ಬೆಂಗಳೂರು:ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಘೋಷಿಸಿರುವಂತೆ ಪ್ರತಿ ವರ್ಷ ಜೂನ್ 12 ರಂದು “ವಿಶ್ವ ಬಾಲಕಾರ್ಮಿಕ ವಿರೋಧಿ ದಿನ”ವನ್ನು ಆಚರಿಸಲಾಗುತ್ತಾ ಬರಲಾಗಿದೆ. ಇದರ ಭಾಗವಾಗಿ, ಜೂನ್ 12 ರಂದು ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳು ಹಾಗೂ ಕಚೇರಿಗಳಲ್ಲಿ ಬಾಲಕಾರ್ಮಿಕ ಪದ್ಧತಿ ವಿರೋಧಿ ಪ್ರಮಾಣ ವಚನ ಬೋಧಿಸುವಂತೆ ಕರ್ನಾಟಕ ಸರ್ಕಾರವು ಆದೇಶ ಹೊರಡಿಸಿದೆ.
ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಅವರು ಮೇ 26, ರಂದು ಅಧಿಕೃತ ಸುತ್ತೋಲೆಯನ್ನು ಹೊರಡಿಸಿದ್ದಾರೆ. ರಾಜ್ಯಾದ್ಯಂತ ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮಗಳು, ಮಂಡಳಿಗಳು, ಪ್ರಾಧಿಕಾರಗಳು, ಸಂಸ್ಥೆಗಳು, ನಿರ್ದೇಶನಾಲಯಗಳು ಹಾಗೂ ಶಾಲಾ-ಕಾಲೇಜು ಮತ್ತು ಕಚೇರಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ “ಬಾಲ ಹಾಗೂ ಕಿಶೋರ ಕಾರ್ಮಿಕರಿಂದ ದುಡಿಮೆಯನ್ನು ಬಯಸುವುದಿಲ್ಲವೆಂಬ ಪ್ರಮಾಣ ವಚನ”ವನ್ನು ಬೋಧಿಸಲು ರಾಜ್ಯದ ಎಲ್ಲಾ ಇಲಾಖಾ ಮುಖ್ಯಸ್ಥರುಗಳಿಗೆ ಸೂಚನೆ ನೀಡಲಾಗಿದೆ.
ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಎಲ್ಲಾ ಇಲಾಖಾ ಮುಖ್ಯಸ್ಥರು, ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‍ಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಮಾಜದಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕರಿಂದ ಯಾವುದೇ ರೀತಿಯ ದುಡಿಮೆಯನ್ನು ಬಯಸುವುದಿಲ್ಲ ಎಂಬ ಜಾಗೃತಿ ಮೂಡಿಸುವುದು ಈ ಆದೇಶದ ಮುಖ್ಯ ಉದ್ದೇಶವಾಗಿದೆ ಎಂದು ಪ್ರಕಟಣೆ ತಿಳಿಸಿದೆ.
