ಸಮಗ್ರ ಸುದ್ದಿ

ತುಂಗಭದ್ರಾ ಜಲಾಶಯಕ್ಕೆ ಸಣ್ಣ ನೀರಾವರಿ ಸಚಿವರ ಭೇಟಿ: ಕ್ರಸ್ಟ್‌ ಗೇಟ್‌ಗಳ ಅಳವಡಿಕೆ ಕಾಮಗಾರಿಯ ಪರಿವೀಕ್ಷಣೆ |ಎಲ್ಲಾ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಮೇ ಅಂತ್ಯದೊಳಗೆ ಪೂರ್ಣ- ಎನ್.ಎಸ್. ಭೋಸರಾಜು

Share

ಕೊಪ್ಪಳ: ರೈತರ ಜೀವನಾಡಿ ತುಂಗಭದ್ರಾ ಜಲಾಶಯದ ಎಲ್ಲಾ 33 ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯವನ್ನು ಮೇ ಅಂತ್ಯದೊಳಗೆ ಪೂರ್ಣಗೊಳಿಸಿ, ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ತಂತ್ರಜ್ಞಾನ ಸಚಿವರು ಹಾಗೂ ವಿಧಾನ ಪರಿಷತ್ ಸಭಾ ನಾಯಕರಾದ ಎನ್.ಎಸ್. ಭೋಸರಾಜು ತಿಳಿಸಿದರು.

ಅವರು ಶುಕ್ರವಾರ ಕೊಪ್ಪಳ ಜಿಲ್ಲೆಯ ಮುನಿರಾಬಾದ್ ತುಂಗಭದ್ರಾ ಜಲಾಶಯದ ಆಣೆಕಟ್ಟಿನ ನೂತನ ಕ್ರಸ್ಟ್‌ ಗೇಟ್‌ಗಳ ಅಳವಡಿಕೆ ಕಾಮಗಾರಿಯ ಪರಿವೀಕ್ಷಣೆ ಮಾಡಿದ ನಂತರ ಪತ್ರಕರ್ತರಿಗೆ ಮಾಹಿತಿ ನೀಡಿ ಮಾತನಾಡಿದರು.

ಈಗಾಗಲೇ ತುಂಗಭದ್ರಾ ಜಲಾಶಯದ 18 ನೂತನ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಪೂರ್ಣಗೊಂಡಿದ್ದು, 5 ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ. ಮಾರ್ಚ್ ಅಂತ್ಯದ ವೇಳೆಗೆ ಒಟ್ಟು 23 ಗೇಟ್‌ಗಳ ಕೆಲಸ ಮುಗಿಯುವ ನಿರೀಕ್ಷೆಯಿದೆ. ಎಕ್ಸ್ಪರ್ಟ್ ಟೀಮ್ ಮತ್ತು ಚೀಫ್ ಎಂಜಿನಿಯರ್‌ಗಳ ಪ್ರಕಾರ, ಗೇಟ್ ಬದಲಾವಣೆಯ ಸಮಯದಲ್ಲಿ ಹಳೆಯ ಅಣೆಕಟ್ಟಿನ ರಚನೆಗೆ ಯಾವುದೇ ತೊಂದರೆಯಾಗಿಲ್ಲ. ಏಪ್ರಿಲ್ ತಿಂಗಳಿನಲ್ಲಿ ಉಳಿದ 10 ಗೇಟ್‌ಗಳನ್ನು ಅಳವಡಿಸಿ, ಮೇ ಅಂತ್ಯದೊಳಗೆ ಎಲ್ಲಾ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾಮಗಾರಿ ಪೂರ್ಣಗೊಳ್ಳುವ ಭರವಸೆ ಇದೆ‌. ಕಾಮಗಾರಿಯು ನಿರೀಕ್ಷಿತ ಸಮಯಕ್ಕಿಂತ ವೇಗವಾಗಿ ಸಾಗುತ್ತಿದ್ದು, ಜೂನ್‌ನಲ್ಲಿ ಆರಂಭವಾಗುವ ಮುಂಗಾರು ಮಳೆಗಾಲದ ವೇಳೆಗೆ ಜಲಾಶಯವು ಸಂಪೂರ್ಣ ಸಿದ್ಧವಾಗಲಿದೆ ಎಂಬ ವಿಶ್ವಾಸವಿದೆ ಎಂದರು.

ತುಂಗಭದ್ರಾ ಜಲಾಶಯದಲ್ಲಿ ತುಂಬಿರುವ ಹೂಳಿನ ಸಮಸ್ಯೆಗೆ ಪರಿಹಾರವಾಗಿ ‘ನವಲಿ’ ಯೋಜನೆಯ ಪ್ರಸ್ತಾವನೆಯನ್ನು ಮಂಡಳಿ ಮತ್ತು ಸಂಬಂಧಿತ ರಾಜ್ಯ ಸರ್ಕಾರಗಳಿಗೆ ಕಳುಹಿಸಲಾಗಿದೆ. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೂ ಸಹ ಪತ್ರ ವ್ಯವಹಾರ ನಡೆಸಲಾಗಿದೆ. ಸಂಬಂದಪಟ್ಟ ಅಧಿಕಾರಿಗಳ ಮಟ್ಟದಲ್ಲಿ ಮಾತುಕತೆ ನಡೆಯುತ್ತಿದೆ. ತೆಲಂಗಾಣ ಸರ್ಕಾರದೊಂದಿಗೂ ಸಮನ್ವಯ ಸಾಧಿಸಲು ಪ್ರಯತ್ನಿಸಲಾಗುತ್ತಿದ್ದು, ವಿವಿಧ ತಾಂತ್ರಿಕ ಕಾರಣಗಳಿಂದ ವಿಳಂಬವಾಗುತ್ತಿದೆ. ಈ ತಾಂತ್ರಿಕ ಸಮಸ್ಯೆಗಳು ಬಗೆಹರಿದ ನಂತರ ಪೂರ್ಣ ಸಹಕಾರ ಸಿಗುವ ನಿರೀಕ್ಷೆಯಿದೆ.

ಈ ಬಗ್ಗೆ ನಮ್ಮ ರಾಜ್ಯದ ವಿವಿಧ ಚುನಾಯಿತ ಪ್ರತಿನಿಧಿಗಳ ನಿಯೋಗವು ನವದೆಹಲಿಯಲ್ಲಿ ಜಲಶಕ್ತಿ ಸಚಿವಾಲಯದ ಅಧಿಕಾರಿಗಳು ಮತ್ತು ವಿವಿಧ ರಾಜ್ಯಗಳ ಸಂಸದರೊಂದಿಗೆ ಮಹತ್ವದ ಚರ್ಚೆ ನಡೆಸಲಾಗಿದೆ. ಕೇಂದ್ರ ಸಚಿವರು ಮತ್ತು ಅಧಿಕಾರಿಗಳು ಕರ್ನಾಟಕದ ನೀರಾವರಿ ಯೋಜನೆಗಳ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಚುನಾವಣಾ ನೀತಿ ಸಂಹಿತೆಯ ಪ್ರಕ್ರಿಯೆಗಳ ನಂತರ ಮತ್ತೊಂದು ಸುತ್ತಿನ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಅಧ್ಯಕ್ಷರು ಹಾಗೂ ಮಸ್ಕಿ ಶಾಸಕರಾದ ಬಸವನಗೌಡ ತುರುವಿಹಾಳ, ಕೊಪ್ಪಳ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಅಪರ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಆರ್.ಹೇಮಂತ್ ಕುಮಾರ್, ಟಿಬಿ ಬೋರ್ಡ್ ಹಾಗೂ ಕೆ.ಎನ್.ಎನ್.ಎಲ್. ಅಧಿಕಾರಿಗಳಾದ ಮುಖ್ಯ ಇಂಜಿನಿಯರ್ ಶ್ರೀನಿವಾಸ ಮಲ್ಲಿಗಿವಾಡ, ಎಇಇ ಧರ್ಮರಾಜ್ ಹಾಗೂ ಜ್ಞಾನೇಶ್ವರ, ಸೆಕ್ಷನ್ ಅಧಿಕಾರಿಗಳಾದ ಜಿ. ಕಿರಣ, ಪಂಪಾಪತಿ ಡಿ.ಕೆ. ಮತ್ತು ಹುಲಿರಾಜ್ ಸೇರಿದಂತೆ ಇತರೆ ಜನಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.


Share

You cannot copy content of this page