ಬೆಂಗಳೂರು:ರಾಜ್ಯದಲ್ಲಿ 16 ವರ್ಷದೊಳಗಿನ ಶಾಲಾ ವಿದ್ಯಾರ್ಥಿಗಳಿಗೆ ಸಾಮಾಜಿಕ ಜಾಲತಾಣಗಳನ್ನು ಮತ್ತು ಮೊಬೈಲ್ ಬಳಕೆಯನ್ನು ನಿಷೇಧಿಸಲು ಕ್ರಮಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧುಬಂಗಾರಪ್ಪ ತಿಳಿಸಿದರು.
ವಿಧಾನಪರಿಷತ್‍ನ ಅಧಿವೇಶನದಲ್ಲಿಂದು ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರುಗಳಾದ ಪ್ರತಾಪ್ ಸಿಂಹ ನಾಯಕ್ ಕೆ ಮತ್ತು ಟಿ.ಎನ್.ಜವರಾಯಿ ಗೌಡ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡ ಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳನ್ನು ಮತ್ತು ಮೊಬೈಲ್ ಬಳಕೆಯನ್ನು ನಿಷೇಧಿಸಲಾಗುವುದು ಎಂದು ಆಯವ್ಯಯದಲ್ಲಿ ಘೋಷಿಸಲಾಗಿದೆ. ಅದರನ್ವಯ ತಜ್ಞರ ಸಮಿತಿಗಳನ್ನು ರಚನೆ ಮಾಡಿ ಕ್ರಮಕೈಗೊಳ್ಳಲಾಗುವುದು ಎಂದರು.
ಇಡೀ ಭಾರತ ದೇಶದಲ್ಲಿ ಮೊದಲು ನಮ್ಮ ರಾಜ್ಯದಲ್ಲಿ ಈ ಕ್ರಮಕೈಗೊಳ್ಳಲಾಗಿದೆ ಎಂದ ಸಚಿವರು, ಮೊಬೈಲ್ ಬಳಕೆಯಿಂದ ಮಕ್ಕಳಿಗೆ ಉಂಟಾಗುವ ಅಪಾಯಗಳು ಮತ್ತು ಮಾನಸಿಕ ಒತ್ತಡವನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಯೋಜನೆಯ ಮೂಲಕ ಹದಿಹರೆಯದ ವಿದ್ಯಾರ್ಥಿಗಳಲ್ಲಿ ಜೀವನ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವುದು ಹಾಗೂ ಮಾನಸಿಕ ಒತ್ತಡವನ್ನು ನಿಭಾಯಿಸುವ ಸಾಮರ್ಥ್ಯವನ್ನು ವೃಧ್ಧಿಪಡಿಸಲಾಗುತ್ತಿದೆ ಎಂದರು.
ವಿದ್ಯಾರ್ಥಿಗಳಲ್ಲಿ ಮೊಬೈಲ್ ಹಾಗೂ ಸಾಮಾಜಿಕ ಮಾಧ್ಯಮಗಳ ಅತಿಯಾದ ಬಳಕೆಯ ವಿರುದ್ಧ ಜಾಗೃತಿ ಮೂಡಿಸಲು ಸರ್ಕಾರಿ ಹಾಗೂ ಅನುದಾನಿತ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರಿಗೆ ತರಬೇತಿ ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
