ಶಿವಮೊಗ್ಗ: ರಾಜ್ಯದ 13 ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸುಮಾರು 2600 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.
ಶಿವಮೊಗ್ಗದ ಬೊಮ್ಮನಕಟ್ಟೆಯಲ್ಲಿ ಶನಿವಾರ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ (2ನೇ ಹಂತ), ಎನ್ ಜಿಟಿ ಅನುದಾನದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಬೊಮ್ಮನಕಟ್ಟೆ ಆಶ್ರಯ ಬಡಾವಣೆಗೆ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪ ಬಡಾವಣೆ ಎಂದು ನಾಮಕರಣ ಮಾಡಿ ಅವರು ಮಾತನಾಡಿದರು.
ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಒಟ್ಟು 237 ಕೋಟಿ ರೂಪಾಯಿ ಅನುದಾನದಲ್ಲಿ ಈ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ. ಬ್ಯಾಂಕ್ ನಿಂದ 227 ಕೋಟಿ ರೂಪಾಯಿ ಸಾಲ ಪಡೆಯಲಾಗುತ್ತದೆ ಮತ್ತು 7.5 ಕೋಟಿ ರೂಪಾಯಿಗಳನ್ನು ಶಿವಮೊಗ್ಗ ಪಾಲಿಕೆ ಭರಿಸಲಿದೆ. ಆದರೆ, ಪಡೆಯುವ ಸಾಲವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರವೇ ಬಡ್ಡಿ ಸಹಿತ ತೀರಿಸಲಿದೆ ಎಂದು ಹೇಳಿದರು.
ಹಂತ ಹಂತವಾಗಿ ಸಮಗ್ರ ಕುಡಿಯುವ ನೀರು ಯೋಜನೆ
ಈಗ ಉದ್ಘಾಟನೆಯಾಗಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿನ ಮಾರ್ಚ್ ವೇಳೆಗೆ ಪೂರ್ಣಗೊಳಿಸಲಾಗುತ್ತದೆ. ಶಿವಮೊಗ್ಗ ನಗರಕ್ಕೆ ಸಮಗ್ರ ಕುಡಿಯುವ ನೀರು ಯೋಜನೆಯನ್ನು ನೀಡಬೇಕೆಂಬ ಬೇಡಿಕೆ ಬಂದಿದೆ. ಇದಕ್ಕೆ ಸಂಬಂಧಿಸಿದ ಯೋಜನಾ ವರದಿಯೂ ಸಿದ್ಧವಾಗಿದೆ. ಹೆಚ್ಚು ಹಣದ ಅಗತ್ಯ ಇರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹಂತಹಂತವಾಗಿ ಸಮಗ್ರ ಯೋಜನೆಯನ್ನು ಕೈಗೆತ್ತಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಇದೇ ವೇಳೆ, ಹಣಕಾಸು ಲಭ್ಯತೆಗೆ ಅನುಸಾರ ಪೌರ ಕಾರ್ಮಿಕರ ಮನೆಗಳ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದೂ ಅವರು ಆಶ್ವಾಸನೆ ನೀಡಿದರು.
ಮಹಾ ನಗರಪಾಲಿಕೆಗಳಲ್ಲಿ ಕೈಗೊಳ್ಳಲಾಗುವ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರದಿಂದ ಯಾವುದೇ ಅನುದಾನ ಪಡೆಯದೇ ರಾಜ್ಯ ಸರ್ಕಾರವೇ ಜನರ ತೆರಿಗೆ ಹಣವನ್ನು ವ್ಯಯಿಸುತ್ತಿದೆ. ಈ ಮೂಲಕ ಸಮಾಜದ ಪ್ರತಿಯೊಬ್ಬ ಕಟ್ಟಕಡೆಯ ವ್ಯಕ್ತಿಗೂ ಮೂಲಸೌಕರ್ಯಗಳನ್ನು ಕಲ್ಪಿಸುವುದರೊಂದಿಗೆ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಪಾದನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ಅನುಷ್ಠಾನಕ್ಕೆ ತರುತ್ತಿದೆ ಎಂದು ಸಚಿವರು ತಿಳಿಸಿದರು.
ಗ್ಯಾರಂಟಿ ಯೋಜನೆಗಳಿಗೆ ಒಂದೂವರೆ ಲಕ್ಷ ಕೋಟಿ ರೂಪಾಯಿ
ಬಡವ ಬಲ್ಲಿದನೆನ್ನದೇ ಪ್ರತಿಯೊಬ್ಬರೂ ನೆಮ್ಮದಿಯ ಜೀವನ ಸಾಗಿಸಬೇಕೆಂಬ ಆಶಯದೊಂದಿಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಂಚಗ್ಯಾರಂಟಿಗಳನ್ನು ಜಾರಿಗೆ ತಂದಿದೆ. 1.30 ಕೋಟಿ ಮಹಿಳೆಯರಿಗೆ ಮಾಸಿಕ ತಲಾ 2 ಸಾವಿರ ರೂಪಾಯಿ, ಉಚಿತ ಬಸ್ ಪ್ರಯಾಣಕ್ಕೆಂದು 10,500 ಕೋಟಿ, ಎಲ್ಲಾ ಬಿಪಿಎಲ್ ಕಾರ್ಡುದಾರರಿಗೆ ಉಚಿತ 5 ಕೆಜಿ ಅಕ್ಕಿ ಮತ್ತು 5 ಕೆಜಿ ಅಕ್ಕಿಗೆ ನಗದು, 200 ಯೂನಿಟ್ ವರೆಗೆ ಉಚಿತ ವಿದ್ಯುತ್, ವಿದ್ಯಾರ್ಥಿಗಳಿಗೆ ಯುವನಿಧಿಯಂತಹ ಗ್ಯಾರಂಟಿ ಯೋಜನೆಗಳಿಗೆ ಪ್ರತಿ ವರ್ಷ 55 ಸಾವಿರ ಕೋಟಿ ರೂಪಾಯಿಯನ್ನು ಭರಿಸಲಾಗುತ್ತಿದ್ದು, ಕಳೆದ ಮೂರು ವರ್ಷಗಳಲ್ಲಿ 1.56 ಲಕ್ಷ ಕೋಟಿ ರೂಪಾಯಿಗಳನ್ನು ಖರ್ಚು ಮಾಡಿ, ಕನ್ನಡನಾಡಿನ ಜನರ ಜೀವನ ಹಸನಾಗುವಂತೆ ಮಾಡಿದೆ ಎಂದು ತಿಳಿಸಿದರು.
ವಿಶ್ವಬ್ಯಾಂಕ್ ಮಾರ್ಗಸೂಚಿ ಅಳವಡಿಕೆ
ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಬ್ಬ ವ್ಯಕ್ತಿಗೆ ಸಾಮಾನ್ಯವಾಗಿ ಜೀವನ ಸಾಗಿಸಲು ಕನಿಷ್ಠ ಹಣವನ್ನು ವಿಶ್ವಬ್ಯಾಂಕ್ ಸಮಗ್ರ ಯೋಜನೆಯನ್ನು ರೂಪಿಸಿದೆ. ಯೂನಿವರ್ಸಲ್ ಬೇಸಿಕ್ ಇನ್ ಕಂ ಪ್ರಕಾರವೇ ನಮ್ಮ ಸರ್ಕಾರ ಪ್ರತಿ ಕುಟುಂಬಕ್ಕೆ ಗ್ಯಾರಂಟಿ ಯೋಜನೆಗಳ ಮೂಲಕ ಕನಿಷ್ಠ ಹಣ ಸಿಗುವಂತೆ ಮಾಡಿದೆ. ಇಂತಹ ಯೋಜನೆಗಳನ್ನು ಜಾರಿಗೆ ತಂದಿರುವುದು ಜಗತ್ತಿನಲ್ಲಿ ಇದೇ ಮೊದಲು ಎಂದು ಬೈರತಿ ಸುರೇಶ್ ತಿಳಿಸಿದರು.
ಪಟ್ಟಣ, ನಗರ, ಪಾಲಿಕೆಗಳಿಗೆ 25 ಸಾವಿರ ಕೋಟಿ ರೂ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ನಾನು ನಗರಾಭಿವೃದ್ಧಿ ಸಚಿವ ಸ್ಥಾನ ವಹಿಸಿಕೊಂಡ ಮೂರು ವರ್ಷಗಳಲ್ಲಿ ಸುಮಾರು 25 ಸಾವಿರ ಕೋಟಿ ರೂಪಾಯಿಗಳ ಅನುದಾನ ಬಿಡುಗಡೆ ಮಾಡಲಾಗಿದೆ. ಬಹುತೇಕ ಎಲ್ಲಾ ಪಟ್ಟಣ, ನಗರ, ಪುರಸಭೆ, ಮಹಾನಗರ ಪಾಲಿಕೆಗಳಲ್ಲಿ ಕುಡಿಯುವ ನೀರು ಮತ್ತು ಒಳಚರಂಡಿ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸಲಾಗಿದ್ದು, ಇನ್ನು ಕೆಲವೇ ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಅವರು ತಿಳಿಸಿದರು.
ರಾಜ್ಯ ಸರ್ಕಾರ ಆರ್ಥಿಕವಾಗಿ ಸದೃಢವಾಗಿದ್ದು, ಹಣಕಾಸಿನ ಯಾವುದೇ ಕೊರತೆ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಜಾತಿ ಹೆಸರಲ್ಲಿ ರಾಜಕೀಯ ಸಲ್ಲದು
ಕುವೆಂಪು ಸರ್ವಜನಾಂಗದ ಶಾಂತಿಯ ತೋಟವೆಂದು ಹೇಳಿದ್ದರು. ನಾವೆಲ್ಲರೂ ಒಂದೇ. ಸಹೋದರರಿದ್ದಂತೆ. ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯಗಳು ದೊರೆಯಬೇಕೆಂದು ಡಾ.ಅಂಬೇಡ್ಕರ್ ಹೇಳಿದ್ದರು. ಅದರಂತೆಯೇ ಸಿದ್ದರಾಮಯ್ಯ ಸರ್ಕಾರ ಯೋಜನೆಗಳನ್ನು ರೂಪಿಸಿದೆ. ನಾವೆಲ್ಲಾ ಭಾರತೀಯರು ಮೊದಲು, ನಂತರ ನಮ್ಮ ಜಾತಿ, ಜನಾಂಗ. ಜಾತಿಯ ಆಧಾರದಲ್ಲಿ ಯಾರೂ ರಾಜಕಾರಣ ಮಾಡಬಾರದು. ಸಿಕ್ಕ ಅಧಿಕಾರವನ್ನು ಒಳ್ಳೆಯದಕ್ಕೆ ಉಪಯೋಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
