ಬೆಂಗಳೂರು: ಹೆಚ್ಚುವರಿ ಸಿಬ್ಬಂದಿ ಹಾಗೂ ಯಂತ್ರೋಪಕರಣಗಳನ್ನು ಬಳಸಿಕೊಂಡು ವಿಂಡ್ ಟನಲ್ ಕೆಳಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಹಳೆ ವಿಮಾನ ನಿಲ್ದಾಣ ರಸ್ತೆಯ ಯು.ಆರ್. ರಾವ್ ಉಪಗ್ರಹ ಕೇಂದ್ರದ ಬಳಿಯಿರುವ ವಿಂಡ್ ಟನಲ್ ಜಂಕ್ಷನ್ ಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಕಾಮಗಾರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ಹೆಚ್ಚುವರಿ ಸಿಬ್ಬಂದಿ ಹಾಗೂ ಯಂತ್ರೋಪಕರಣಗಳನ್ನು ಬಳಸಿಕೊಳ್ಳುವಂತೆ ಸೂಚನೆ ನೀಡಿದರು.
ಕೆಳಸೇತುವೆ ಕಾಮಗಾರಿಗೆ ಸಂಬಂಧಿಸಿದಂತೆ ಜಲಮಂಡಳಿಯ ಪೈಪ್‌ಲೈನ್, ಒಳಚರಂಡಿ, ಬೆಸ್ಕಾಂ ಕೇಬಲ್‌ಗಳು, ಓಎಫ್‌ಸಿ ಕೇಬಲ್‌ಗಳು ಸೇರಿದಂತೆ ಇತರೆ ಯುಟಿಲಿಟಿಗಳ ಸ್ಥಳಾಂತರ ಕಾರ್ಯ ಪ್ರಗತಿಯಲ್ಲಿದೆ. 10 ದಿನಗಳೊಳಗೆ ಸ್ಥಳಾಂತರ ಕಾರ್ಯ ಪೂರ್ಣಗೊಳಿಸಿ ತಡೆಗೋಡೆ (ರಿಟೈನಿಂಗ್ ವಾಲ್) ಕಾಮಗಾರಿ ಪ್ರಾರಂಭಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ವಾಹನ ಸಂಚಾರಕ್ಕೆ ಯಾವುದೇ ಅಡಚಣೆ ಆಗದಂತೆ ಜಂಕ್ಷನ್‌ನ ಎರಡೂ ಬದಿಗಳಲ್ಲಿರುವ ರಕ್ಷಣಾ, ಇಸ್ರೋ, ಎನ್.ಎ.ಎಲ್. ಇಲಾಖೆ ಹಾಗೂ ಖಾಸಗಿ ಜಾಗಗಳಲ್ಲಿ ತಾತ್ಕಾಲಿಕ ರಸ್ತೆಗಳನ್ನು ತ್ವರಿತವಾಗಿ ನಿರ್ಮಿಸಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು. ಸಂಚಾರ ದಟ್ಟಣೆ ಉಂಟಾಗದಂತೆ ಕಾಮಗಾರಿಯನ್ನು ನಿರ್ವಹಿಸಬೇಕು. ಜೊತೆಗೆ ಕಾಮಗಾರಿ ನಡೆಯುವ ವೇಳೆ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಕಾಮಗಾರಿ ನಡೆಸುವಂತೆ ಸೂಚಿಸಿದರು.
ಶೇ. 70 ರಷ್ಟು ಕಾಮಗಾರಿ ಪೂರ್ಣ:
ವಿಂಡ್ ಟನಲ್ ಜಂಕ್ಷನ್‌ನಲ್ಲಿ 19 ಕೋಟಿ ರೂ. ವೆಚ್ಚದಲ್ಲಿ 300 ಮೀಟರ್ ಉದ್ದದ ಕೆಳಸೇತುವೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಎರಡೂ ಬದಿಗಳಲ್ಲಿ 7.5 ಮೀಟರ್ ಅಗಲದ 6 ಪಥಗಳ ಕೆಳಸೇತುವೆ ನಿರ್ಮಿಸಲಾಗುತ್ತಿದೆ. ಪ್ರಸ್ತುತ ಒಂದು ಭಾಗದಲ್ಲಿ ಉಪಯುಕ್ತತೆಗಳ ಸ್ಥಳಾಂತರ, ಆರ್.ಸಿ.ಸಿ. ಗೋಡೆ ನಿರ್ಮಾಣ, ಸರ್ವೀಸ್ ರಸ್ತೆ ನಿರ್ಮಾಣ ಹಾಗೂ ಮಧ್ಯಭಾಗದಲ್ಲಿ ಅಳವಡಿಸಲಾಗುವ ಬಾಕ್ಸ್ ಗಳ ತಯಾರಿಕೆ ಸೇರಿದಂತೆ ಶೇ. 70 ರಷ್ಟು ಕಾಮಗಾರಿ ಪೂರ್ಣಗೊಂಡಿದೆ.
ಕೆಳಸೇತುವೆ ಕಾಮಗಾರಿಯ ಹಂತಗಳು:
ಯುಟಿಲಿಟಿಗಳ ಸ್ಥಳಾಂತರ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, 10 ದಿನಗಳೊಳಗೆ ತಡೆಗೋಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ. ನಂತರ ಮಧ್ಯಭಾಗಕ್ಕೆ ಸಿದ್ಧಪಡಿಸಿರುವ ಬಾಕ್ಸ್ ಗಳನ್ನು ಅಳವಡಿಸಿ, ಕೊನೆಯ ಹಂತದಲ್ಲಿ ಸರ್ವೀಸ್ ರಸ್ತೆಗಳನ್ನು ನಿರ್ಮಿಸಲಾಗುವುದು.
ಈ ವೇಳೆ ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್, ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
