ಸಮಗ್ರ ಸುದ್ದಿ

ರಾಜ್ಯದ ಕೊಳಚೆ ಪ್ರದೇಶಗಳ ಸಮಗ್ರ ಅಭಿವೃದ್ಧಿ ಹಾಗೂ ವಸತಿ ಸೌಲಭ್ಯ ಒದಗಿಸಲು ಅಗತ್ಯ ಕ್ರಮ : ಸಚಿವ ಜಮೀರ್ ಅಹಮದ್ ಖಾನ್

Share

ಬೆಂಗಳೂರು:ಕರ್ನಾಟಕ ರಾಜ್ಯದಾದ್ಯಂತ ಇರುವ ಕೊಳಚೆ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಜೊತೆಗೆ, ಅವರಿಗೆ ಸುಸಜ್ಜಿತ ಮನೆಗಳನ್ನು ನಿರ್ಮಿಸಿಕೊಡುವ ಮೂಲಕ ಅವರ ಜೀವನಮಟ್ಟವನ್ನು ಸುಧಾರಿಸಲು ಸರ್ಕಾರವು ವಿಶೇಷ ಆದ್ಯತೆ ನೀಡುತ್ತಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಬಿ.ಜಡ್. ಜಮೀರ್ ಅಹಮದ್ ಖಾನ್ ಅವರು ತಿಳಿಸಿದರು.

ಬುಧವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಡಾ.ಕೆ. ಗೋವಿಂದರಾಜ್ ಅವರ ಚುಕ್ಕೆ ಗುರುತಿನ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಯ ಮೂಲಕ ಹಮ್ಮಿಕೊಳ್ಳಲಾಗಿರುವ ವಿವಿಧ ಜನಪರ ಯೋಜನೆಗಳ ವಿವರಗಳನ್ನು ಹಂಚಿಕೊಂಡರು.

ಕೊಳಚೆ ಪ್ರದೇಶಗಳ ಗುರುತಿಸುವಿಕೆ ಮತ್ತು ಜನಸಂಖ್ಯೆ:

ರಾಜ್ಯದಲ್ಲಿ ಈವರೆಗೆ ಒಟ್ಟು 3,025 ಕೊಳಚೆ ಪ್ರದೇಶಗಳನ್ನು ಗುರುತಿಸಲಾಗಿದ್ದು, ಕಾನೂನಾತ್ಮಕವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಈ ಪೈಕಿ 2,866 ಪ್ರದೇಶಗಳನ್ನು ಮಂಡಳಿಯ ವ್ಯಾಪ್ತಿಗೆ ಸೇರಿಸಿ ಘೋಷಣೆ ಮಾಡಲಾಗಿದೆ. 2011ರ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ಅನ್ವಯ, ಈ ಪ್ರದೇಶಗಳಲ್ಲಿ ಅಂದಾಜು 40.50 ಲಕ್ಷ ಜನಸಂಖ್ಯೆಯು ವಾಸಿಸುತ್ತಿದೆ ಎಂದು ಅಂದಾಜಿಸಲಾಗಿದೆ ಎಂದರು.

ಮೂಲಭೂತ ಸೌಕರ್ಯಗಳ ಅಭಿವೃದ್ಧಿ:

ಕಳೆದ ಏಳು ವರ್ಷಗಳ ಅವಧಿಯಲ್ಲಿ ರಾಜ್ಯದ 1,210 ಕೊಳಚೆ ಪ್ರದೇಶಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರವು 408.28 ಕೋಟಿ ರೂ. ಗಳ ವೆಚ್ಚದ ಯೋಜನೆಗಳನ್ನು ರೂಪಿಸಿದೆ. ಇದರ ಅಡಿಯಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು, ಬೀದಿ ದೀಪ ಹಾಗೂ ಸಮುದಾಯ ಭವನಗಳ ನಿರ್ಮಾಣದಂತಹ ಒಟ್ಟು 794 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಕಳೆದ ಐದು ವರ್ಷಗಳಲ್ಲಿ (2020-21 ರಿಂದ 2024-25) ಈ ಕಾಮಗಾರಿಗಳಿಗಾಗಿ ಮಾತ್ರವೇ ಒಟ್ಟು 334.61 ಕೋಟಿ ರೂ. ಹಣವನ್ನು ವ್ಯಯ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ವಸತಿ ಯೋಜನೆಗಳ ಸಾಧನೆ :

ಹಿಂದಿನ ಯೋಜನೆಗಳಾದ ಬಿ.ಎಸ್.ಯು.ಪಿ, ಐ.ಹೆಚ್.ಎಸ್.ಡಿ.ಪಿ ಮತ್ತು ರಾಜೀವ್ ಆವಾಸ್ ಯೋಜನೆಯಡಿ ಒಟ್ಟು 60,449 ಮನೆಗಳನ್ನು ನಿರ್ಮಿಸಲಾಗಿದ್ದು, ಈ ಪೈಕಿ 59,734 ಮನೆಗಳನ್ನು ಈಗಾಗಲೇ ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದೆ. ಕೇವಲ 715 ಮನೆಗಳು ಮಾತ್ರ ಹಂಚಿಕೆ ಪ್ರಕ್ರಿಯೆಯಲ್ಲಿ ಬಾಕಿ ಇವೆ.ಪ್ರಸ್ತುತ, ಪ್ರಧಾನ ಮಂತ್ರಿ ಆವಾಸ್ ಯೋಜನೆ ಹಾಗೂ ರಾಜ್ಯ ಸರ್ಕಾರದ ವಸತಿ ಯೋಜನೆಗಳ ಸಂಯೋಜನೆಯಲ್ಲಿ ಒಟ್ಟು 1,80,253 ಮನೆಗಳ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿದೆ. ಈ ಬೃಹತ್ ಯೋಜನೆಯಲ್ಲಿ ಈಗಾಗಲೇ 86,651 ಮನೆಗಳು ಪೂರ್ಣಗೊಂಡಿದ್ದು, ಇನ್ನುಳಿದ ಮನೆಗಳು ನಿರ್ಮಾಣದ ವಿವಿಧ ಹಂತಗಳಲ್ಲಿವೆ.

ಪೂರ್ಣಗೊಂಡಿರುವ ಮನೆಗಳ ಪೈಕಿ ಮಾರ್ಚ್ 2024ರೊಳಗೆ 36,789 ಮನೆಗಳನ್ನು ಹಾಗೂ ಜನವರಿ 2026ರಲ್ಲಿ 42,345 ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಾಗಿದೆ. ಬಾಕಿ ಇರುವ ಸುಮಾರು 7,517 ಮನೆಗಳನ್ನು ಸೆಪ್ಟೆಂಬರ್ 2026ರೊಳಗೆ ಪೂರ್ಣಗೊಳಿಸಿ ಹಂಚಿಕೆ ಮಾಡಲು ಕಾಲಮಿತಿ ನಿಗದಿಪಡಿಸಲಾಗಿದೆ. ವಿಶೇಷವಾಗಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ 39 ಕೊಳಚೆ ಪ್ರದೇಶಗಳನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಹಸ್ತಾಂತರಿಸುವ ಮೂಲಕ ಮಾದರಿ ಕಾರ್ಯ ಮಾಡಲಾಗಿದೆ.

ಕೊಳಚೆ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಶಿಕ್ಷಣ, ಮಾಹಿತಿ ಮತ್ತು ಸಂವಹನ ಕಾರ್ಯಕ್ರಮಗಳ ಮೂಲಕ ಸಾಮಾಜಿಕ ಅರಿವು ಮೂಡಿಸಿ, ಅವರನ್ನು ಮುಖ್ಯವಾಹಿನಿಗೆ ತರುವುದು ಮಂಡಳಿಯ ಮುಖ್ಯ ಉದ್ದೇಶವಾಗಿದೆ ಎಂದು ಸಚಿವರು ತಿಳಿಸಿದರು.


Share

You cannot copy content of this page