ಸಮಗ್ರ ಸುದ್ದಿ

ಮುಂಗಾರು ಮಳೆಗಾಲವನ್ನು ಸಮರ್ಪಕವಾಗಿ ಎದುರಿಸಲು ಸಿದ್ಧರಾಗಿ: ಡಾ. ರಾಜೇಂದ್ರ ಕೆ.ವಿ

Share

ಬೆಂಗಳೂರು:ಮುಂಬರುವ ಮಳೆಗಾಲದಲ್ಲಿ ಸಂಭವನೀಯ ಅವಘಡಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿ/ಸಿಬ್ಬಂದಿಗಳು ಪೂರ್ವಸಿದ್ಧತೆ, ಯೋಜನೆ ಹಾಗೂ ಸಮನ್ವಯದೊಂದಿಗೆ ಕಾರ್ಯಪ್ರವೃತ್ತರಾಗಬೇಕೆಂದು ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತ ಡಾ: ರಾಜೇಂದ್ರ ಕೆ.ವಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಳೆಗಾಲ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಆಯುಕ್ತರು, ಈಗಾಗಲೇ ಪೂರ್ವ ಮುಂಗಾರು ಪ್ರಾರಂಭಗೊಂಡಿದ್ದು, ಸದ್ಯದಲ್ಲೇ ಮುಂಗಾರು ಮಳೆಗಾಲ ಪ್ರಾರಂಭವಾಗಲಿದ್ದು, ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ 112 ವಾರ್ಡ್‌ಗಳಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ಎಲ್ಲಾ ತಂಡಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ತಪ್ಪಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ ಪ್ರಮುಖ ರಸ್ತೆಗಳಾದ ಆರ್ಟೀರಿಯಲ್, ಸಬ್-ಆರ್ಟೀರಿಯಲ್ ಹಾಗೂ ಹೈ ಡೆನ್ಸಿಟಿ ಕಾರಿಡಾರ್‌ಗಳ ಬದಿ ಚರಂಡಿಗಳು, ಶೋಲ್ಡರ್ ಡ್ರೇನ್‌ಗಳಲ್ಲಿ ಹೂಳೆತ್ತುವ ಕಾರ್ಯ ಕೈಗೊಂಡು, ಗ್ರೇಟಿಂಗ್‌ಗಳಲ್ಲಿ ನೀರು ಸರಾಗವಾಗಿ ಹರಿಯುವಂತೆ ಸ್ವಚ್ಛತೆ ಕಾಪಾಡಬೇಕು. ಈ ಕುರಿತು ಸ್ಥಳ ಪರಿಶೀಲನೆ ನಡೆಸಿ, ಸ್ವಚ್ಛತೆ ಸಮರ್ಪಕವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಿಥಿಲಗೊಂಡ ಕಟ್ಟಡ/ಗೋಡೆಗಳನ್ನು ತೆರವುಗೊಳಿಸಿ:

ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳು, ಕಾಂಪೌಂಡ್ ಗೋಡೆಗಳು, ಶೆಲ್ಟರ್ ಪಾಯಿಂಟ್‌ಗಳು, ಮ್ಯಾನ್‌ ಹೋಲ್‌ಗಳು ಹಾಗೂ ಬೀಳುವ ಸಾಧ್ಯತೆಯಿರುವ ಫ್ಲೆಕ್ಸ್/ ಬ್ಯಾನರ್‌ಗಳನ್ನು ತೆರವುಗೊಳಿಸುವ ಕಾರ್ಯ ಪರಿಣಾಮಕಾರಿಯಾಗಿ ನಡೆಯಬೇಕು. ಈ ಸಂಬಂಧ ಅಧಿಕಾರಿಗಳು ಮೇಲ್ವಿಚಾರಣೆ ನಡೆಸಿ, ಶಿಥಿಲಾವಸ್ಥೆಯಲ್ಲಿರುವ ಕಟ್ಟಡ/ಗೋಡೆಗಳನ್ನು ಗುರುತಿಸಿ, ತೆರವಿಗೆ ನೋಟಿಸ್ ನೀಡುವ ಕಾರ್ಯ ಕೈಗೊಳ್ಳಬೇಕು ಎಂದು ಸೂಚಿಸಿದರು.

ಸ್ಥಳೀಯರೊಂದಿಗೆ ಸಂಪರ್ಕದಲ್ಲಿರಿ:

ಮಳೆಗಾಲದ ವೇಳೆ ನೀರು ನಿಲ್ಲುವ ತಗ್ಗು ಪ್ರದೇಶಗಳು ಹಾಗೂ ಹಾನಿಗೊಳಗಾಗುವ ಪ್ರದೇಶಗಳನ್ನು ಗುರುತಿಸಿ, ಅಲ್ಲಿನ ಸ್ಥಳೀಯ ನಿವಾಸಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಪಾಲಿಕೆ, ಅಗ್ನಿಶಾಮಕ ತುರ್ತು ಸೇವೆ ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ, ಸಮಸ್ಯಾತ್ಮಕ ಪ್ರದೇಶಗಳಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶನ ನೀಡಿದರು.

ರಸ್ತೆಗಳಲ್ಲಿ ಮಾರ್ಕಿಂಗ್ ಮಾಡಿ:

ರಸ್ತೆಗಳಲ್ಲಿ ಇರುವ ಹಂಪ್ ಹಾಗೂ ಸ್ಪೀಡ್ ಬ್ರೇಕರ್‌ಗಳು ಸ್ಪಷ್ಟವಾಗಿ ಕಾಣುವಂತೆ ಮಾರ್ಕಿಂಗ್ ಮಾಡುವ ಕಾರ್ಯ ತ್ವರಿತಗತಿಯಲ್ಲಿ ಪೂರ್ಣಗೊಳ್ಳಬೇಕು. ಪಾದಚಾರಿ ಮಾರ್ಗಗಳಲ್ಲಿರುವ ತೆರೆದ ಸ್ಲ್ಯಾಬ್‌ಗಳು, ಭಗ್ನಾವಶೇಷಗಳು, ಒಣಗಿದ ಮರಗಳು ಹಾಗೂ ರೆಂಬೆಗಳನ್ನು ಕೂಡಲೇ ತೆರವುಗೊಳಿಸಬೇಕು. ಜೊತೆಗೆ, ಪಾದಚಾರಿ ಮಾರ್ಗಗಳ ಮೇಲಿನ ಒತ್ತುವರಿಯನ್ನು ತೆರವುಗೊಳಿಸುವ ಕಾರ್ಯ ಕೈಗೊಳ್ಳಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಚರ್ಚೆಯಾದ ಇತರೆ ಪ್ರಮುಖ ಅಂಶಗಳು ಹಾಗೂ ನೀಡಿದ ಸೂಚನೆಗಳು:

ಮಳೆಗಾಲದ ವೇಳೆ ಧರೆಗುರುಳಿದ ಮರಗಳು ಹಾಗೂ ರೆಂಬೆಗಳನ್ನು ತೆರವುಗೊಳಿಸಲು ಗರಗಸ, ಮರ ಕತ್ತರಿಸುವ ಯಂತ್ರ ಸೇರಿದಂತೆ ಅಗತ್ಯ ಸಲಕರಣೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸೂಚನೆ ನೀಡಲಾಯಿತು.

ಗಾಳಿ ಆಂಜನೇಯ ದೇವಸ್ಥಾನದ ಬಳಿಕ ರಾಜಕಾಲುವೆಯಲ್ಲಿ ಸಂಪೂರ್ಣ ಹೂಳೆತ್ತಿ ಸ್ವಚ್ಛತೆ ಕಾಪಾಡುವಂತೆ ಸೂಚಿಸಲಾಯಿತು.

ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚಲು ನಿರ್ದೇಶನ ನೀಡಲಾಯಿತು. ಸಸಿ/ಮರಗಳ ಬುಡಕ್ಕೆ ಹಾಕಿರುವ ಕಾಂಕ್ರೀಟ್ ಅನ್ನು ಕೂಡಲೇ ತೆರವುಗೊಳಿಸಲು ಸೂಚನೆ ನೀಡಲಾಯಿತು.

ಅನಧಿಕೃತ ಕೇಬಲ್‌ಗಳನ್ನು ತೆರವುಗೊಳಿಸಲು ಸೂಚಿಸಲಾಯಿತು. ಅಂಡರ್‌ ಪಾಸ್‌ಗಳಲ್ಲಿ ನೀರು ನಿಲ್ಲದಂತೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಯಿತು.

ವಾರ್ಡ್‌ಗಳಲ್ಲಿ ನಡೆಯುವ ಕಾರ್ಯಕ್ರಮ/ಸಮಾರಂಭಗಳ ಬಗ್ಗೆ ಮುಂಚಿತ ಮಾಹಿತಿ ಪಡೆದು ಯಾವುದೇ ಅಜಾಗರೂಕತೆ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಲಾಯಿತು.

ಅಗತ್ಯವಿರುವ ಸ್ಥಳಗಳಲ್ಲಿ ಬೀದಿ ದೀಪಗಳನ್ನು ಬದಲಾಯಿಸಿ, ದುರಸ್ತಿ ಕಾರ್ಯ ಕೈಗೊಳ್ಳಲು ಸೂಚಿಸಲಾಯಿತು.

ಸಭೆಯಲ್ಲಿ ಜಂಟಿ ಆಯುಕ್ತ ಸಂಗಪ್ಪ, ಉಪ ಆಯುಕ್ತರಾದ ಶಂಕರೆಪ್ಪ ವಣಿಕ್ಯಾಳ್ ಹಾಗೂ ಮಂಜುನಾಥ್ ಸ್ವಾಮಿ, ಮುಖ್ಯ ಅಭಿಯಂತರರಾದ ಸ್ವಯಂಪ್ರಭ ಹಾಗೂ ಬಸವರಾಜ್ ಕಬಾಡೆ, ಅಧೀಕ್ಷಕ ಅಭಿಯಂತರರು, ಎಲ್ಲಾ ಇಲಾಖೆಗಳ ಮುಖ್ಯಸ್ಥರು, ಎಲ್ಲಾ ವಿಭಾಗಗಳ ಕಾರ್ಯಪಾಲಕ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಇತರರು ಉಪಸ್ಥಿತರಿದ್ದರು.


Share

You cannot copy content of this page