ಸಮಗ್ರ ಸುದ್ದಿ

ವರಿಷ್ಠರ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ರಾಜ್ಯ ರಾಜಕಾರಣದಲ್ಲೇ ಮುಂದುವರಿಯುವುದಾಗಿ ಮುಖ್ಯಮಂತ್ರಿ ಸ್ಪಷ್ಟನೆ

Share

ಬೆಂಗಳೂರು: ವರಿಷ್ಠರ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ತಮ್ಮ ರಾಜೀನಾಮೆಯನ್ನು ಅಂಗೀಕರಿಸುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಎರಡು ಬಾರಿ ಮುಖ್ಯಮಂತ್ರಿ, ಎರಡು ಬಾರಿ ವಿರೋಧ ಪಕ್ಷದ ನಾಯಕನಾಗಲು ಅವಕಾಶ ನೀಡಿದ ಕಾಂಗ್ರೆಸ್ ಹಿರಿಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ಹೀಗಾಗಿ ರಾಜ್ಯ ರಾಜಕಾರಣದಲ್ಲೇ ಮುಂದುವರಿಯುವುದಾಗಿ ಸಿದ್ದಾರಾಮಯ್ಯ ತಿಳಿಸಿದ್ದಾರೆ. ರಾಜ್ಯದ ಜನತೆ ಐದು ವರ್ಷಗಳ ಕಾಲ ಶಾಸಕನಾಗಿ ಆಯ್ಕೆ ಮಾಡಿದ್ದಾರೆ. ಇನ್ನೂ ಎರಡು ವರ್ಷ ಅವಧಿ ಇದ್ದು, ಅಲ್ಲಿಯವರೆಗೆ ಕರ್ನಾಟಕ ಹಾಗೂ ಕ್ಷೇತ್ರದ ಜನತೆ ಪರವಾಗಿ ಸೇವೆ ಸಲ್ಲಿಸುವುದಾಗಿ ಹೇಳಿದ್ದಾರೆ.

ಇದೇ ವೇಳೆ, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಅವರು ಈ ಬಗ್ಗೆ ಶಾಸಕಾಂಗ ಪಕ್ಷದ ಸಭೆ ಮತ್ತು ವರಿಷ್ಠರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು. ತಮ್ಮ ರಾಜಕೀಯ ಜೀವನ ಹಾಗೂ ನಡೆದು ಬಂದ ಹಾದಿಯನ್ನು ಸ್ಮರಿಸಿದರು.

ನಟ ರಾಜ್‌ಕುಮಾರ್ ಅಭಿಮಾನಿಗಳನ್ನು ದೇವರು ಎಂದು ಕರೆದಿದ್ದು, ಅದೇ ರೀತಿ ಮತದಾರರೇ ತಮಗೆ ಅಭಿಮಾನಿ ದೇವರಾಗಿದ್ದಾರೆ. ಸಂವಿಧಾನವೇ ನಮ್ಮ ಧರ್ಮ ಎಂದು ತಿಳಿದಿದ್ದೇನೆ ಎಂದು ಹೇಳಿದರು.

2006 ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಬಳಿಕ ಎಲ್ಲಾ ಕಾರ್ಯಕರ್ತರು, ಶಾಸಕರು, ಸಂಸದರು ಪ್ರೀತಿ ತೋರಿದ್ದಾರೆ. ಈ ಹಿನ್ನೆಲೆಯಲ್ಲಿ ಅವರೆಲ್ಲರಿಗೂ ಧನ್ಯವಾದ ಸಲ್ಲಿಸುವುದಾಗಿ ಹೇಳಿದರು. ಗ್ಯಾರಂಟಿ ಯೋಜನೆ ಜಾರಿಯಾದ ಬಳಿಕ ಕರ್ನಾಟಕದ ತಲಾ ಆದಾಯ ಮೊದಲ ಸ್ಥಾನದಲ್ಲಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿ ಬಳಿಕ ಎಲ್ಲಾ ನಾಯಕರು ಒಗ್ಗಟ್ಟು ಪ್ರದರ್ಶನ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, 17 ಬಾರಿ ಆಯವ್ಯಯ ಮಂಡಿಸಿದ ಕೀರ್ತಿಯೂ ಅವರಿಗೆ ಸಲ್ಲುತ್ತದೆ.


Share

You cannot copy content of this page