ಬೆಂಗಳೂರು, ನ. 26: ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಖಗೋಳ ವಿಜ್ಞಾನದ ಕೌತುಕವನ್ನು ಬಿತ್ತಿ, ವಿಜ್ಞಾನ ಕಲಿಕೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ “ಶಾಲೆಯ ಅಂಗಳದಲ್ಲಿ ತಾರಾಲಯ” (ಡಿಜಿಟಲ್ ಮೊಬೈಲ್ ಪ್ಲಾನೆಟೇರಿಯಂ) ಯೋಜನೆಗೆ ಹೊಸ ರೂಪ ನೀಡಲಾಗಿದ್ದು, ನಾಳೆ ವಿಧಾನಸೌಧದ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಯೋಜನೆಗೆ ವಿಧ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ.
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೊಮೋಷನ್ ಸೊಸೈಟಿ ಅಡಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಈ ಯೋಜನೆಯು ನಗರ ಮತ್ತು ಗ್ರಾಮೀಣ ಭಾಗದ ಶೈಕ್ಷಣಿಕ ಅಂತರವನ್ನು ಕಡಿಮೆ ಮಾಡುವಲ್ಲಿ ಮಹತ್ವದ ಪಾತ್ರ ವಹಿಸಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಅವರ ನೇತೃತ್ವದಲ್ಲಿ, ಆಧುನಿಕ ತಂತ್ರಜ್ಞಾನದ ಸ್ಪರ್ಶದೊಂದಿಗೆ ಈ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುತ್ತಿದೆ.
*ಏನಿದು ಯೋಜನೆ?*
ನಗರಗಳಿಗೆ ಸೀಮಿತವಾಗಿದ್ದ ಪ್ಲಾನೆಟೇರಿಯಂ ಅನುಭವದಿಂದ ಗ್ರಾಮೀಣ ವಿದ್ಯಾರ್ಥಿಗಳು ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ಯೋಜನೆ ರೂಪಿತವಾಗಿದೆ. ಸುಸಜ್ಜಿತ ವಾಹನಗಳಲ್ಲಿ 5 ಮೀಟರ್ ಗಾತ್ರದ ಗುಂಬಜ್ (Dome), 360-ಡಿಗ್ರಿ ಫಿಶ್ ಐ ಲೆನ್ಸ್ ಪ್ರೊಜೆಕ್ಟರ್, ಹವಾ ನಿಯಂತ್ರಣ ವ್ಯವಸ್ಥೆ ಮತ್ತು ಅತ್ಯಾಧುನಿಕ ಧ್ವನಿವರ್ಧಕಗಳನ್ನು ಅಳವಡಿಸಲಾಗಿರುತ್ತದೆ. ಮಕ್ಕಳು ಶಾಲೆಯ ಅಂಗಳದಲ್ಲೇ ಕುಳಿತು ಬ್ರಹ್ಮಾಂಡದ ಅದ್ಭುತಗಳನ್ನು ವೀಕ್ಷಿಸುವ ಅಪರೂಪದ ಅವಕಾಶವನ್ನು ಇದು ಕಲ್ಪಿಸಲಿದೆ.
