ಸಮಗ್ರ ಸುದ್ದಿ

ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ; ಮತದಾರರಿಂದ ಹಕ್ಕು ಚಲಾವಣೆ

Share

ಬೆಂಗಳೂರು: ರಾಜ್ಯದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಮತದಾನ ಪ್ರಗತಿಯಲ್ಲಿದೆ.

ಇತ್ತೀಚಿನ ವರದಿಯನ್ವಯ ಬಾಗಲಕೋಟೆಯಲ್ಲಿ ಶೇಕಡ 11.87 ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶೇಕಡ 9.01 ರಷ್ಟು ಮತದಾನ ದಾಖಲಾಗಿದೆ.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತದಾನ ಪ್ರಕ್ರಿಯೆ ಇಂದು ಬೆಳಿಗ್ಗೆ 7 ಗಂಟೆಗೆ ಆರಂಭವಾಗಿದ್ದು, ಮತದಾರರು ಬೆಳಿಗ್ಗೆಯಿಂದಲೇ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ.

ಒಟ್ಟು 284 ಮತಗಟ್ಟೆಗಳಲ್ಲಿ ಮತದಾನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾಡಳಿತ ಕ್ರಮವಹಿಸಿದ್ದು, ಬಿಗಿ ಪೊಲೀಸ್‌ ಬಂದೋಬಸ್ತ್ ಕೈಗೊಂಡಿದೆ. ಹಿರಿಯ ಚುನಾವಣಾಧಿಕಾರಿಗಳು ನಿರಂತರವಾಗಿ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನು ಬಾಗಲಕೋಟೆಯಲ್ಲಿ ಶಾಂತಿಯುತ ಮತದಾನ ನಡೆಯುತ್ತಿದ್ದು, ನಾಗರಿಕರು ಸೇರಿದಂತೆ ವಿವಿಧ ರಾಜಕೀಯ ಮುಖಂಡರು ತಮ್ಮ ಹಕ್ಕು ಚಲಾಯಿಸಿದರು.

ಬಾಗಲಕೋಟೆ ಮತಕ್ಷೇತ್ರದಲ್ಲಿ 322 ಮತಗಟ್ಟೆಗಳನ್ನು ಸ್ಥಾಪಿಸಿದ್ದು, ಯುವ ಮತ ಕೇಂದ್ರ ಹಾಗೂ ಪಿಂಕ್‌ ಮತಕೇಂದ್ರಗಳು ಗಮನಸೆಳೆಯುತ್ತಿವೆ. ಬೆಳಿಗ್ಗೆಯಿಂದಲೇ ಮತದಾರರು ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ.


Share

You cannot copy content of this page