ಬೆಂಗಳೂರು, ನ.30: ಗ್ರಾಮೀಣ ಪ್ರದೇಶದ ನಾಗರಿಕರ ಬೇಡಿಕೆಗಳ ಅನುಗುಣವಾಗಿ ಜನರಿಗೆ ಅತ್ಯಾವಶ್ಯಕ ಮೂಲಸೌಕರ್ಯಗಳನ್ನು ಮತ್ತು ಸೇವೆಗಳನ್ನು ಒದಗಿಸುವ ಹಾಗೂ ಕಲ್ಪಿಸುವ ಗುರುತರವಾದ ಜವಾಬ್ದಾರಿಗಳನ್ನು ನಿರ್ವಹಿಸುತ್ತಾ ಬಂದಿರುವ ಗ್ರಾಮ ಪಂಚಾಯತಿಗಳು ಸ್ವಯಂ ಆಡಳಿತ ಸಂಸ್ಥೆಗಳಾಗಿ ಕಾರ್ಯನಿರ್ವಹಿಸುತ್ತಿವೆ.
ಗ್ರಾಮ ಪಂಚಾಯತಿಗಳ ಕಾರ್ಯನಿರ್ವಹಣೆಯನ್ನು ಪ್ರೋತ್ಸಾಹಿಸಲು ರಾಜ್ಯದ ತಾಲ್ಲೂಕಿಗೊಂದು ಉತ್ತಮ ಗ್ರಾಮ ಪಂಚಾಯತಿಯನ್ನು ಆಯ್ಕೆ ಮಾಡಿ ಪ್ರತಿ ವರ್ಷವೂ ʼಗಾಂಧಿ ಗ್ರಾಮ ಪುರಸ್ಕಾರʼ ಪ್ರಶಸ್ತಿ ನೀಡಿ ಪುರಸ್ಕರಿಸಲಾಗುತ್ತಿದೆ. ಗ್ರಾಮ ಪಂಚಾಯತಿಗಳಿಗೆ ಪುರಸ್ಕಾರವನ್ನು ನೀಡುವುದರಿಂದ ಮುಂಬರುವ ದಿನಗಳಲ್ಲಿ ಮತ್ತಷ್ಟು ಜನೋಪಯೋಗಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಗ್ರಾಮೀಣ ಭಾಗದ ಜನರ ಜೀವನ ಮಟ್ಟ ಸುಧಾರಣೆಗೆ ಶ್ರಮಿಸಲು ಪ್ರೇರೇಪಿಸುವ ಮೂಲಕ ಗ್ರಾಮ ಪಂಚಾಯತಿಗಳನ್ನು ಸದೃಢಗೊಳಿಸಲು ಮತ್ತು ಅಭಿವೃದ್ಧಿ ಪಥದತ್ತ ಮುನ್ನಡೆಸಲು ಸಹಕಾರಿಯಾಗುತ್ತದೆ.
ಪ್ರಶಸ್ತಿಗೆ ಮಾನದಂಡವಾಗಿ ಗ್ರಾಮ ಪಂಚಾಯತಿಗಳ ಕಾರ್ಯನಿರ್ವಹಣೆಯನ್ನು ಮೌಲ್ಯಮಾಪನ ಮಾಡಲು ಗ್ರಾಮ ಪಂಚಾಯತಿಗಳು ಕಾಯ್ದೆಬದ್ಧವಾಗಿ ನಿರ್ವಹಿಸಬೇಕಾದ ಹಾಗೂ ಗ್ರಾಮ ಪಂಚಾಯತಿಗಳು ಸ್ವಯಂ ಪ್ರೇರಣೆಯಿಂದ ಕೈಗೊಳ್ಳಲಾಗುವ ಅಭಿವೃದ್ಧಿ ಚಟುವಟಿಕೆಗಳು; ಸರ್ಕಾರ ಕಾಲಕಾಲಕ್ಕೆ ರೂಪಿಸಿದ ಕಾರ್ಯಕ್ರಮಗಳ ನಿರ್ವಹಣೆಗೆ ಕೈಗೊಂಡ ಕ್ರಮಗಳನ್ನು ಒಳಗೊಂಡಂತೆ ಜೀವನದ ಗುಣಮಟ್ಟ, ಹಣಕಾಸಿನ ವಿಷಯಗಳು, ಮೂಲ ಸೌಕರ್ಯಗಳು, ಉತ್ತಮ ಆಡಳಿತ, ಗ್ರಾಮ ಪಂಚಾಯತಿ ಸೇವೆಗಳು ಮತ್ತು ಗ್ರಾಮ ಪಂಚಾಯತಿ ಅಭಿವೃದ್ಧಿ ಚಟುವಟಿಕೆಗಳ ವಿಭಾಗಗಳ ಅಂಶಗಳನ್ನೊಳಗೊಂಡಂತೆ ಪ್ರಶ್ನಾವಳಿಗಳನ್ನು ಸರ್ಕಾರದ ವತಿಯಿಂದ ಸಿದ್ಧಪಡಿಸಿ ಅಂಕಿ ಅಂಶಗಳನ್ನು ಸಂಗ್ರಹಿಸಿ ಅವುಗಳ ಆಧಾರದ ಮೇಲೆ ಗ್ರಾಮಪಂಚಾಯತಿಗಳನ್ನು ಪುರಸ್ಕಾರಕ್ಕಾಗಿ ಆಯ್ಕೆ ಮಾಡಲಾಗಿದೆ.
ಆಯ್ಕೆ ಪ್ರಕ್ರಿಯೆ:
ಗಾಂಧಿ ಗ್ರಾಮ ಪುರಸ್ಕಾರಕ್ಕಾಗಿ ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಲು ನಿಗದಿಪಡಿಸಿದ ಮಾನದಂಡಗಳನ್ನು ನಿಗದಿಪಡಿಸಿ, ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅದರಂತೆ ತಂತ್ರಾಂಶದ ಮೂಲಕ ಉತ್ತರಿಸಿದ ವಿವರಗಳಿಗನುಗುಣವಾಗಿ ಪ್ರತಿ ತಾಲ್ಲೂಕಿಗೆ ಅತಿ ಹೆಚ್ಚು ಅಂಕ ಗಳಿಸಿರುವ ಐದು ಗ್ರಾಮ ಪಂಚಾಯತಿಗಳು ಅರ್ಹತೆ ಪಡೆದಿದ್ದು, ಇಂತಹ ಗ್ರಾಮ ಪಂಚಾಯತಿಗಳ ಸ್ಥಳ ಪರಿಶೀಲನೆ ಹಾಗೂ ದಾಖಲಾತಿ ಪರಿಶೀಲನೆ ಮಾಡಿ, ಆಯಾ ಜಿಲ್ಲಾ ಪಂಚಾಯತಿಯ ಮುಖ್ಯಕಾರ್ಯನಿರ್ವಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿನ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಮೂಲಕ ತಾಲ್ಲೂಕಿಗೆ ಒಂದರಂತೆ ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿತ್ತು.
ಗ್ರಾಮಗಳ ಅಭಿವೃದ್ಧಿ ಕಾರ್ಯಗಳಿಗೆ ಪ್ರಶಸ್ತಿ ಮೊತ್ತ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿನ ರಾಜ್ಯ ಮಟ್ಟದ ಪರಾಮರ್ಶೆ ಸಮಿತಿಯ ಮೂಲಕ ಗ್ರಾಮಗಳನ್ನು ಅಂತಿಮಗೊಳಿಸಿ, ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ಗ್ರಾಮಪಂಚಾಯತಿಗಳನ್ನು ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ಗ್ರಾಮ ಪಂಚಾಯತಿಗಳಿಗೆ ಪ್ರಶಸ್ತಿ ಪ್ರಮಾಣಪತ್ರ, ಸ್ಮರಣಿಕೆ ಹಾಗೂ 5 ಲಕ್ಷ ರೂ. ಪ್ರೋತ್ಸಾಹಧನವನ್ನು ನೀಡಿ ಗೌರವಿಸಲಾಗುತ್ತಿದೆ. ಪ್ರಸ್ತುತ 2023-24ನೇ ಸಾಲಿನಲ್ಲಿ ಆಯ್ಕೆ ಮಾಡಲಾದ ಒಟ್ಟು 238 ಗ್ರಾಮ ಪಂಚಾಯತಿಗಳಿಗೆ ‘ಗಾಂಧಿ ಗ್ರಾಮ ಪುರಸ್ಕಾರ’ವನ್ನು ಪ್ರದಾನ ಮಾಡಲಾಗುತ್ತಿದೆ.
ರಾಜ್ಯದ ಎಲ್ಲ ತಾಲ್ಲೂಕುಗಳಿಂದ ಬರುವ ಗ್ರಾಮ ಪಂಚಾಯತಿ ಅಧ್ಯಕ್ಷರುಗಳು ಇಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ ನಡೆಯುವ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳಿಂದ ಪ್ರತಿಷ್ಠಿತ ಪ್ರಶಸ್ತಿಗಳನ್ನು ಸ್ವೀಕರಿಸಲಿದ್ದಾರೆ. ಪ್ರಶಸ್ತಿ ಮೊತ್ತವನ್ನು ಗ್ರಾಮ ಪಂಚಾಯತಿಗಳು ಅಭಿವೃದ್ಧಿ ಕಾರ್ಯಗಳಿಗೆ ಬಳಸಿಕೊಳ್ಳಲು ಸುಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಇ-ಸ್ವತ್ತು 2.0 ತಂತ್ರಾಂಶ ಚಾಲನೆ:
ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ಹೆಚ್ಚಿಸುವ ಸಲುವಾಗಿ ಸರ್ಕಾರದ ವತಿಯಿಂದ ಗ್ರಾಮಪಂಚಾಯತಿ ಆಸ್ತಿಗಳನ್ನು ಇ-ಸ್ವತ್ತು ವ್ಯಾಪ್ತಿಗೆ ತರಲಾಗಿದೆ. ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಗ್ರಾಮಠಾಣಗಳ ಹೊರಗೆ ಭೂಪರಿವರ್ತನೆ ಮಾಡಿಸದೆ, ಮನೆ ನಿರ್ಮಿಸಿಕೊಂಡು ವಾಸಿಸುವ ಜನರಿಗೆ ಕುಡಿಯುವ ನೀರು, ಬೀದಿ ದೀಪ, ರಸ್ತೆ, ಚರಂಡಿ ಇತ್ಯಾದಿ ನಾಗರಿಕ ಸೌಲಭ್ಯಗಳನ್ನು ನೀಡಲಾಗುತ್ತಿದೆ.
ಇದು ಗ್ರಾಮ ಪಂಚಾಯತಿಗಳಿಗೆ ಆರ್ಥಿಕವಾಗಿ ಹೊರೆಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ದೃಢ ನಿರ್ಧಾರ ತೆಗೆದುಕೊಂಡು ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಅಧಿನಿಯಮ-1993 ಪ್ರಕರಣ 199ಕ್ಕೆ ತಿದ್ದುಪಡಿ ತಂದು ಪ್ರಕರಣ 199ಬಿ ಹಾಗೂ 199ಸಿ ಸೇರಿಸಲಾಗಿರುತ್ತದೆ. ತಿದ್ದುಪಡಿಯನ್ನು ದಿನಾಂಕ: 07.04.2025 ರಂದು ಅಧಿಸೂಚಿಸಲಾಗಿರುತ್ತದೆ.
ಅದರ ಅನ್ವಯ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು- 2025ನ್ನು ರೂಪಿಸಲಾಗಿದೆ. ಈ ನಿಯಮಗಳು ದಿನಾಂಕ:17.10.2025ರ ಅಕ್ಟೋಬರ್ 17ರಿಂದ ಜಾರಿಗೊಂಡಿವೆ. ಹೊಸ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರಲು ಅನುಸರಿಸಬೇಕಾದ ಕ್ರಮಗಳು, ತೆರಿಗೆ ನಿರ್ಧರಣಾ ವಿಧಾನಗಳು ವಸೂಲಾತಿ ಕ್ರಮಗಳ ಬಗ್ಗೆ ನಿಯಮಗಳಲ್ಲಿ ವಿವರವಾಗಿ ತಿಳಿಸಲಾಗಿದೆ.
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹೊಸ ಬಡಾವಣೆಗಳ ಅನುಮೋದನೆಗೆ ಅನುಸರಿಸಬೇಕಾದ ಕ್ರಮಗಳ ಬಗ್ಗೆಯೂ ಹೇಳಲಾಗಿದೆ. ಪ್ರತಿಯೊಂದು ಪ್ರಕ್ರಿಯೆಯಲ್ಲಿ ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿ ಅಧಿಕಾರಿಗಳ ಜವಾಬ್ದಾರಿಗಳು, ಜಾರಿಗೆ ಕಾಲಾವಧಿ, ಅಪೀಲು ಹೀಗೆ ಪ್ರತಿಯೊಂದು ವಿಷಯದಲ್ಲಿಯೂ ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದಂತೆ ವಿವರಿಸಲಾಗಿದೆ.
ನೂತನ ನಿಯಮಗಳ ಬಗ್ಗೆ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ, ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿ ಮಟ್ಟದ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರಿಗೆ ತರಬೇತಿಯನ್ನು ನೀಡಲಾಗಿದೆ. ನಿಯಮಗಳ ಜಾರಿಗೆ ಪೂರಕವಾಗಿ ಪಂಚತಂತ್ರ ತಂತ್ರಾಂಶದಲ್ಲಿಯೂ ಅಗತ್ಯ ಮಾರ್ಪಾಡು ಮಾಡಲಾಗಿದ್ದು, ಇಂದು ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಲಾಗುತ್ತಿದೆ.
ಗ್ರಾಮೀಣ ಭಾಗದ ಜನರು ತಮ್ಮ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸುಲಭವಾಗಿ ಮತ್ತು ಡಿಜಿಟಲ್ ರೂಪದ ಇ – ಸ್ವತ್ತು ಪಡೆಯಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಸುವರ್ಣಾವಕಾಶ ಕಲ್ಪಿಸಿದೆ. ತಂತ್ರಾಂಶದ ಮೂಲಕ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾರ್ವಜನಿಕರ ಆಸ್ತಿಗಳಿಗೆ ಡಿಜಿಟಲ್ ಇ – ಸ್ವತ್ತು ಪ್ರಮಾಣ ಪತ್ರ (ನಮೂನೆ- 11ಎ ಮತ್ತು ನಮೂನೆ 11ಬಿ) ವಿತರಣೆಯನ್ನು ಆರಂಭಿಸಲಾಗುತ್ತಿದೆ. ಆಸ್ತಿ ಸಂಬಂಧಿತ ಸೇವೆಗಳನ್ನು ಪಾರದರ್ಶಕವಾಗಿ ಹಾಗೂ ತ್ವರಿತವಾಗಿ ಒದಗಿಸಲು ಉದ್ದೇಶಿಸಲಾಗಿದೆ.
ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ವೃದ್ಧಿಗೊಳ್ಳಲಿದ್ದು, ಸ್ಥಳೀಯ ಸರ್ಕಾರವಾದ ಗ್ರಾಮ ಪಂಚಾಯತಿಗಳ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಿದೆ. ತಂತ್ರಾಂಶದ ಮೂಲಕ ಇ-ಸ್ವತ್ತು ಪಡೆಯಲು ಎದುರಾಗುವ ಎಲ್ಲಾ ಆಡಳಿತಾತ್ಮಕ ಮತ್ತು ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರ ನೀಡಲು ಇ-ಸ್ವತ್ತು ಸಹಾಯವಾಣಿ ಸಂಖ್ಯೆ: 9483476000 ಸ್ಥಾಪಿಸಲಾಗಿದೆ.
