ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯ ಅವರ ಸಾಧನೆಯನ್ನು ಮಾಜಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಂಡಾಡಿದ್ದಾರೆ.
ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಪ್ರಭಾವಶಾಲಿ ಹಾಗೂ ದೀರ್ಘಾವಧಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಜನಮಾನಸದಲ್ಲಿ ನೆಲೆಸಿದ್ದಾರೆ ಎಂದು ತಿಳಿಸಿದ್ದಾರೆ. ’ದೇವರು ವರನು ಕೊಡಲ್ಲ, ಶಾಪನೂ ಕೊಡಲ್ಲ, ಅವಕಾಶ ಮಾತ್ರ ಕೊಡುತ್ತಾನೆ’ ಕೊಟ್ಟಿರುವ ಅವಕಾಶದಲ್ಲಿ ಏನೂ ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಇದಕ್ಕೆ ಅತ್ಯುತ್ತಮ ಉದಾಹರಣೆ ಸಿದ್ದರಾಮಯ್ಯನವರು ಎಂದು ಅಭಿಪ್ರಾಯಪಟ್ಟಿದ್ದಾರೆ.
ಜನಪರ ಯೋಜನೆಗಳಿಂದ ಹಿಡಿದು ರಾಜ್ಯದಲ್ಲಿ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಅವಿಸ್ಮರಣೀಯ. ಅವರ ಆಡಳಿತದಲ್ಲಿ ಸಚಿವನಾಗಿ ಉಪಮುಖ್ಯಮಂತ್ರಿಯಾಗಿ ಮಾರ್ಗದರ್ಶನ ಪಡೆದುಕೊಂಡಿದ್ದು ನನ್ನ ಭಾಗ್ಯ ಎಂದು ತಿಳಿಸಿದ್ದಾರೆ. ರಾಜ್ಯದ ಪ್ರಗತಿಗಾಗಿ ನಾವೆಲ್ಲರೂ ಒಟ್ಟಾಗಿ ನಡೆಯೋಣ ಎಂದು ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ.
