ಸಮಗ್ರ ಸುದ್ದಿ

ಜಿಬಿಎ ವ್ಯಾಪ್ತಿಯಲ್ಲಿ 11.34 ಲಕ್ಷ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ನೀಡುವ ಗುರಿ – ಮಹೇಶ್ವರ್ ರಾವ್

Share

ಬೆಂಗಳೂರು: ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ಒಟ್ಟು 11,34,988 ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ನೀಡುವ ಗುರಿ ಹೊಂದಲಾಗಿದೆ. ಈ ಉದ್ದೇಶಕ್ಕಾಗಿ ನಗರದಾದ್ಯಂತ 3,391 ಸ್ಥಿರ ಬೂತ್‌ಗಳು, 597 ಸಂಚಾರಿ ತಂಡಗಳು ಹಾಗೂ 464 ಮೊಬೈಲ್ ತಂಡಗಳು ಸೇರಿದಂತೆ ಒಟ್ಟು 4,452 ಲಸಿಕಾ ಕೇಂದ್ರಗಳ ಮೂಲಕ ಲಸಿಕೆ ನೀಡಲು ಯೋಜನೆ ರೂಪಿಸಲಾಗಿದೆ ಎಂದು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ತಿಳಿಸಿದರು.

ನಗರದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಹಮ್ಮಿಕೊಳ್ಳುವ ಕುರಿತು ಇಂದು ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿರುವ ಲಸಿಕಾ ಬೂತ್‌ಗಳ ಮಾಹಿತಿಯನ್ನು ಸಾರ್ವಜನಿಕರಿಗೆ ಸುಲಭವಾಗಿ ದೊರೆಯುವಂತೆ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಬಿಎ ವ್ಯಾಪ್ತಿಯಲ್ಲಿ ನಾಗರಿಕರ ಅನುಕೂಲಕ್ಕಾಗಿ ಪಲ್ಸ್ ಪೋಲಿಯೋ ಲಸಿಕಾ ಕೇಂದ್ರಗಳ ಮಾಹಿತಿಯನ್ನು ಸುಲಭವಾಗಿ ಲಭ್ಯವಾಗುವಂತೆ ಒದಗಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜೂನ್ 28ರಿಂದ ಜುಲೈ 1ರವರೆಗೆ ನಾಲ್ಕು ದಿನಗಳ ಕಾಲ ನಡೆಯಲಿರುವ “ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ”ದ ಅಂಗವಾಗಿ ಎಲ್ಲ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಿ, ಶೇ.100 ಗುರಿ ಸಾಧಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಈ ಸಂಬಂಧ ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳಬೇಕು. ಜೊತೆಗೆ ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ಗಳೊಂದಿಗೆ ಸಮನ್ವಯ ಸಾಧಿಸಿ, ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರೇರೇಪಿಸಬೇಕು ಎಂದು ತಿಳಿಸಿದರು.

ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ *ವೆಂಕಟಾಚಲಪತಿ ಮಾತನಾಡಿ, ನಗರದಾದ್ಯಂತ ಪಲ್ಸ್ ಪೋಲಿಯೋ ಕುರಿತು ನಾಗರಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಕೆಲಸ ಕೈಗೊಳ್ಳಬೇಕು ಎಂದು ಹೇಳಿದರು. ನರ್ಸಿಂಗ್ ಕಾಲೇಜುಗಳು, ವೈದ್ಯಕೀಯ ಕಾಲೇಜುಗಳು ಹಾಗೂ ಪ್ಯಾರಾ ಮೆಡಿಕಲ್ ಕಾಲೇಜುಗಳ ವಿದ್ಯಾರ್ಥಿಗಳನ್ನು ಸ್ವಯಂಸೇವಕರಾಗಿ ಬಳಸಿಕೊಂಡು, ಎಲ್ಲ ಅರ್ಹ ಮಕ್ಕಳಿಗೂ ಪೋಲಿಯೋ ಹನಿ ತಲುಪುವಂತೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ನಗರದ ಬಸ್ ನಿಲ್ದಾಣಗಳು, ಮಾರುಕಟ್ಟೆಗಳು, ರೈಲ್ವೆ ಹಾಗೂ ಮೆಟ್ರೋ ನಿಲ್ದಾಣಗಳು, ಮಾಲ್‌ಗಳು, ಪ್ರಮುಖ ಉದ್ಯಾನವನಗಳು, ಪ್ರವಾಸಿ ತಾಣಗಳು, ಕೊಳಗೇರಿ ಪ್ರದೇಶಗಳು ಸೇರಿದಂತೆ ಜನಸಂದಣಿ ಹೆಚ್ಚಿರುವ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಂಚಾರಿ ಲಸಿಕಾ ತಂಡಗಳನ್ನು ನಿಯೋಜಿಸಿ ಪೋಲಿಯೋ ಹನಿ ನೀಡುವ ಕಾರ್ಯ ಕೈಗೊಳ್ಳಬೇಕು. ವಿಶೇಷವಾಗಿ ಕಟ್ಟಡ ನಿರ್ಮಾಣ ಸ್ಥಳಗಳಿಗೆ ಭೇಟಿ ನೀಡಿ, ಅಲ್ಲಿ ವಾಸಿಸುವ ಮಕ್ಕಳಿಗೆ ಲಸಿಕೆ ನೀಡುವಂತೆ ಸೂಚಿಸಿದರು.

ಮುಖ್ಯ ಆರೋಗ್ಯಾಧಿಕಾರಿ ಡಾ. ಎಸ್.ಎಸ್. ಮದನಿ ಮಾತನಾಡಿ, ನಗರದಲ್ಲಿ 2026ರ ಜೂನ್ 28ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬೂತ್‌ಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆ ನೀಡಲಾಗುವುದು ಎಂದು ತಿಳಿಸಿದರು.

ಅಲ್ಲದೆ, ಜೂನ್ 29ರಿಂದ ಜುಲೈ 1ರವರೆಗೆ ಮನೆ-ಮನೆಗೆ ಭೇಟಿ ನೀಡಿ ಮಕ್ಕಳಿಗೆ ಲಸಿಕೆ ನೀಡಲಾಗುವುದು. ಇದರ ಜೊತೆಗೆ ನಾಲ್ಕು ದಿನಗಳ ಕಾಲ ಹೆಚ್ಚಿನ ಜನಸಂದಣಿ ಇರುವ ಪ್ರದೇಶಗಳು, ಕೊಳಗೇರಿ ಪ್ರದೇಶಗಳು, ವಲಸಿಗರ ವಸತಿ ಪ್ರದೇಶಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಸಂಚಾರಿ ಲಸಿಕಾ ತಂಡಗಳ ಮೂಲಕ ಲಸಿಕೆ ನೀಡಲು ಯೋಜನೆ ರೂಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ನವಜಾತ ಶಿಶುವಿನಿಂದ ಐದು ವರ್ಷದೊಳಗಿನ ಎಲ್ಲಾ ಮಕ್ಕಳೂ ಕಡ್ಡಾಯವಾಗಿ ಎರಡು ಹನಿಗಳ ಪೋಲಿಯೋ ಲಸಿಕೆ ಪಡೆಯಬೇಕು. ಈ ಲಸಿಕೆಯನ್ನು ಕ್ಲಿನಿಕ್‌ಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಹೆರಿಗೆ ಆಸ್ಪತ್ರೆಗಳು, ರೆಫರಲ್ ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳು ಹಾಗೂ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ನೀಡಲಾಗುತ್ತದೆ ಎಂದು ಹೇಳಿದರು.

ಸಭೆಯಲ್ಲಿ ನಗರ ಪಾಲಿಕೆಗಳ ಆಯುಕ್ತರು, ಜಂಟಿ ಆಯುಕ್ತರು, ಆರೋಗ್ಯಾಧಿಕಾರಿಗಳು, ಉಪ ಆರೋಗ್ಯಾಧಿಕಾರಿಗಳು, ಆರೋಗ್ಯ ವೈದ್ಯಾಧಿಕಾರಿಗಳು ಸೇರಿದಂತೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


Share

You cannot copy content of this page