ಸಮಗ್ರ ಸುದ್ದಿ

ಸಮರ್ಪಕ ಭೂ ದಾಖಲೆ ನೀಡುವುದು ಸರ್ಕಾರದ ಆರನೇ ಗ್ಯಾರಂಟಿ: ಡಿಸಿಎಂ ಡಿ.ಕೆ.ಶಿವಕುಮಾರ್

Share

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಉಳುವವನಿಗೆ ಭೂಮಿ, ಬಗರ್ ಹುಕುಂ ಸಾಗುವಳಿ ಜಮೀನು ಸಕ್ರಮ ಮಾಡಿದೆ. ಅರಣ್ಯ ಪ್ರದೇಶದಲ್ಲೂ ವಾಸಿಸುವವರಿಗೆ ಕಾನೂನಿನ ಅಡಿಯಲ್ಲಿ ಸಹಾಯ ಮಾಡಿದೆ. ನಿಮ್ಮ ಭೂಮಿ ಹಾಗೂ ಆಸ್ತಿ ದಾಖಲೆ ಸರಿಪಡಿಸುವುದು ನಮ್ಮ ಆರನೇ ಗ್ಯಾರಂಟಿ ಯೋಜನೆಯಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಬೆಂಗಳೂರಿನಲ್ಲಿ 25 ಲಕ್ಷ ಆಸ್ತಿಗಳನ್ನು ಇ ಖಾತಾ ಅಭಿಯಾನ ಮಾಡಿದ್ದು, 6 ಲಕ್ಷ ಜನರಿಗೆ ಇ ಖಾತಾ ವಿತರಿಸಲಾಗಿದೆ. ವಿಜಯನಗರ ಜಿಲ್ಲೆಯಲ್ಲಿ ಕೃಷ್ಣ ಬೈರೇಗೌಡರು ಹಾಗೂ ಪ್ರಿಯಾಂಕ್ ಖರ್ಗೆ ಅವರು ಸೇರಿ 1,11,111 ಜನರಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಿಂದ ಹೊರಗಿರುವ ತಾಂಡಾಗಳನ್ನು ಸಕ್ರಮ ಮಾಡಿ ಹಕ್ಕುಪತ್ರ, ಭೂ ದಾಖಲೆಗಳನ್ನು ವಿತರಿಸಿದ್ದೇವೆ ಎಂದು ವಿವರಿಸಿದರು.

ಹಸಿದವರಿಗೆ ಅನ್ನ, ಉದ್ಯೋಗ ನೀಡುತ್ತಿರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಜನರ ಶಕ್ತಿಯೇ ನಮ್ಮ ಶಕ್ತಿ. ಜನರೇ ನಮ್ಮ ಆಸ್ತಿ. ನಾನು ತಾಲೂಕು ಪಂಚಾಯ್ತಿ ಅಧ್ಯಕ್ಷನಾಗಿದ್ದು, ಜಿಲ್ಲಾ ಪಂಚಾಯ್ತಿ ಸದಸ್ಯನಾಗಿದ್ದೆ. ಪಂಚಾಯ್ತಿಯಿಂದ ಪಾರ್ಲಿಮೆಂಟ್ ವರೆಗೂ ನಾಯಕರನ್ನು ಬೆಳೆಸಬೇಕು ಎಂಬ ರಾಜೀವ್ ಗಾಂಧಿ ಅವರ ಕಲ್ಪನೆ, ಈ ದೇಶದಲ್ಲಿ ಹೊಸ ನಾಯಕರನ್ನು ತಯಾರಾಗುವಂತೆ ಮಾಡಿದೆ. ಇದಕ್ಕಾಗಿ ಸಂವಿಧಾನಕ್ಕೆ 73, 74ನೇ ತಿದ್ದುಪಡಿ ತರಲಾಯಿತು ಎಂದರು.

ಕೇಂದ್ರ ಸರ್ಕಾರವು ನರೇಗಾ, ಜಲ ಜೀವನ್ ಮಿಷನ್ ಸೇರಿದಂತೆ ಇತರೆ ಯೋಜನೆಗಳ ವಿಚಾರದಲ್ಲಿ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೇಸರ ವ್ಯಕ್ತಪಡಿಸಿದರು.

ನರೆಗಾ ಯೋಜನೆ ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮ, ಇದರಿಂದ ನಮ್ಮ ಸರ್ಕಾರಕ್ಕೆ ಹೆಚ್ಚು ಪ್ರಚಾರ ಸಿಗುತ್ತದೆ. ನಾವು ಜನರ ಹೃದಯಕ್ಕೆ ಹತ್ತಿರವಾಗುತ್ತೇವೆ ಎಂದು ಇದಕ್ಕೆ ಅನುದಾನ ಕಡಿಮೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ನರೇಗಾ ಯೋಜನೆಯಡಿ 2021ರಲ್ಲಿ 14.65 ಕೋಟಿ ಮಾನವ ಕೂಲಿ ದಿನಗಳಿಗೆ ಅವಕಾಶವಿತ್ತು. ಈ ವರ್ಷ ಅದನ್ನು 9 ಕೋಟಿಗೆ ಇಳಿಸಿದ್ದಾರೆ. ಸುಮಾರು ಶೇ.40% ಕಡಿಮೆ ಮಾಡಿದ್ದಾರೆ. ನರೇಗಾ ಯೋಜನೆಯಡಿ 2021ರಲ್ಲಿ 5,910 ರೂ. ಕೋಟಿ ಅನುದಾನ ಬಂದಿತ್ತು. ಈ ವರ್ಷ 2,691 ಕೋಟಿ ರೂ. ಅನುದಾನ ಬಂದಿದೆ. ಈ ಯೋಜನೆಯಲ್ಲಿ ಎಷ್ಟು ವ್ಯತ್ಯಾಸವಾಗಿದೆ ಎಂದು ನೀವೆಲ್ಲರೂ ಗಮನಿಸಬೇಕು ಎಂದು ತಿಳಿಸಿದರು.

ಜಲಜೀವನ್ ಮಿಷನ್ ಯೋಜನೆಯಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ತಲಾ ಶೇ.45% ಅನುದಾನ ನೀಡಬೇಕು. ಶೇ.10% ಹಣವನ್ನು ಜನರಿಂದ ಪಡೆಯುವುದಾಗಿದೆ. ಕಳೆದ ವರ್ಷ ಈ ಯೋಜನೆಗೆ ರಾಜ್ಯ ಸರ್ಕಾರ 3700 ಕೋಟಿ ರೂ. ಅನ್ನು ನೀಡಿದರೆ, ಕೇಂದ್ರ ಸರ್ಕಾರ ನೀಡಿರುವ ಅನುದಾನ ಈವರೆಗೂ ಶೂನ್ಯ ಎಂದು ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಇಲಾಖೆಯ 25 ಸಾವಿರ ಕೋಟಿ ಅನುದಾನದಲ್ಲಿ ಜಲಜೀವನ್ ಮಿಷನ್ ಗೆ 12 ಸಾವಿರ ಕೋಟಿ, ನರೇಗಾ ಯೋಜನೆಗೆ 2,400 ಕೋಟಿ, ಗ್ರಾಮಗಳ ರಸ್ತೆಗೆ 1,000 ಕೋಟಿ, ಸಿಎಂ ಮೂಲಭೂತ ಸೌಕರ್ಯಕ್ಕೆ 900 ಕೋಟಿ ನೀಡಲಾಗುತ್ತಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಲ್ಯಾಣ ಪಥ ಯೋಜನೆ ಜಾರಿ ಮಾಡಿದ್ದಾರೆ ಎಂದರು.

ಗಾಂಧೀಜಿ ಅವರು ದೇಶದ ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಿ ನೂರು ವರ್ಷಗಳು ತುಂಬಿದೆ. ಅಂದು ಗಾಂಧೀಜಿ ಅವರು ವಹಿಸಿಕೊಂಡ ಜವಾಬ್ದಾರಿ ಸ್ಥಾನದಲ್ಲಿ ಇಂದು ನಮ್ಮದೇ ರಾಜ್ಯದವರಾದ ಮಲ್ಲಿಕಾರ್ಜುನ ಖರ್ಗೆ ಅವರಿದ್ದಾರೆ ಎಂದರು.

ಇ-ಸ್ವತ್ತು ಮೂಲಕ ನಿಮ್ಮ ಆಸ್ತಿ ದಾಖಲೆ ಸರಿಪಡಿಸಿಕೊಳ್ಳಿ:

ಭಾರತದ ಭವಿಷ್ಯ ಅಡಗಿರುವುದು ಹಳ್ಳಿಯಲ್ಲಿ ಎಂದು ಗಾಂಧೀಜಿ ತಿಳಿಸಿದ್ದರು. ಪ್ರತಿ ಹಳ್ಳಿಯಲ್ಲಿ ಪಂಚಾಯ್ತಿ, ಸೊಸೈಟಿ, ಶಾಲೆ ಇರಬೇಕು ಎಂದು ಮಾರ್ಗದರ್ಶನ ನೀಡಿದರು. ಅವರ ಮಾರ್ಗದರ್ಶನದಂತೆ ನಾವು ಕೆಲಸ ಮಾಡುತ್ತಿದ್ದೇವೆ. ನಿಮ್ಮ ಮನೆ ಬಾಗಿಲಿಗೆ ಇ-ಸ್ವತ್ತು ತಂದುಕೊಡುವ ಕೆಲಸ ಮಾಡುತ್ತಿದ್ದೇವೆ. ಇದು ನಿಮ್ಮೆಲ್ಲರ ಬದುಕಿಗೆ ಹೊಸರೂಪ ನೀಡಿ, ಎಲ್ಲ ಪಂಚಾಯ್ತಿ ಆಸ್ತಿ ದಾಖಲೆಗಳಿಗೆ 11 ಬಿ ಖಾತೆಗಳನ್ನು ನೀಡಲಾಗುತ್ತಿದೆ. ನೀವು ಅರ್ಜಿ ಹಾಕಿ 15 ದಿನದ ಒಳಗೆ ಖಾತೆ ನೀಡಲು ಸರ್ಕಾರ ತೀರ್ಮಾನಿಸಿದೆ. ಯಾರೂ ಕಚೇರಿ ಅಲೆಯುವುದು ಬೇಡ ಎಂದು ಆನ್ಲೈನ್ ಹಾಗೂ ಬಾಪುಜಿ ಕೇಂದ್ರಗಳಲ್ಲಿ ವಿತರಣೆಗೆ ಅವಕಾಶ ನೀಡಲಾಗಿದೆ. 11 ಬಿ ಮೂಲಕ ತೆರಿಗೆ ಪಾವತಿಸಿ, ಆಸ್ತಿ ದಾಖಲೆ ಸರಿಪಡಿಸಿಕೊಳ್ಳಿ ಎಂದು ತಿಳಿಸಿದರು.


Share

You cannot copy content of this page