ಸಮಗ್ರ ಸುದ್ದಿ

ರಾಜ್ಯದ ಯೋಜನೆ ಮತ್ತು ಸಾಂಖಿಕ‌ ಇಲಾಖೆ ಸಚಿವ ಡಿ. ಸುಧಾಕರ್ ನಿಧನ | ನಾಳೆ ಅಂತಿಮ ಸಂಸ್ಕಾರ

Share

ಬೆಂಗಳೂರು:ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ (62) ಅವರು ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ. ಸುಧಾಕರ್ ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

ಮಂಡಿ ಚಿಪ್ಪು ಶಸ್ತ್ರಚಿಕಿತ್ಸೆಗಾಗಿ ಯಶವಂತಪುರದಲ್ಲಿರುವ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಶ್ವಾಸಕೋಶದ ಸೋಂಕು ತಗಲಿತ್ತು. ಯಶವಂತಪುರ ಆಸ್ಪತ್ರೆಯಿಂದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಅವರನ್ನು ಸ್ಥಳಾಂತರಿಸಲಾಗಿತ್ತು. ತಜ್ಞ ವೈದ್ಯರಿಂದ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದ ಡಿ ಸುಧಾಕರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಸಮಯ 3:15ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಸಾರ್ವಜನಿಕ ಅಂತಿಮ ದರ್ಶನದ ವಿವರಗಳು:

ಇಂದು ಮಧ್ಯಾಹ್ನ 12:00 ರಿಂದ 04:00 ಗಂಟೆಯವರೆಗೆ
ನೆಹರೂ ಮೈದಾನ, ಹಿರಿಯೂರು — ಸಾರ್ವಜನಿಕ ದರ್ಶನ

ನಂತರ ಚಳ್ಳಕೆರೆಯ ಸ್ವಗೃಹದಲ್ಲಿ ಪೂಜೆ ವಿಧಿ-ವಿಧಾನಗಳು ನೆರವೇರಲಿವೆ. ಬಳಿಕ ಡಿ. ಸುಧಾಕರ್ ಕ್ರೀಡಾಂಗಣ, ಚಳ್ಳಕೆರೆ — ಸಾರ್ವಜನಿಕ ದರ್ಶನಕ್ಕಿಡಲಾಗುವುದು.

ಮೇ 11ರಂದು ಮಧ್ಯಾಹ್ನ 03:00 ರಿಂದ 04:00 ಗಂಟೆಯವರೆಗೆ ಅಂತ್ಯಕ್ರಿಯೆ ವಿಧಿ-ವಿಧಾನಗಳು ನಡೆಯಲಿವೆ.

ಗಣ್ಯರಿಂದ‌ ಸಂತಾಪ

ನಮ್ಮ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವರು, ಹಿರಿಯ ನಾಯಕರು ಆಗಿದ್ದ ಡಿ.ಸುಧಾಕರ್ ಅವರ ಅಕಾಲಿಕ ನಿಧನದಿಂದ ದುಃಖಿತನಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ನಾನು ಖುದ್ದು ಆಸ್ಪತ್ರೆಗೆ ಭೇಟಿನೀಡಿ ಸುಧಾಕರ್‌ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಂದ ಅವರ ಆರೋಗ್ಯದ ಮಾಹಿತಿ ಪಡೆದಿದ್ದೆ, ಈ ವೇಳೆ ಅವರು ಗುಣಮುಖರಾಗುವ ಭರವಸೆ ನನ್ನಲ್ಲಿ ಮೂಡಿತ್ತು.

ಜನಸೇವೆಯಲ್ಲಿ‌ ಅಪಾರ ಕಾಳಜಿ ಮತ್ತು ಬದ್ಧತೆಯಿದ್ದ ವ್ಯಕ್ತಿ ಸುಧಾಕರ್. ಇಂಥವರು ಇನ್ನಷ್ಟು ಕಾಲ ಜನರ ನಡುವೆ ಇರಬೇಕಿತ್ತು. ವೈದ್ಯರ ನಿರಂತರ ಪ್ರಯತ್ನ, ನಮ್ಮೆಲ್ಲರ ಹಾರೈಕೆಯ ಹೊರತಾಗಿಯೂ ಇಂದು ಸುಧಾಕರ್ ಅವರು ನಮ್ಮನ್ನಗಲಿದ್ದಾರೆ. ಇದು ಅತ್ಯಂತ ನೋವಿನ ಗಳಿಗೆ.

ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ನಮ್ಮ ಸಂಪುಟ ಸಹೋದ್ಯೋಗಿ, ನನ್ನ ಆತ್ಮೀಯ ಸ್ನೇಹಿತ ಡಿ. ಸುಧಾಕರ್ ಅವರು ಇಂದು ಕೊನೆಯುಸಿರೆಳೆದ ಸುದ್ದಿ ಅತೀವ ದುಃಖವನ್ನುಂಟು ಮಾಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಹಿರಿಯೂರು ಶಾಸಕರು, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಡಿ. ಸುಧಾಕರ್ ಅವರು ಜನಪರ ಕಾಳಜಿಯುಳ್ಳ ನಾಯಕರಾಗಿದ್ದರು. ಬಡವರ ಬಂಧು ಎಂದೇ ಹೆಸರಾಗಿದ್ದ ಅವರು, ನನ್ನನ್ನು ಭೇಟಿ ಮಾಡಲು ಬಂದಾಗಲೆಲ್ಲ ಕ್ಷೇತ್ರದ ಒಂದಿಲ್ಲೊಂದು ಅಭಿವೃದ್ಧಿ ಕೆಲಸದ ಬಗ್ಗೆ ಮನವಿ ಹಿಡಿದುಕೊಂಡೇ ಬರುತ್ತಿದ್ದರು. ಅವರ ಆ ಗುಣ, ಕ್ಷೇತ್ರದ ಜನರ ಮೇಲಿದ್ದ ಅವರ ಅಪಾರ ಪ್ರೀತಿಯನ್ನು ತೋರಿಸುತ್ತಿತ್ತು.

ಸುಧಾಕರ್ ಅವರು ಇಂದು ಕುಟುಂಬಸ್ಥರು, ಬಂಧುಗಳು ಹಾಗೂ ಅಪಾರ ಬೆಂಬಲಿಗರನ್ನು ಅಗಲಿರುವುದು ತುಂಬಲಾರದ ನಷ್ಟ.

ಭಗವಂತನು ಡಿ. ಸುಧಾಕರ್ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.


Share

You cannot copy content of this page