ಬೆಂಗಳೂರು: ಜಕ್ಕೂರು ರೈಲ್ವೇ ಸೇತುವೆ ಕಾಮಗಾರಿಯನ್ನು ಪರಿಶೀಲಿಸಿದ ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರು, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕಾಮಗಾರಿಯ ಪ್ರಗತಿ, ಬಾಕಿ ಇರುವ ಕೆಲಸಗಳು ಹಾಗೂ ಎದುರಾಗುತ್ತಿರುವ ತಾಂತ್ರಿಕ ಅಡಚಣೆಗಳ ಕುರಿತು ಸ್ಥಳದಲ್ಲೇ ಪರಿಶೀಲನೆ ನಡೆಸಿ ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ರೈಲ್ವೆ ಸೇತುವೆ ಕಾಮಗಾರಿ ಸ್ಥಳ ತಪಾಸಣೆ ನಡೆಸಿದ ಸಮಯದಲ್ಲಿ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸದಿರುವುದನ್ನು ಗಮನಿಸಿದ ಆಯುಕ್ತರು, ಸಂಬಂಧಿಸಿದ ಗುತ್ತಿಗೆದಾರರು ಹಾಗೂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಸದರಿ ಕಾಮಗಾರಿಯನ್ನು ಏಪ್ರಿಲ್ 20 ರೊಳಗೆ ಪೂರ್ಣಗೊಳಿಸಲು ಸೂಚನೆ ನೀಡುವುದರೊಂದಿಗೆ. ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳ್ಳದಿದ್ದಲ್ಲಿ ಗುತ್ತಿಗೆದಾರರಿಗೆ ದಂಡ ವಿಧಿಸಲು ನಿರ್ದೇಶಿಸಿದರು.
ಪರಿಶೀಲನೆ ವೇಳೆ ಜಂಟಿ ಆಯುಕ್ತ ಮೊಹಮ್ಮದ್ ನಯೀಮ್ ಮೊಮಿನ್, ಮುಖ್ಯ ಅಭಿಯಂತರ ರಾಘವೇಂದ್ರ ಪ್ರಸಾದ್, ಅಧೀಕ್ಷಕ ಅಭಿಯಂತರ ಪ್ರಕಾಶ್, ಕಾರ್ಯಪಾಲಕ ಅಭಿಯಂತರ ನಾಗಪ್ಪ ಕಮತಿ ಸೇರಿದಂತೆ ಇತರೆ ಅಭಿಯಂತರು ಹಾಜರಿದ್ದರು.
