ರಾಜಕೀಯ

ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಭೇಟಿ; ನಾಳೆ ಕಾಂಗ್ರೆಸ್ ಹೈಕಮಾಂಡ್‌ನೊಂದಿಗೆ ಚರ್ಚೆ

Share

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ನಾಳೆ ಕಾಂಗ್ರೆಸ್ ಹೈಕಮಾಂಡ್ ಕರೆದಿರುವ ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ತಮ್ಮನ್ನು ಸಭೆಗೆ ಆಹ್ವಾನಿಸಿದ್ದು, ಸಭೆಯ ನಿಖರವಾದ ವಿಷಯದ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.

ನಾಯಕತ್ವ ಬದಲಾವಣೆಯ ಕುರಿತಾದ ಊಹಾಪೋಹಗಳು ರಾಜಕೀಯದಲ್ಲಿ ಸಹಜ ಎಂದು ಇದೇ ವೇಳೆ ತಿಳಿಸಿದ್ದಾರೆ. ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿಗಳು ಹಿರಿಯ ಸಚಿವರೊಂದಿಗೆ ಇಂದು ಸಂಜೆಯೇ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಮತ್ತೊಂದೆಡೆ, ಹೈಕಮಾಂಡ್ ಸೂಚಿಸಿದರೆ ತಾವೂ ಸಹ ದೆಹಲಿಗೆ ಭೇಟಿ ನೀಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮುಂಬರುವ 2028ರ ಚುನಾವಣೆಯಲ್ಲೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವೇ ಮರಳಿ ಅಧಿಕಾರಕ್ಕೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮೂಲಗಳ ಪ್ರಕಾರ, ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಹಿರಿಯ ನಾಯಕ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಹಿರಿಯ ನಾಯಕರ ಸಭೆ ನಡೆಯಲಿದ್ದು, ರಾಜ್ಯದ ಸಚಿವ ಸಂಪುಟ ವಿಸ್ತರಣೆ ಹಾಗೂ ಮುಂಬರುವ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆಗಳು ನಡೆಯುವ ನಿರೀಕ್ಷೆಯಿದೆ.


Share

You cannot copy content of this page