ಸಮಗ್ರ ಸುದ್ದಿ

ಬೇಸಿಗೆಯಲ್ಲಿ ನೀರಿನ ಅಭಾವ ನೀಗಲು ಪಿಡಿಒಗಳ ಜೊತೆ ಸಭೆ ನಡೆಸಿ: ಜಿಲ್ಲಾ ಪಂಚಾಯತಿ ಸಿಇಒಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

Share

ಬೆಂಗಳೂರು: ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರಿನ ಅಭಾವ ಉಂಟಾದ ಸಂದರ್ಭಗಳಲ್ಲಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಮುಂದಿನ ಮೂರು ತಿಂಗಳುಗಳ ಕಾಲ ಪ್ರತಿ 2ನೇ ಹಾಗೂ 4ನೇ ಸೋಮವಾರದಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಜೊತೆಯಲ್ಲಿ ಕಡ್ಡಾಯವಾಗಿ ಕುಡಿಯುವ ನೀರಿನ ಸಮಸ್ಯೆ ಕುರಿತ ವಸ್ತು ಸ್ಥಿತಿಯ ಬಗ್ಗೆ ಸಭೆ ನಡೆಸುವಂತೆ ಜಿಲ್ಲಾ ಪಂಚಾಯತಿ ಸಿಇಒಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ.

ಪ್ರತಿ 2ನೇ ಹಾಗೂ 4ನೇ ಮಂಗಳವಾರದಂದು ಪತ್ರಿಕಾ ಗೋಷ್ಠಿ ಕರೆದು ಜಿಲ್ಲೆಗಳಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಲು ಕೈಗೊಂಡ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿಯನ್ನು ನೀಡಲು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಕುಡಿಯುವ ನೀರಿನ ಅಭಾವ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಎಲ್ಲಾ ಜಿಲ್ಲಾ ಪಂಚಾಯಿತಿಗಳಲ್ಲಿ 24/7 ನಿಯಂತ್ರಣ ಕೊಠಡಿಗಳನ್ನು ತೆರೆದು, ಸಿಬ್ಬಂದಿಗಳನ್ನು ನಿಯೋಜಿಸಲು ಹಾಗೂ ತಾಲ್ಲೂಕು ಮಟ್ಟದಲ್ಲಿ ಕಾರ್ಯಾನಿರ್ವಾಹಕ ಅಧಿಕಾರಿಗಳ ಮುಖಾಂತರ ಕ್ಷಿಪ್ರ ಕಾರ್ಯಪಡೆಯನ್ನು ರಚಿಸಿ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ತಿಳಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿನ ನೀರಿನ ಮೂಲಗಳನ್ನು ಶೇ.100ರಷ್ಟು ಭೌತಿಕ ಪರಿಶೀಲನೆ ನಡೆಸಿ, ಕೊಳವೆಬಾವಿಗಳ ಸುತ್ತಮುತ್ತಲೂ ಯಾವುದೇ ಕಲುಷಿತ ನೀರು ಅಥವಾ ಚರಂಡಿ ನೀರು ನಿಲ್ಲದಂತೆ ಹಾಗೂ ಕಲುಷಿತ ನೀರು ಸರಾಗವಾಗಿ ಹರಿಯಲು ಸೂಕ್ತ ಚರಂಡಿ ವ್ಯವಸ್ಥೆಯನ್ನು ಕೈಗೊಂಡು, ಕೊಳವೆಬಾವಿ ಸುತ್ತ ಕಾಂಕ್ರೀಟ್ನಿಂದ ಕಟ್ಟೆಯನ್ನು ಕಟ್ಟಿ, ಕಲುಷಿತ ನೀರು ಕೊಳವೆಬಾವಿಗೆ ಸೇರದಂತೆ ಮುಂಜಾಗ್ರತೆ ವಹಿಸಲು ಅಧಿಕಾರಿಗಳಿಗೆ ಕಟ್ಟೆಚ್ಚರ ನೀಡಲಾಗಿದೆ ಎಂದು ಹೇಳಿದ್ದಾರೆ.

ನೀರಿನ ಮೂಲಗಳ ಸುರಕ್ಷತೆಯನ್ನು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡಲು ಹಾಗೂ ಕುಡಿಯುವ ನೀರಿನ ಅಭಾವ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಗ್ರಾಮಸ್ಮರಿಗೆ ಅಗತ್ಯ ಜಾಗೃತಿ ಮೂಡಿಸಲು ಸಹ ಸೂಚನೆಗಳನ್ನು ನಿಡಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹಾಲಿ ಇರುವ ಜಲಮೂಲಗಳು ಬತ್ತಿಹೋಗಿರುವುದರಿಂದ ಹಾಗೂ ಕೊಳವೆ ಬಾವಿಗಳ ಇಳುವರಿ ಕಡಿಮೆಯಾಗುತ್ತಿರುವುದರಿಂದ ರಾಜ್ಯದ ಕೆಲವೊಂದು ಜಿಲ್ಲೆಗಳ ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿರುತ್ತದೆ. ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರಿನ ಅಭಾವ ಎದುರಾದಲ್ಲಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಈಗಾಗಲೇ ಅಧಿಕಾರಿಗಳಿಗೆ ತಿಳಿಸಲಾಗಿದೆ.


Share

You cannot copy content of this page