆಗಳ ಪಟ್ಟಿಯನ್ನು ಪರಿಶೀಲಿಸಿ, ಆರ್ಥಿಕ ಇಲಾಖೆಯ ಸಹಮತಿಯೊಂದಿಗೆ ನೇಮಕಾತಿ ಅಧಿಸೂಚನೆಗಳನ್ನು ಹೊರಡಿಸಲಾಗುತ್ತದೆ. ಈ ಹಿಂದೆ ತಿಳಿಸಿದಂತೆ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಕೊರತೆಯಿಂದ ಕಲಿಕಾ ಪ್ರಕ್ರಿಯೆಗೆ ಯಾವುದೇ ಅಡಚಣೆಯಾಗದಂತೆ ನೋಡಿಕೊಳ್ಳಲು ಸರ್ಕಾರ ಶ್ರಮಿಸುತ್ತಿದೆ. ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವುದರ ಜೊತೆಗೆ ಖಾಯಂ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ತಿಳಿಸಿದರು.


Share

You cannot copy content of this page